ಹಿರಿಯೂರು: ಯರಬಳ್ಳಿ ಗ್ರಾ.ಪಂ. ಪಿಡಿಒ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ಆದೇಶ-ಕಾರಣ ಏನು?
ಹಿರಿಯೂರು, ಸೆಪ್ಟೆಂಬರ್, 08: ಹಿರಿಯೂರು ತಾಲ್ಲೂಕಿನ ಯರಬಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹಣ ದುರುಪಯೋಗ ಪಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಇಂದಿನ ಪಿಡಿಓ ಎಸ್.ಬಸವರಾಜ್ ಹಾಗೂ ಕೆ.ತಿಪ್ಪೇಸ್ವಾಮಿ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿ 7 ದಿನದೊಳಗೆ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 150ಎ ರಸ್ತೆ ಅಗಲೀಕರಣ ಕಾಮಗಾರಿ ಯರಬಹಳ್ಳಿ ಎಕೆ ಕಾಲೋನಿಯ ಅಂಗನವಾಡಿ ಕಟ್ಟಡ ತೆರವುಗೊಳಿಸಲಾಗಿತ್ತು. ಇದಕ್ಕೆ ಸೂಕ್ತ ಪರಿಹಾರವನ್ನು ಕೂಡ ನೀಡಲಾಗಿತ್ತು. ಪಿಡಿಒ ಅವರು ಕಾನೂನು ಉಲ್ಲಂಘಿಸಿ ಪರಿಹಾರ ಹಣ ದುರುಪಯೋಗ ಪಡಿಸಿಕೊಂಡಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯ ಅಧ್ಯಕ್ಷ ಕಂದಿಕೆರೆ ಜಗದೀಶ್ ಮನವಿ ಮಾಡಿದ್ದರು.

ಮನವಿ ಹಿನ್ನೆಲೆಯಲ್ಲಿ ಅಧಿಕಾರಿಗಳು ತನಿಖೆ ಕೈಗೊಂಡಾಗ ಪಿಡಿಒ ಅವರು ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳ ಬಲೆಗೆ: ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ 4,00,000 ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗುತ್ತಿಗೆದಾರನ ಕಾಮಗಾರಿಗೆ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಗುತ್ತಿಗೆದಾರ ಸಿದ್ದನಗೌಡನಿಂದ 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿಯನ್ನು ಬಲೆಗೆ ಕೆಡವಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ದಾಳಿಯನ್ನು ಲೋಕಾಯುಕ್ತ ಡಿವೈಎಸ್ಪಿ ಬಸವರಾಜ್ ನೇತೃತ್ವದಲ್ಲಿ ನಡೆಸಲಾಗಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಎಡಿಎಲ್‌ಆರ್ ಲೋಕಾಯುಕ್ತ ಬಲೆಗೆ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಕಛೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಲಂಚ ಪಡೆಯುತ್ತಿದ್ದಾಗ ಎಡಿಎಲ್‌ಆರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಘಟನೆ ನಡೆದಿತ್ತು.
ರೈತನ ಜಮೀನಿಗೆ ಸಂಬಂಧಿಸಿದಂತೆ ದಾಖಲೆ ಹಾಗೂ ಪಹಣಿ ನೀಡಲು 15ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, 10 ಸಾವಿರ ಲಂಚ ಪಡೆಯುತ್ತಿದ್ದಾಗ ಎಡಿಎಲ್ ಆರ್.ಗಂಗಣ್ಣ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಚಳ್ಳಕೆರೆ ತಾಲೂಕಿನ ಓಬಳಾಪುರ ಗ್ರಾಮದ ರೈತ ಕೆ.ಜಿ.ಜಯ್ಯಣ್ಣ ತಮ್ಮ ಜಮೀನಿಗೆ ಸಂಭಂದಿಸಿದಂತೆ ದಾಖಲೆಗಳನ್ನು ಪ್ರತ್ಯೇಕವಾಗಿ ಮಾಡಿಕೊಡಲು ಗಂಗಣ್ಣ 15,000 ರೂಪಾಯಿ ಹಣ ಕೇಳಿದ್ದರು. ಲಂಚ ಕೇಳಿರುವ ಬಗ್ಗೆ ರೈತ ಜಯಣ್ಣ ಲೋಕಾಯುಕ್ತರಿಗೆ ದೂರು ನೀಡಿದ್ದರು.
ಲಂಚ ಕೇಳಿದ ಅಧಿಕಾರಿ ಅಮಾನತು: ಈ ದೂರಿನನ್ವಯ ಲೋಕಾಯುಕ್ತ ಪೊಲೀಸರು ಇಂದು ಕಾರಿನ ಚಾಲಕ ಕಿರಣ್ ಎಂಬುವವರು ಜಯಣ್ಣನಿಂದ 10 ಸಾವಿರ ರೂಪಾಯಿ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.












Click it and Unblock the Notifications