Independence Day 2023: ಕೋಟೆನಾಡು ಚಿತ್ರದುರ್ಗದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹೀಗಿತ್ತು
ಚಿತ್ರದುರ್ಗ, ಆಗಸ್ಟ್, 15: ಇಂದು ದೇಶದಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ಹಾಗೆಯೇ ಕೋಟೆನಾಡು ಚಿತ್ರದುರ್ಗದ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿ ಜಿಲ್ಲಾ ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ. ಡಿ ಸುಧಾಕರ್ ನೆರವೇರಿಸಿದರು.
ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದ ಬಳಿಕ ಸಚಿವ. ಡಿ.ಸುಧಾಕರ್ ಅವರು ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ನಂತರ ವಿವಿಧ ವಿದ್ಯಾರ್ಥಿಗಳಿಂದ ಪಥಸಂಚಲನ ಜರುಗಿತು.

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, "ದೇಶದ ಸ್ವಾತಂತ್ರ್ಯಕ್ಕೆ ನಮ್ಮ ಜಿಲ್ಲೆಯ ಅನೇಕರು ಹೋರಾಟ ಮಾಡಿದ್ದಾರೆ. ಮಹಾತ್ಮ ಗಾಂಧೀಜಿಯವರಿಗೆ ನಮ್ಮ ಜಿಲ್ಲೆಯ ತುರುವನೂರ ಜೊತೆ ಸಂಪರ್ಕ ಇತ್ತು. ತುರುವನೂರಲ್ಲಿ ಸ್ವಾತಂತ್ತ್ಯ ಹೋರಾಟದ ವೇಳೆ ಈಚಲು ಮರ ಕಡಿಯಲಾಗಿತ್ತು. ಈ ವೇಳೆ ಅನೇಕ ಹೋರಾಟಗಾರರನ್ನು ಜೈಲಿಗೆ ಹಾಕಲಾಗಿತ್ತು, ಇದರ ಪ್ರಯುಕ್ತ ತುರನೂರು ಗ್ರಾಮದಲ್ಲಿ ಗಾಂಧೀಜಿ ಪ್ರತಿಮೆ ಸ್ಥಾಪಿಸಲಾಯಿತು ಎಂದು ತಿಳಿಸಿದರು.
ಸ್ವತಂತ್ರ್ಯೋತ್ತರ ಭಾರತ ದೇಶ ಇಂದು ಎಲ್ಲಾ ರಂಗಗಳಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದೆ. ನಮ್ಮ ಸರ್ಕಾರ ದೇಶ, ರಾಜ್ಯದ ಅಭಿವೃದ್ಧಿಯ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಲಾಗುತ್ತಿದೆ. ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಶಕ್ತಿ ಯೋಜನೆ ಜಾರಿಗೊಳಿಸಿದೆ. ರಾಜ್ಯದಲ್ಲಿ ನಮ್ಮ ಸರ್ಕಾರ ಬಡವರ ಹಸಿವನ್ನು ನೀಗಿಸಲು 10 ಕೆ.ಜಿ. ಅಕ್ಕಿ ಕೊಡುತ್ತೇವೆ ಎಂದು ಹೇಳಿದೆ.
ಆದರೆ ಕೇಂದ್ರ ಸರ್ಕಾರದಿಂದ ಅಕ್ಕಿ ಸಿಗದ ಹಿನ್ನೆಲೆ 5 ಕೆ.ಜಿ. ಅಕ್ಕಿ ನೀಡಲಾಗುತ್ತಿದೆ. ಉಳಿದ 5 kg ಅಕ್ಕಿಯ ಬದಲು ಹಣವನ್ನು ಕೊಡಲಾಗುತ್ತದೆ. ಜೊತೆಗೆ ಪ್ರತಿ ಮನೆಗೆ 200 ಯೂನಿಟ್‌ವರೆಗಿನ ವಿದ್ಯುತ್ ಉಚಿತವಾಗಿ ನೀಡಲಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಜಿಲ್ಲೆಯ ಭದ್ರಾ ಮೇಲ್ದಂಡೆ, ಹಾಗೂ ಮೆಡಿಕಲ್ ಕಾಲೇಜು ಪೂರ್ಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದರು.
ಇನ್ನು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಿರಿಯೂರಿನ ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮವನ್ನು ತಹಶೀಲ್ದಾರ್ ರಾಜೇಶ್ ಕುಮಾರ್ ನೆರವೇರಿಸಿದರು. ನಂತರ ಅವರು ಗೌರವ ವಂದನೆ ಸ್ವೀಕರಿಸಿದರು. ಇದಾದ ಬಳಿಕ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಕಛೇರಿ ಸಿಬ್ಬಂದಿಗಳಿಂದ ಪಥಸಂಚಲನ ಕಾರ್ಯಕ್ರಮ ನೆರವೇರಿತು. ಅಲ್ಲದೆ ಕಾರ್ಯಕ್ರಮ ಕುರಿತು ತಹಶೀಲ್ದಾರ್ ರಾಜೇಶ್ ಕುಮಾರ್ ಸಂದೇಶ ಸಾರಿದರು.
ಅದೇ ರೀತಿ ಹೊಸದುರ್ಗ, ಚಳ್ಳಕೆರೆ, ಮೊಳಕಾಲ್ಮೂರು ಹಾಗೂ ಹೊಳಲ್ಕೆರೆ ತಾಲೂಕಿನಲ್ಲಿ ಸಹ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.












Click it and Unblock the Notifications