ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಖ್ಯಮಂತ್ರಿಯನ್ನು ಕುರಿ- ತೋಳದ ಕತೆಗೆ ಹೋಲಿಸಿದ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಡಿ.3: ರಾಜ್ಯದಲ್ಲಿ ಓಮಿಕ್ರಾನ್ ಆತಂಕದ ಮಧ್ಯೆಯೇ ವಿಧಾನ ಪರಿಷತ್ತಿನ 25 ಕ್ಷೇತ್ರಗಳಿಗೆ ಡಿ.10ರಂದು ಚುನಾವಣೆ ನಡೆಯುತ್ತದೆ. ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಎಲ್ಲ ಪಕ್ಷಗಳ ನಾಯಕರು ಪರಸ್ಪರ ಟೀಕೆಗಳಲ್ಲಿ ನಿರತರಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಧ್ಯಮ ಗೋಷ್ಠಿ ನಡೆಸಿದ್ದಾರೆ.

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗುತ್ತಿಗೆದಾರರ ಸಂಘ ಪ್ರಧಾನಿಯವರಿಗೆ ಪತ್ರ ಬರೆದು ಟೆಂಡರ್‌ಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದೆ. ಆದರೆ, ಇದುವರೆಗೂ ಪ್ರಧಾನಿಯವರಾಗಲೀ, ಮುಖ್ಯಮಂತ್ರಿಯವರಾಗಲೀ ಇದನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

 Siddaramaiah slams CM Basavaraj Bommai for not taking any action on Contractors Letter to PM

ಟೆಂಡರ್‌ಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಇಲಾಖಾ ಪ್ರಧಾನ ಕಾರ್ಯದರ್ಶಿಯಿಂದ ತನಿಖೆಗೆ ಆದೇಶಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಒಂದು ಆಯೋಗ ರಚಿಸಬೇಕು. ನಮ್ಮ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಆಗಿದ್ದರೆ ಆ ಬಗ್ಗೆ ಕೂಡ ತನಿಖೆ ನಡೆಸಲಿ. ಆದರೆ ಸರ್ಕಾರಕ್ಕೆ ಧಮ್ ಇಲ್ಲ. ಕುರಿ ಕಾಯೋ ತೋಳ ಸಂಬಳ ಬೇಡ ಎಂದಂತೆ ಅಧಿಕಾರಿಗಳ ಮೂಲಕ ತನಿಖೆಗೆ ಆದೇಶಿಸಲಾಗಿದೆ. ಕುರಿ ಕಾಯೋ ತೋಳ ಸಂಬಳ ಬೇಡ ಎಂಬ ಗಾದೆಯಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿಲುವು ತೆಗೆದುಕೊಂಡಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮುಖ್ಯಮಂತ್ರಿ ಆರೋಪಿಸುತ್ತಾರೆ. ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಆಗಿದ್ದರೆ ಆ ಬಗ್ಗೆ ಕೂಡ ತನಿಖೆ ನಡೆಸಲಿ. ಆದರೆ ಅದನ್ನೂ ಮಾಡದೆ ಸರ್ಕಾರಕ್ಕೆ ಧಮ್ ಇಲ್ಲ ಎಂಬುದನ್ನು ತೋರಿಸುತ್ತಿದ್ದಾರೆ ಎಂದರು.

ಪ್ರಧಾನಿಯಿಂದ ದಾರಿ ತಪ್ಪಿಸುವ ಕೆಲಸ:

ಪೆಟ್ರೋಲ್, ಡೀಸೆಲ್ , ಅಡುಗೆ ಅನಿಲ ದರ ಏರಿಕೆ ವಿಚಾರದಲ್ಲಿ ಮೋದಿಯವರು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರು ದೇಶದ ಜನರಿಗೆ ಸತ್ಯ ಹೇಳಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ಐದು ರಾಜ್ಯಗಳ ಚುನಾವಣೆಯಲ್ಲಿ ಸೋತ ಬಳಿಕ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿದೆ. ಮುಂಬರುವ ವಿಧಾನಸಭೆ ಚುನಾವಣೆಗಳಲ್ಲಿ ಸೋಲುವ ಭಯದಿಂದ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದೆ ಕಾಯಿದೆ ವಾಪಸ್ ಪಡೆದಿದ್ದಾರೆ. ಬಿಜೆಪಿ ರೈತ ಮತ್ತು ಜನ ವಿರೋಧಿ ಪಕ್ಷ. ಮೋದಿಯವರು ಪ್ರಧಾನಿಯಾಗಿ ಎಂಟು ವರ್ಷಗಳಾದರೂ ಸ್ಥಳೀಯ ಸಂಸ್ಥೆಗಳಿಗೆ ಹಣಕಾಸು ಶಕ್ತಿ ತುಂಬಲಿಲ್ಲ. ಯಾವುದೇ ಕಾರ್ಯಕ್ರಮವ ರೂಪಿಸಲಿಲ್ಲ ಎಂದು ಟೀಕಿಸಿದರು.

