ಚಿತ್ರದುರ್ಗ ಹಿಂದೂ ಮಹಾ ಗಣಪತಿ ವಿಸರ್ಜನೆ ಶೋಭಯಾತ್ರೆ, ಡಿಜೆ ಬಳಕೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ
ಚಿತ್ರದುರ್ಗ, ಸೆಪ್ಟೆಂಬರ್ 20: ಚಿತ್ರದುರ್ಗ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪ್ರಾತಿಷ್ಠಾಪಿಸಲ್ಪಟ್ಟಿರುವ ಹಿಂದೂ ಮಹಾ ಗಣಪತಿ ವಿಸರ್ಜನೆ ಅಕ್ಟೋಬರ್ 02ರಂದು ನಡೆಯಲಿದ್ದು, ವಿಸರ್ಜನಾ ಕಾರ್ಯಕ್ರಮದಲ್ಲಿ ಶೋಭಯಾತ್ರೆಗೆ ಡಿಜೆ ಬಳಕೆಗೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಿಂದೂ ಮಹಾ ಗಣಪತಿ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೋವಿಡ್-19ಗೆ ಸಂಬಂಧಿಸಿದಂತೆ ಸರ್ಕಾರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಹಾಗೂ ವಿವಿಧ ನಿಬಂಧನೆಗಳಿಗೆ ಒಳಪಟ್ಟು ವಿಸರ್ಜನಾ ಕಾರ್ಯಕ್ರಮದಲ್ಲಿ ನಾಲ್ಕು ಕಲಾ ತಂಡಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು.
ವಿಸರ್ಜನಾ ಕಾರ್ಯಕ್ರಮವು ಚಿತ್ರದುರ್ಗ ನಗರದಲ್ಲಿ ಹಾದು ಹೋಗಿರುವ ಮುಖ್ಯ ರಸ್ತೆಯಾದ ಬಿ.ಡಿ. ರಸ್ತೆಯಲ್ಲಿ ಸಾಗಿ ಪ್ರವಾಸಿ ಮಂದಿರದ ಮೂಲಕ ಹೊಳಲ್ಕೆರೆ ರಸ್ತೆಯ ಮುಖಾಂತರ ಕನಕ ವೃತ್ತದವರೆಗೆ ಸಾಗಿ ಮುಕ್ತಾಯಗೊಳ್ಳಲಿದೆ. ವಿಸರ್ಜನಾ ಸ್ಥಳಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ ಎಂದು ಹೇಳಿದರು.

ಅ.02 ರಂದು ಯಾವ ಸಮಯದಲ್ಲಿ ವಿಸರ್ಜನೆ ಕಾರ್ಯಕ್ರಮ ಪ್ರಾರಂಭ ಮಾಡಬೇಕು ಎಂಬುವುದು ತೀರ್ಮಾನದ ಹಂತದಲ್ಲಿದ್ದು, ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಪದಾಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವರು. ವಿಸರ್ಜನಾ ಕಾರ್ಯಕ್ರಮಕ್ಕೆ ಎರಡು ಗಂಟೆಗಳ ಕಾಲಮಿತಿ ನಿಗಧಿಪಡಿಸಲಾಗಿದೆ. ಈ ಅವಧಿಯೊಳಗೆ ವಿಸರ್ಜನಾ ಕಾರ್ಯಕ್ರಮದ ಎಲ್ಲ ಪ್ರಕ್ರಿಯೆ ಮುಕ್ತಾಯವಾಗುವಂತೆ ಜಿಲ್ಲಾಡಳಿತ ಅನುಮತಿ ನೀಡಿದೆ ಎಂದು ತಿಳಿಸಿದರು.
ತಜ್ಞರ ಅಭಿಪ್ರಾಯದಂತೆ ಕೋವಿಡ್-19ರ ಸಂಭಾವ್ಯ ಮೂರನೇ ಅಲೆ ಬರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತಿಲ್ಲ. ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ಆನ್‍ಲೈನ್ ಮೂಲಕ ವಿಸರ್ಜನಾ ಕಾರ್ಯಕ್ರಮ ವೀಕ್ಷಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ದಸರಾ ಹಬ್ಬ ಮಾರ್ಗಸೂಚಿ ಬಿಡುಗಡೆ: ನಾಡಹಬ್ಬ ದಸರಾ ಹಬ್ಬಕ್ಕೆ ಸಂಬಂಧಿಸಿದಂತೆ ಸರ್ಕಾರವು ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅ.07 ರಿಂದ 15 ರವರೆಗೆ ನಾಡಹಬ್ಬ ದಸರಾ ಹಬ್ಬ ಆಚರಣೆ ಮಾಡಲಾಗುತ್ತಿದೆ. ಕೋವಿಡ್-19ರ ವೈರಾಣು ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ನಾಡಹಬ್ಬ ದಸರಾವನ್ನು ಅತ್ಯಂತ ಸರಳ ಮತ್ತು ಭಕ್ತಿಪೂರ್ವಕವಾಗಿ ತಮ್ಮ ಮನೆಗಳಲ್ಲಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ಹಬ್ಬದ ಸಂದರ್ಭದಲ್ಲಿ ಒಮ್ಮೆಲೇ 400 ಜನರಿಗಿಂತ ಹೆಚ್ಚು ಜನ ಸೇರುವಂತಿಲ್ಲ. ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸ್ ಸೇರಿದಂತೆ ಮುಂತಾದ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಕೋವಿಡ್-19ರ ನಿಯಮ ಪಾಲನೆ ಮಾಡದ ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಷೇಧಿಸಲಾಗುವುದು ಎಂದು ಹೇಳಿದರು.ರಾಷ್ಟ್ರೀಯ ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ನಿರ್ದೇಶನಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು. ದಸರಾ ಹಬ್ಬ ಆಚರಣೆಯನ್ನು ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯದಿಂದ ಆಚರಿಸಬೇಕು ಎಂದರು.
ಕೋವಿಡ್ ಲಸಿಕೆ ಪಡೆಯಲು ಮನವಿ: ಜಿಲ್ಲೆಯ ನಾಗರಿಕರು ಯಾವುದೇ ಭಯ, ಆತಂಕಕ್ಕೆ ಒಳಗಾಗದೇ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮನವಿ ಮಾಡಿದರು.ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕದೇ ಸಾರ್ವಜನಿಕರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ ಹಾಜರಿದ್ದರು.
(ಒನ್‌ಇಂಡಿಯಾ ಸುದ್ದಿ)












Click it and Unblock the Notifications