ಚಾರ್ಮಾಡಿ ಘಾಟ್‌ನ ಅಪಾಯದ ಸ್ಥಳದಲ್ಲಿ ಮುಂದುವರೆದ ಪ್ರವಾಸಿಗರ ಹುಚ್ಚಾಟ
ಚಿಕ್ಕಮಗಳೂರು, ಜುಲೈ, 26: ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಹುತೇಕ ನದಿ, ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಅಲ್ಲದೆ ಕೆಲವೆಡೆ ಬೆಟ್ಟ, ಗುಡ್ಡಗಳು ಕೂಡ ಕುಸಿದಿವೆ. ಆದ್ದರಿಂದ ಮುಂಜಾಗ್ರತೆಗಾಗಿ ಯಾವುದೇ ಅನಾಹುತಗಳು ಸಂಭವಿಸಬಾರದು ಅನ್ನುವ ನಿಟ್ಟಿನಲ್ಲಿ ಮಳೆ ಕಡಿಮೆಯಾಗುವವರೆಗೂ ಜಿಲ್ಲೆ ಪ್ರವಾಸ ನಿಲ್ಲಿಸಿ ಎಂದು ಚಿಕ್ಕಮಗಳೂರು ಎಸ್‌ಪಿ ಪ್ರವಾಸಿಗರಲ್ಲಿ ಮನವಿ ಮಾಡಿದ್ದರು. ಆದರೂ ಕೂಡ ಇಂದು ಚಾರ್ಮಾಡಿ ಘಾಟ್‌ನಲ್ಲಿ ಪ್ರವಾಸಿಗರು ಪುಂಡಾಟ ಮೆರೆದಿದ್ದಾರೆ.
ಇಂದು ಪ್ರವಾಸಿಗರು ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಡೇಂಜರ್ ಬಂಡೆ ಮೇಲೆ ಹತ್ತಿ ಸೆಲ್ಪೀ ಕ್ಲಿಕ್ಕಿಸಿಕೊಳ್ಳುವ ಮೂಲಕ ಹುಚ್ಚಾಟ ಮೆರೆದಿದ್ದಾರೆ. ಇಲ್ಲಿಂದ ಸ್ವಲ್ಪ ಜಾರಿದರೂ ದೊಡ್ಡ ಮಟ್ಟದ ಅಪಾಯ ಸಂಭವಿಸುವುದಂತೂ ಗ್ಯಾರಂಟಿ. ಈಗಾಗಲೇ ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ಜಲಪಾತದಲ್ಲಿ ಬಿದ್ದು ಪ್ರಾಣ ಕಳೆದುಕೊಂಡ ಘಟನೆಯೂ ನಡೆದಿದೆ.

ಜಿಲ್ಲಾಡಳಿತ, ಪೊಲೀಸ್ ಬೇಡ ಅಂತಾ ಮನವಿ ಮಾಡಿದ್ದರೂ ಕೂಡ ಪ್ರವಾಸಿಗರು ಮಾತ್ರ ಚಾರ್ಮಾಡಿ ಘಾಟಿಯ ಅಪಾಯದ ಸ್ಥಳದಲ್ಲಿರುವ ಕಲ್ಲು, ಬಂಡೆಗಳ ಮೇಲೆ ನಿಂತು ಫೋಟೋ ತೆಗೆಸಿಕೊಳ್ಳುವ ಕ್ರೇಜಿಗೆ ಬಿದ್ದಿದ್ದಾರೆ.
ಜನರು, ಪ್ರವಾಸಿಗರಿಗೆ ಪ್ರಮುಖ ಸೂಚನೆ
2023 ನೇ ಮುಂಗಾರು ಮಳೆ ಪ್ರಾರಂಭವಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಬಹುತೇಕ ಹಳ್ಳ, ಕೆರೆ, ನದಿಗಳು ತುಂಬಿ ಅಪಾಯಕಾರಿ ಮಟ್ಟ ತಲುಪಿದ್ದು, ತುಂಗಾನದಿ, ಭದ್ರಾನದಿ, ಹೇಮಾವತಿ ನದಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿನ ನದಿಗಳು ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡಲಾಗಿದೆ.
ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು. ಮಕ್ಕಳು, ಸಾರ್ವಜನಿಕರು ವಿದ್ಯುತ್ ಕಂಬ, ಕಟ್ಟಡಗಳು, ಮರಗಳ ಹತ್ತಿರ, ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳನ್ನು ತಲುಪುವುದು. ವಿದ್ಯಾರ್ಥಿಗಳ ಪೋಷಕರು ಹಾಗೂ ಶಾಲಾ ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ನಿಂತಿರುವ ತಗ್ಗು ಪ್ರದೇಶ, ಕೆರೆ, ನದಿಗಳ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು. ಹಿರಿಯ ನಾಗರೀಕರು ಕೆರೆ, ನದಿಗಳ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು. ಹೊರಗೆ ತೆರಳುವುದು ಅನಿವಾರ್ಯವಿದ್ದಲ್ಲಿ ಕುಟುಂಬದ ಸದಸ್ಯರೊಂದಿಗೆ ತೆರಳತಕ್ಕದ್ದು ಎಂದು ಜಿಲ್ಲಾಡಳಿತ ತಿಳಿಸಿದೆ.
ಅತಿಯಾದ ಮಳೆಯಿಂದ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಚಾರಣಿಗರು ಟ್ರಕ್ಕಿಂಗ್ ಮಾಡುವುದನ್ನು ತಾತ್ಕಾಲಿಕವಾಗಿ ಮುಂದೂಡುವುದು. ಹೋಂ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರಕ್ಕಿಂಗ್ ಅನ್ನು ಸದ್ಯಕ್ಕೆ ಸ್ಥಗಿತಗೊಳಿಸುವುದು. ರಾಜ್ಯದ ವಿವಿಧ ಸ್ಥಳಗಳಿಂದ ಚಿಕ್ಕಮಗಳೂರು ಜಿಲ್ಲೆಗೆ ಬರುವ ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲಾ ಪ್ರವಾಸವನ್ನು ತಾತ್ಕಾಲಿಕವಾಗಿ ಮುಂದೂಡುವುದು.
ಮೇಲ್ಕಂಡ ಸೂಚನೆಗಳನ್ನು ಪಾಲಿಸುವ ಮೂಲಕ ಸಾರ್ವಜನಿಕರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಮೀನಾ ನಾಗರಾಜ್ ಸಿ.ಎನ್. ತಿಳಿಸಿದ್ದರು.












Click it and Unblock the Notifications