ಚಿತ್ರದುರ್ಗ ಕಲುಷಿತ ನೀರು ಸೇವೆನೆ ಪ್ರಕರಣ: ಕುಡಿಯುವ ನೀರು ಸರಬರಾಜು ಅಧಿಕಾರಿ ಸಸ್ಪೆಂಡ್
ಚಿತ್ರದುರ್ಗ, ಆಗಸ್ಟ್, 03: ನಗರದ ಕವಾಡಿಗರಹಟ್ಪಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆಯ ಕುಡಿಯುವ ನೀರು ಸರಬರಾಜು ಸಹಾಯಕ ಅಧಿಕಾರಿಯನ್ನು ಸಸ್ಪೆಂಡ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ವಾಂತಿ, ಭೇದಿ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ಮಾಡಿದ್ದು, ಇದರಲ್ಲಿ ಕಾಲರಾ ಮಾದರಿ ಅಂಶ ಪತ್ತೆಯಾಗಿದೆ. ಅಲ್ಲದೆ ವರದಿಯಲ್ಲಿ ಈ ನೀರು ಕುಡಿಯಲು ಯೋಗ್ಯವಲ್ಲ ಎಂದು ಚಿತ್ರದುರ್ಗ ಜಿಲ್ಲಾ ಸರ್ವೇಕ್ಷಣಾ ಘಟಕ ವರದಿಯಲ್ಲಿ ಉಲ್ಲೇಖಿಸಿದೆ. ಇನ್ನು ಪ್ರಕರಣ ಸಂಬಂಧ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಾಕಿ ಇದೆ.

ಸಿ.ಹೆಚ್.ಪ್ರಕಾಶ್ ಬಾಬು ಸಸ್ಪೆಂಡ್
ಕಲುಷಿತ ನೀರು ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆಯ ಕುಡಿಯುವ ನೀರು ಸರಬರಾಜು ಸಹಾಯಕ ಅಧಿಕಾರಿ ಸಿ.ಹೆಚ್.ಪ್ರಕಾಶ್ ಬಾಬು ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ತನಿಖೆಗೆ ಆದೇಶಿಸಿದ್ದ ಸರ್ಕಾರ
ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಮಹಿಳೆ ಸೇರಿ ಇಬ್ಬರು ಮೃತಪಟ್ಟಿದ್ದು, 70ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಕುರಿತಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿತ್ತು.
ಘಟನೆ ಕುರಿತಂತೆ ಜಿಲ್ಲಾಡಳಿತದಿಂದ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ತನಿಖೆಗೆ ಆದೇಶಿಸಿದ್ದು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ಈ ತಂಡ ಸ್ಥಳ ಪರಿಶೀಲನೆ ಮಾಡಿ ಮೂರು ದಿನಗಳ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿತ್ತು.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಸೇರಿ ಅನೇಕರು ತನಿಖಾ ತಂಡದಲ್ಲಿದ್ದಾರೆ. ಘಟನೆಯ ಕುರಿತು ವಿಶ್ಲೇಷಣೆ ಮಾಡಿ ತುರ್ತು ತನಿಖಾ ವರದಿಯನ್ನು ನೀಡಲಿದ್ದಾರೆ. ಇದರ ಆಧಾರದ ಮೇರೆಗೆ ತಪ್ಪಿತಸ್ಥರನ್ನು ಪತ್ತೆ ಮಾಡಿ ಕ್ರಮಕೈಗೊಳ್ಳಲು ಆದೇಶಿಸಲಾಗಿತ್ತು
ಅಸ್ವಸ್ಥರ ಆರೋಗ್ಯ ವಿಚಾರಿಸಿದ ಸಚಿವರು
ಇನ್ನು ಕಲುಷಿತ ನೀರು ಸೇವಿಸಿ ಮೃತರಾದವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು. ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ ಹೇಳಿದ್ದರು.
ಮಂಗಳವಾರ ರಾತ್ರಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಧ್ಯರಾತ್ರಿಯಿಂದಲೇ ಕವಾಡಿಗರಹಟ್ಟಿಯಲ್ಲಿ ಕೆಲವು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಂತರ ಮುಂಜಾನೆಯಿಂದ ಗ್ರಾಮದ ಬಹು ಜನರಿಗೆ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದಿದೆ ಎಂದಿದ್ದರು.












Click it and Unblock the Notifications