ಚಿಕ್ಕಮಗಳೂರು ಕ್ಷೇತ್ರದಿಂದ ಕಳೆದ ಬಾರಿ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಹೋದ ಪ್ರಾಣೇಶ್ ಒಂದು ದಿನವೂ ಪಂಚಾಯತ್ ರಾಜ್ ವ್ಯವಸ್ಥೆ ಕುರಿತು ಮಾತಾಡಿಲ್ಲ. ಯಾವುದೇ ಪಂಚಾಯತಿಗೆ ಹೋಗಿಲ್ಲ. ಚಿಕ್ಕಮಗಳೂರು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗಾಯತ್ರಿ ಶಾಂತೇಗೌಡರ ಗೆಲುವು ಖಚಿತ. ಅದೇ ರೀತಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಯಾವುದೇ ಟೇಬಲ್‌ಗೆ ಹೋದರೂ ಕಾಸು:

'ರಾಜ್ಯದಲ್ಲಿ ಯಾವುದೇ ಸರ್ಕಾರಿ ಕಚೇರಿಗೆ ಹೋಗಿ ಟೇಬಲ್ ಗುದ್ದಿದರೆ ಕಾಸು ಕೇಳುತ್ತಾರೆ. ಇಂತಹ ದುಸ್ಥಿತಿ ನಿರ್ಮಾಣವಾಗಿದೆ. ಇದು ಸರ್ಕಾರ ಸೃಷ್ಟಿಸಿರುವ ಪರಿಸ್ಥಿತಿ. ಬಿಜೆಪಿಯ ಹಿರಿಯ ನಾಯಕರಾದ ಯತ್ನಾಳ್ ಹಾಗೂ ವಿಶ್ವನಾಥ್ ಅವರು ಸರ್ಕಾರದ ವಿರುದ್ಧವೇ ಆರೋಪ ಮಾಡಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ರಾಜ್ಯದಲ್ಲಿ ಇಂತಹ ಭ್ರಷ್ಟ ಆಡಳಿತವನ್ನು ಹಿಂದೆ ಯಾರೂ ಕಂಡಿರಲಿಲ್ಲ. ಚುನಾವಣೆ ಸಮಯದಲ್ಲಿ ಯಾರೂ, ಯಾವುದೇ ದೂರು ನೀಡದಿದ್ದರೂ ಪ್ರಧಾನಿಗಳು ಬಂದು ನಮ್ಮ ಸರ್ಕಾರವನ್ನು 10 ಪರ್ಸೆಂಟ್ ಸರ್ಕಾರ ಎಂದು ಹೇಳಿದ್ದರು. ನಾವು ಆಗ ಅದರ ವಿರುದ್ಧ ಸವಾಲು ಹಾಕಿದೆವು. ಅವರ ಸರ್ಕಾರ ಬಂದ ನಂತರ 10 ಪರ್ಸೆಂಟ್ ಲಂಚ ಕೊಟ್ಟಿರುವವರಿಂದ ದೂರು ತೆಗೆದುಕೊಂಡು ವಿಚಾರಣೆ ನಡೆಸಿ ನಾವು ತಪ್ಪು ಮಾಡಿದ್ದರೆ ಶಿಕ್ಷೆ ಕೊಡಿಸಬಹುದಿತ್ತು. ಶಿಕ್ಷೆ ನೀಡುವುದಿರಲಿ ತನಿಖೆ ನಡೆಸಲು ಹೋಗಲಿಲ್ಲ. ಪ್ರಧಾನಿಗಳು ಯಾವುದೇ ದಾಖಲೆ ಇಲ್ಲದೆ ರಾಜಕೀಯವಾಗಿ ಆ ಆರೋಪ ಮಾಡಿದ್ದರು. ಆದರೆ ಈಗ ರಾಜ್ಯದ ಗುತ್ತಿಗೆದಾರರು ಪ್ರಧಾನಿಗೆ ಪತ್ರ ಬರೆದು ರಾಜ್ಯ ಬಿಜೆಪಿ ಸರ್ಕಾರದ 40 ಪರ್ಸೆಂಟ್ ಲಂಚದ ಹಾವಳಿ ಬಗ್ಗೆ ದೂರಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಅಷ್ಟೆಲ್ಲ ಲಂಚ ಕೊಟ್ಟು ನಮ್ಮಿಂದ ಗುಣಮಟ್ಟದ ಕಾಮಗಾರಿ ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.

English summary
Siddaramaiah slams CM Basavaraj Bommai for not taking serious actions on contractors letter to PM Modi on kickback charge. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X