ಕೈ ತಪ್ಪಿದ ಟಿಕೆಟ್: ಕಾಂಗ್ರೆಸ್‌ಗೆ ರಾಜೀನಾಮೆ ಸಲ್ಲಿಸಲು ಮುಂದಾದ ಮಾಜಿ ಶಾಸಕ ಎಸ್.ಕೆ. ಬಸವರಾಜನ್?
ಚಿತ್ರದುರ್ಗ, ಏಪ್ರಿಲ್ 7: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಗುರುವಾರ ಬಿಡುಗಡೆಯಾಗಿದೆ. ಎರಡನೇ ಪಟ್ಟಿ ಘೋಷಣೆಯಾದ ಬಳಿಕ ಟಿಕೆಟ್ ನಿರೀಕ್ಷೆಯಲ್ಲಿದ್ದ ಅನೇಕರಿಗೆ ನಿರಾಸೆಯಾಗಿದ್ದು, ಕಾಂಗ್ರೆಸ್‌ಗೆ ಬಂಡಾಯದ ಬಿಸಿ ತಟ್ಟುತ್ತಿದೆ. ಈ ಬಾರಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದಕ್ಕೆ ಅನೇಕ ನಾಯಕರು ಅಸಮಧಾನಗೊಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ.
ಟಿಕೆಟ್ ಘೋಷಣೆ ಬಳಿಕ ಚಿತ್ರದುರ್ಗ ಜಿಲ್ಲೆಯ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ನಿರೀಕ್ಷಿಸಿದಂತೆ ಕಾಂಗ್ರೆಸ್ ಟಿಕೆಟ್ ಸಿಗದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಸ್ಥಾನಕ್ಕೆ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಗುರುವಾರ ಕಾಂಗ್ರೆಸ್ ಅಭ್ಯರ್ಥಿಯ ಎರಡನೇ ಹಂತದ ಪಟ್ಟಿ ಘೋಷಣೆಯಲ್ಲಿ ಉದ್ಯಮಿ ಕೆಸಿ ವೀರೇಂದ್ರ ಪಪ್ಪಿ ಅವರಿಗೆ ಟಿಕೆಟ್ ಸಿಕ್ಕಿದ್ದು, ಇತ್ತ ಪಕ್ಷದಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಕೆಸಿ ವೀರೇಂದ್ರ ಪಪ್ಪಿಗೆ ಟಿಕೆಟ್ ನೀಡಿರುವುದಕ್ಕೆ ಕಾಂಗ್ರೆಸ್ ಮುಖಂಡರು ಅಸಮಧಾನಗೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ರಾಜೀನಾಮೆ ಸಲ್ಲಿಸುವ ಸುದ್ದಿ ಹರಿದಾಡುತ್ತಿದೆ.
"ವೈಯಕ್ತಿಯ ಕಾರಣಗಳಿಂದ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಶೀಘ್ರವೇ ಬೆಂಬಲಿಗರು ಮತ್ತು ಹಿತೈಷಿಗಳ ಸಭೆ ಕರೆದು, ಭವಿಷ್ಯದ ರಾಜಕೀಯ ಕುರಿತು ಚರ್ಚೆ ಮಾಡುತ್ತೇನೆ ಎಂದು" ತಿಳಿಸಿದ್ದಾರೆ ಎನ್ನಲಾಗಿದೆ.

ಮತ್ತೊಂದು ಕಡೆ ಕಾಂಗ್ರೆಸ್ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಎಂಎಲ್ಸಿ ರಘು ಆಚಾರ್ ಕೂಡ ಕಾಂಗ್ರೆಸ್ ನಾಯಕರ ವಿರುದ್ಧ ಬಂಡಾಯ ಸರಿದ್ದಾರೆ ಕೈ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಆಕ್ರೋಶಗೊಂಡಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್‌ಗೆ ಮತ ಹಾಕದಂತೆ ನಮ್ಮ ಸಮುದಾಯಕ್ಕೆ ತಿಳಿಸುತ್ತೇನೆ ಎಂದು ಕಿಡಿಕಾರಿದ್ದರು. ಅಲ್ಲದೇ ಇದೇ ತಿಂಗಳ ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ರಘು ಆಚಾರ್ ಹೇಳಿಕೆ ಕುತೂಹಲ ಮೂಡಿಸಿದೆ.
ಇನ್ನು ರಘು ಆಚಾರ್ ಜೆಡಿಎಸ್ ಸೇರುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಯಾವ ಪಕ್ಷದಿಂದ ನಾಮಪತ್ರ ಸಲ್ಲಿಸುತ್ತೇನೆ ಎಂದು ರಘು ಆಚಾರ್ ಅಧಿಕೃತವಾಗಿ ತಿಳಿಸಿಲ್ಲ.
ಮೊಳಕಾಲ್ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಡಾ. ಯೋಗೇಶ್ ಬಾಬು ಕೈ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೂ ಸಹ ಟಿಕೆಟ್ ಕೈ ತಪ್ಪಿದೆ. ಬಿಜೆಪಿಯ ಹಾಲಿ ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಯೋಗೀಶ್ ಬಾಬು ಅವರಿಗೆ ಟಿಕೆಟ್ ಮಿಸ್ ಆಗಿದೆ. ಕಾಂಗ್ರೆಸ್‌ನಿಂದ ಟಿಕೆಟ್ ಪಡೆಯಲು ಯೋಗೇಶ್ ಬಾಬು ಸಾಕಷ್ಟು ಕಸರತ್ತುಗಳನ್ನು ನಡೆಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮಾರ ಕೃಪ ಅವರ ನಿವಾಸದ ಮುಂದೆ ಯೋಗೇಶ್ ಬಾಬು ಬೆಂಬಲಿಗರು ಅರೆ ಬೆತ್ತಲೆಯಲ್ಲಿ ಪ್ರತಿಭಟನೆ ನಡೆಸಿದ್ದರು.
ಜೊತೆಗೆ ಕೆಪಿಸಿಸಿ ಕಚೇರಿ ಮುಂದೆ ಕೂಡ ಹೈಡ್ರಾಮಾ ನಡೆಸಿದರು. ಆದರೆ ಪಕ್ಷ ಇದ್ಯಾವುದಕ್ಕೂ ಸೊಪ್ಪು ಹಾಕದೆ ಪಕ್ಷಕ್ಕೆ ಸೇರ್ಪಡೆಯಾದ ಗೋಪಾಲಕೃಷ್ಣ ಅವರಿಗೆ ಕೈ ಟಿಕಿಟ್ ನೀಡಿ ಅಂತಿಮಗೊಳಿಸಲಾಗಿದೆ. ಟಿಕೆಟ್ ತಪ್ಪಿರುವ ಯೋಗೇಶ್ ಬಾಬು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ. ಒಟ್ಟಾರೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾದ ಬಳಿಕ ಅಸಮಧಾನ ಹೆಚ್ಚಾಗಿದೆ.












Click it and Unblock the Notifications