ಚಿಕ್ಕಮಗಳೂರಿನ ಎರಡು ತಾಲೂಕಿನಲ್ಲಿ ಮುಂದಿನ 48 ಗಂಟೆ ರೆಡ್ ಅಲರ್ಟ್
ಚಿಕ್ಕಮಗಳೂರು, ಆಗಸ್ಟ್ 05: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಎರಡು ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಮೂಡಿಗೆರೆ ಹಾಗೂ ಶೃಂಗೇರಿ ತಾಲೂಕಿನಲ್ಲಿ ಮುಂದಿನ 48 ಗಂಟೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಎರಡು ದಿನಗಳಿಂದ ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿರುವ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಇಲ್ಲಿಯವರೆಗೂ ಜಿಲ್ಲೆಯಲ್ಲಿ ಹತ್ತು ಮನೆಗಳು ಮರ ಬಿದ್ದು ಹಾನಿಯಾಗಿವೆ. ಇದೀಗ ಮಳೆ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ.
ಮೆಸ್ಕಾಂ, ಪಿಡಬ್ಯೂ ಡಿ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಮಳೆ ಕೆಲಸದಲ್ಲಿ ನಿರತರಾಗಿದ್ದಾರೆ. ಸದ್ಯಕ್ಕೆ ನದಿ ಅಕ್ಕಪಕ್ಕದಲ್ಲಿರುವ ಮನೆಗಳಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ತುಂಗಾ, ಭದ್ರಾ, ಹೇಮಾವತಿ ನದಿ ಪ್ರದೇಶದಲ್ಲಿರುವ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಮೂಡಿಗೆರೆ ತಾಲೂಕಿನ ಮಲೆಮನೆ ಗ್ರಾಮದ ಹತ್ತು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಬಾಡಿಗೆ ಮನೆ ಹಾಗೂ ಸಂಬಂಧಿಕರ ಮನೆಗೆ ತೆರಳಿದ ಜನರು ತೆರಳಿದ್ದಾರೆ. ಕಳೆದ ವರ್ಷವೂ ಆಗಸ್ಟ್ ತಿಂಗಳಿನಲ್ಲಿ ಗುಡ್ಡ ಕುಸಿದು ಮನೆಗಳು ಕೊಚ್ಚಿ ಹೋಗಿದ್ದವು. ಇದೀಗ ಮುಂಜಾಗ್ರತಾ ಕ್ರಮವಾಗಿ ಜನರನ್ನು ಸ್ಥಳಾಂತರಿಸಲಾಗಿದೆ.