'ಬಿಎಸ್‌ವೈಗೆ ಸಿದ್ದರಾಮಯ್ಯ ತೊಂದರೆ ಕೊಡುತ್ತಿದ್ದಾರೆ'
ಚಿತ್ರದುರ್ಗ, ಜೂ. 22 : 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಮ್ಮನೆ ತೊಂದರೆ ಕೊಡುತ್ತಿದ್ದಾರೆ, ಬಿಎಸ್‌ವೈ ಸಿಎಂ ಆಗಿದ್ದಾಗ ನೆರವು ಪಡೆದಿದ್ದನ್ನು ಮುಖ್ಯಮಂತ್ರಿಗಳು ನೆನಪು ಮಾಡಿಕೊಳ್ಳಲಿ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಚಿತ್ರದುರ್ಗದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, 'ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಪ್ರತಿಪಕ್ಷಗಳ ಬಾಯಿ ಮುಚ್ಚಿಸುವ ಕೆಲಸವನ್ನು ಮಾಡುತ್ತಿದ್ದಾರೆ' ಎಂದು ಆರೋಪಿಸಿದರು.

ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮತ್ತು ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಎಫ್‌ಐಆರ್ ದಾಖಲಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, 'ಲೋಕಾಯುಕ್ತರ ಮೂಲಕ ಸಿದ್ದರಾಮಯ್ಯ ಪ್ರತಿಪಕ್ಷಗಳ ಬಾಯಿ ಮುಚ್ಚಿಸುವ ಕೆಲಸವನ್ನು ಮಾಡುತ್ತಿದ್ದಾರೆ' ಎಂದು ದೂರಿದರು. [ಯಡಿಯೂರಪ್ಪ ವಿರುದ್ಧ ಮೂರು ಎಫ್ ಐಆರ್]
ಸುಮ್ಮನೆ ತೊಂದರೆ ಕೊಡುತ್ತಿದ್ದಾರೆ : 'ಯಡಿಯೂರಪ್ಪ ಅವರ ವಿರುದ್ಧ ಹಲವಾರು ದೂರುಗಳು ದಾಖಲಾಗಿವೆ. ಅವುಗಳಿಂದ ಹೊರಬರಲು ಅವರು ಕಷ್ಟಪಡುತ್ತಿದ್ದಾರೆ. ಹೀಗಿರುವಾಗಲೇ ಸಿದ್ದರಾಮಯ್ಯ ಅವರು ಎಫ್‌ಐಆರ್ ದಾಖಲಾಗುವಂತೆ ಮಾಡಿ ಸುಮ್ಮನೆ ತೊಂದರೆ ಕೊಡುತ್ತಿದ್ದಾರೆ' ಎಂದರು. [ಎಚ್ಡಿಕೆ, ಯಡಿಯೂರಪ್ಪ ವಿರುದ್ಧ ಎಫ್ ಐಆರ್]
'ಯಡಿಯೂರಪ್ಪ ಅವರಿಗೆ ತೊಂದರೆ ಕೊಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಅವಧಿಯಲ್ಲಿ ಪಡೆದ ನೆರವನ್ನು ನೆನಪು ಮಾಡಿಕೊಳ್ಳಲಿ' ಎಂದು ಕುಮಾರಸ್ವಾಮಿ ಸಲಹೆ ನೀಡಿದರು.
ಅಂದಹಾಗೆ ಮಾಜಿ ಮುಖ್ಯಮಂತ್ರಿ ಮತ್ತು ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಎಫ್‌ಐಆರ್ ದಾಖಲಾಗಿದೆ. ಜಯಕುಮಾರ ಹಿರೇಮಠ ಅವರು ಸಲ್ಲಿಸಿದ್ದ ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ಜೂನ್ 19ರ ಶುಕ್ರವಾರ ಎಫ್‌ಐಆರ್ ದಾಖಲು ಮಾಡಿದ್ದಾರೆ.












Click it and Unblock the Notifications