ಚಿತ್ರದುರ್ಗ: ಶಾಲೆಯಲ್ಲಿ ಬಿಸಿಯೂಟ ಸೇವಿಸಿ 60 ವಿದ್ಯಾರ್ಥಿಗಳು ಅಸ್ವಸ್ಥ
ಚಿತ್ರದುರ್ಗ, ಡಿಸೆಂಬರ್, 27: ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ 60 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ತಾಲೂಕಿನ ಬೀರಾವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ (ಡಿಸೆಂಬರ್ 27) ಮಧ್ಯಾಹ್ನ ಮಕ್ಕಳಿಗೆ ಬಿಸಿಯೂಟ ಬಡಿಸಲಾಗಿತ್ತು. ಈ ಬಿಸಿಯೂಟ ಸೇವನೆ ಬಳಿಕ 60ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡಿದೆ.

ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿಗಳು
ಹಲವು ವಿದ್ಯಾರ್ಥಿಗಳು ಕುಸಿದು ಬಿದ್ದು ಅಸ್ವಸ್ಥರಾಗಿದ್ದಾರೆ. ಕೂಡಲೇ ಬಿಸಿಯೂಟ ಸೇವನೆಯಿಂದ ಅಸ್ವಸ್ಥರಾದಂತಹ ಶಾಲೆಯ ವಿದ್ಯಾರ್ಥಿಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯಕ್ಕೆ ಚಿಕಿತ್ಸೆಯ ಬಳಿಕ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಈ ವಿಷಯ ತಿಳಿದು ಚಿತ್ರದುರ್ಗ ತಾಲೂಕಿನ ಬೀರಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ ಎನ್ನಲಾಗಿದೆ.












Click it and Unblock the Notifications