Chitradurga Constituency: ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಮತಯಾಚನೆ ಹೇಗಿರಲಿದೆ? ಸಚಿವ ಡಿ.ಸುಧಾಕರ್ ಹೇಳಿದ್ದೇನು?
ಚಿತ್ರದುರ್ಗ, ಮಾರ್ಚ್, 31: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಅನುದಾನ ಘೋಷಿಸಿ ಈವರೆಗೆ ಅನುದಾನ ನೀಡಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲ ಇದೆ, ಆದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಇದನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತತವಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ರಾಜ್ಯಕ್ಕೆ ಹೆಚ್ಚು ಸ್ಥಾನ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಜನರು ಸಹ ಇದನ್ನು ಅರ್ಥಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದರು.

ಅಲ್ಲದೆ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರು ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸಲಿದ್ದು, ಅದೇ ದಿನ ಹಳೆ ಮಾಧ್ಯಮಿಕ ಶಾಲಾ ಮೈದಾನದಲ್ಲಿ ನಡೆಯಲಿರುವ ಸಭೆಯಲ್ಲಿ ಸಿಎಂ ಮತ್ತು ಡಿಸಿಎಂ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ನಂತರ ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಚಿತ್ರದುರ್ಗ ಕಾಂಗ್ರೆಸ್ ಭದ್ರಕೋಟೆ ಆಗಿದೆ. ಮತದಾರರು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಒಪ್ಪಿದ್ದಾರೆ. ಜನ ಕಲ್ಯಾಣಕ್ಕಾಗಿ ರೂಪಿಸಿದ ಐದು ಗ್ಯಾರೆಂಟಿ ಅನುಷ್ಠಾನ ಮಾಡಿ ಜನರ ನಂಬಿಕೆ ಉಳಿಸಿಕೊಂಡಿದ್ದೇವೆ. ಈ ಚುನಾವಣೆಯಲ್ಲೂ ಜನ ಕೈ ಹಿಡಿಯುವ ವಿಶ್ವಾಸ ಇದೆ. 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಾತಾವರಣ ಇದೆ ಎಂದರು.
ಭದ್ರಾ ಮೇಲ್ದಂಡೆಗೆ ಅನುದಾನ ಘೋಷಿಸಿ ಈವರೆಗೆ ಕೊಟ್ಟಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಆದರೂ ಕೇಂದ್ರ ಸ್ಪಂದಿಸಿಲ್ಲ. ಇದನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡಲಾಗುವುದು ಎಂದು ಹೇಳಿದ ಅವರು, ನೀಲಕಂಠೇಶ್ವರ ದೇವಸ್ಥಾನದಿಂದ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿ ನಂತರ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಬಹಿರಂಗ ಸಭೆ ನಡೆಯಲಿದೆ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಮಾತನಾಡಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭದ್ರ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದ್ದರು. ಕಾಯ್ದೆ ಪ್ರಕಾರ 12 ಸಾವಿರ ಹೆಕ್ಟೇರ್ ಪ್ರದೇಶಕ್ಕಿಂತ ಹೆಚ್ಚಿದ್ದರೆ ಅದನ್ನು ರಾಷ್ಟ್ರೀಯ ಯೋಜನೆ ಆಗಬೇಕು ಆದರೂ ಮಾಡಿಲ್ಲ. ಅನುದಾನವನ್ನೂ ಕೊಟ್ಟಿಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸಿದ್ದರಾಮಯ್ಯ 500 ಕೋಟಿ ರೂಪಾಯಿ ಕೊಟ್ಟಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಜಿಲ್ಲೆಗೆ ಯಾವ ಕೊಡುಗೆ ನೀಡಿದೆ ಎಂದು ಪ್ರಶ್ನಿಸಿದ ಅವರು, ನಾನು ಮೂಡಿಗೆರೆಯಲ್ಲಿ ಸ್ಪರ್ಧೆ ಮಾಡಿದ್ದೆ ಅಷ್ಟೇ. ಮೂಡಿಗೆರೆ ಚಂದ್ರಪ್ಪ ಅಲ್ಲ. ಹೊಸದುರ್ಗದ ಪಕ್ಕದಲ್ಲೇ ಇರುವ ತರೀಕೆರೆ ತಾಲೂಕಿನವನು. ನಾನೇನು 500 ಕಿಲೋ ಮೀಟರ್ ದೂರದಿಂದ ಬಂದಿಲ್ಲ. ಕಳೆದ ಚುನಾವಣೆಯಲ್ಲಿ ಸೋತರೂ ಪಲಾಯನ ಮಾಡದೆ ಜನ ಸಂಪರ್ಕದಲ್ಲಿದ್ದೆ. ಈ ಬಾರಿ ಜನರು ಕೈ ಹಿಡಿಯಲಿದ್ದಾರೆ ಎಂದು ಭವಿಷ್ಯ ನುಡಿದರು.
ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕ ಟಿ ರಘುಮೂರ್ತಿ, ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಮುಖಂಡರಾದ ಹಾಲಸ್ವಾಮಿ, ಶಿವಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications