Chitradurga Constituency: ಒಬ್ರಲ್ಲ, ಇಬ್ರಲ್ಲ ಲಕ್ಷಾಂತರ ಕಾರ್ಯಕರ್ತರ ಜೊತೆ ತೆರಳಿ ನಾಮಪತ್ರ ಸಲ್ಲಿಸಿದ ಕೈ ಅಭ್ಯರ್ಥಿ
ಚಿತ್ರದುರ್ಗ, ಏಪ್ರಿಲ್, 04: ಲೋಕಸಭೆ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆ ಆಗಿದ್ದು, ಬಹುತೇಕ ಕ್ಷೇತ್ರಗಳಿಗೂ ಎಲ್ಲಾ ಪಕ್ಷಗಳಿಂದಲೂ ಅಭ್ಯರ್ಥಿಗಳ ಘೋಷಣೆ ಆಗಿದೆ. ಹಾಗೆಯೇ ನಾಮಪತ್ರ ಸಲ್ಲಿಸುತ್ತಿದ್ದಾರೆ. ಹಾಗೆಯೇ ಇದೀಗ ಕೋಟೆ ನಾಡು ಚಿತ್ರದುರ್ಗ ಕ್ಷೇತ್ರದಲ್ಲಿ ಚುನಾವಣೆಯ ಕಾವು ರಂಗೇರುತ್ತಿದ್ದು, ಇಂದು ಉಮೇದುವಾರಿಕೆ ಸಲ್ಲಿಸಲು ಕೊನೆ ದಿನವಾಗಿದ್ದ ಹಿನ್ನೆಲೆಯಲ್ಲಿ ಇತ್ತ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಜಿಲ್ಲಾಧಿಕಾರಿ ಕಚೇರಿಗೆ ತೆರೆಳಿ ಚುನಾವಣೆ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಬೆಳಗ್ಗೆ 11 ಗಂಟೆಗೆ ನಗರದ ಶ್ರೀ ನೀಲಕಂಠೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ವಾಹನಗಳಲ್ಲಿ ಲಕ್ಷಾಂತರ ಕಾರ್ಯಕರ್ತರ ಜೊತೆ ನಗರದ ಪ್ರಮುಖ ಬೀದಿಗಳಲ್ಲಿ ಹಾಗೂ ಜಿಲ್ಲಾಧಿಕಾರಿ ಕಚೇರಿಯವರೆಗೂ ಬೃಹತ್ ರೋಡ್ ಶೋ ನಡೆಸಿ, ಶಕ್ತಿ ಪ್ರದರ್ಶನ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರಿಗೆ ನಾಮಪತ್ರ ಸಲ್ಲಿಸಲು ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ಟಿ. ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ಟಿ.ಬಿ.ಜಯಚಂದ್ರ, ಪಾವಗಡ ವೆಂಕಟೇಶ್, ಕೆ.ಸಿ.ವೀರೇಂದ್ರ ಪಪ್ಪಿ, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಶಾಸಕ
ಎ.ವಿ.ಉಮಾಪತಿ ಸಾಥ್ ನೀಡಿದರು.
ನಾಮಪತ್ರ ಸಲ್ಲಿಸಿದ ಬಳಿಕ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಬಹಿರಂಗ ಸಭೆ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ನಾಯಕರು ಚಂದ್ರಪ್ಪ ಪರ ಮತ ಯಾಚನೆ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಎದುರಾಳಿ ಬಗ್ಗೆ ತಲೆಕೆಡಿಸಿಕೊಂಡಿಲ್ಲ: ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರು ಐದು ಗ್ಯಾರಂಟಿ ಯೋಜನೆಗಳು ಮತ್ತು ಜ್ಯಾತ್ಯಾತೀತ ತತ್ವದ ಮೇಲೆ ಚುನಾವಣೆ ಎದುರಿಸುತ್ತಿದ್ದೇವೆ. ನಮ್ಮ ರಾಜಕೀಯ ಎದುರಾಳಿ ಯಾರು ಎಂಬುದು ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ಗುರಿ ಹೊಂದಿದ್ದೆವೆ. ಬೇರೆ ಪಕ್ಷಗಳ ಬಗ್ಗೆ ನಾವು ಟೀಕಿಸುವುದಿಲ್ಲ. ನನ್ನ ಮತ ಕ್ಷೇತ್ರದಲ್ಲಿ ಏಳು ಜನ ಶಾಸಕರಿದ್ದಾರೆ. ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಹಾಗೂ ಎ.ನಾರಾಯಣಸ್ವಾಮಿ ಯಾರೇ ಆಗಿರಲಿ ಅವರೆಲ್ಲರೂ ನಮ್ಮ ಎದುರಾಳಿಗಳೇ. ನಾವು ಅವರನ್ನು ಗೌರವಿಸುತ್ತೇವೆ ಹೊರತು ಟೀಕಿಸುವುದಿಲ್ಲ, ನಮ್ಮ ಸಮಯವನ್ನು ಸಂಘಟನೆಗೆ ಬಳಸಿಕೊಳ್ಳಲಾಗುತ್ತೇವೆ ಎಂದು ಹೇಳಿದರು.
ಉಮೇದುವಾರಿಕೆ ಸಲ್ಲಿಸಿದ ಕಾರಜೋಳ: ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು ಇಂದೇ (ಗುರುವಾರ, ಏ.4) ಕೊನೆಯ ದಿನವಾದ ಹಿನ್ನೆಲೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಆಗಿರುವ ಗೋವಿಂದ ಕಾರಜೋಳ ಅವರು ಅಪಾರ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರೆಳಿ ಉಮೇದುವಾರಿಕೆ ಸಲ್ಲಿಸಿದರು.
ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ನಗರದ ಕನಕ ಪ್ರತಿಮೆ, ಅಂಬೇಡ್ಕರ್, ಮದಕರಿ ನಾಯಕ ವಿವಿಧ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ಬಳಿಕ ಶ್ರೀ ನೀಲಕಂಠೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಯಕರ್ತರ ಬೃಹತ್ ರೋಡ್ ಶೋ ನಡೆಸಿ, ಉಮೇದುವಾರಿಕೆ ಸಲ್ಲಿಸಿದರು.
ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರಿಗೆ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ, ಬಿ.ಡಿ.ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಗಾಲಿ ಜನಾರ್ಧನ ರೆಡ್ಡಿ, ಶಾಸಕರಾದ ಎಂ.ಚಂದ್ರಪ್ಪ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಮಾಜಿ ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ, ಜಿಲ್ಲಾಧ್ಯಕ್ಷ ಎ.ಮುರಳಿ, ಕ್ಷೇತ್ರದ ಚುನಾವಣಾ ಉಸ್ತುವಾರಿ ಎಸ್. ಲಿಂಗಮೂರ್ತಿ, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಕೆ.ಎಸ್.ನವೀನ್, ಜೆಡಿಎಸ್ ರಾಜ್ಯ ಪ್ರಕಾರ್ಯದರ್ಶಿ ಬಿ.ಕಾಂತರಾಜ್, ಜಿಲ್ಲಾಧ್ಯಕ್ಷ ಎಂ.ಜಯಣ್ಣ, ಮಾಜಿ ಅಧ್ಯಕ್ಷ ಯಶೋಧರ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ್, ಪ್ರಮುಖರು ಮೆರವಣಿಗೆಯಲ್ಲಿ ಭಾಗವಹಿಸಿ ಅಭ್ಯರ್ಥಿಗೆ ಸಾಥ್ ನೀಡಿದರು.












Click it and Unblock the Notifications