Priyanka Gandhi Road Show: ಏಪ್ರಿಲ್ 26ಕ್ಕೆ ಹಿರಿಯೂರು ಕ್ಷೇತ್ರದಲ್ಲಿ ಪ್ರಿಯಾಂಕ ಗಾಂಧಿ ರೋಡ್ ಶೊ
ಚಿತ್ರದುರ್ಗ, ಏಪ್ರಿಲ್, 25: ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬುಧವಾರ (ಏಪ್ರಿಲ್ 26) ಹಿರಿಯೂರು ನಗರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ.
ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರಕ್ಕೆ ಆಗಮಿಸಲಿರುವ ಪ್ರಿಯಾಂಕಾ ಗಾಂಧಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿ ಡಿ.ಸುಧಾಕರ್ ಅವರು ಅದ್ದೂರಿಯಾಗಿ ಸ್ವಾಗತಿಸಲು ಸಜ್ಜಾಗಿದ್ದಾರೆ. ಬೆಳಗ್ಗೆ ಸುಮಾರು 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಪ್ರಿಯಾಂಕಾ ಅವರು, ಹುಳಿಯಾರು ರಸ್ತೆಯಿಂದ ಗಾಂಧಿ ವೃತ್ತ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.

ನಂತರ ಕಾಂಗ್ರೆಸ್ ಅಭ್ಯರ್ಥಿ ಡಿ.ಸುಧಾಕರ್ ಅವರ ಪರವಾಗಿ ಮತಪ್ರಚಾರ ನೆಡೆಸಿ, ಕಾಂಗ್ರೆಸ್ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಮಾಹಿತಿ ನೀಡಿವೆ. ಈಗಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಮುರುಧರನ್ ಹಾಲಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ನಾಲ್ಕನೇ ಬಾರಿಗೆ ಪರೀಕ್ಷೆಗಿಳಿದ ಡಿ.ಸುಧಾಕರ್
ಕಾಂಗ್ರೆಸ್ ಅಭ್ಯರ್ಥಿ ಡಿ.ಸುಧಾಕರ್ ಅವರು ಒಟ್ಟು ನಾಲ್ಕು ಬಾರಿ ವಿಧಾನಸಭಾ ಚುನಾವಣೆಯನ್ನು ಎದುರಿಸಿದ್ದಾರೆ. ಇದರಲ್ಲಿ ಅವರು ಒಮ್ಮೆ ಸೋತಿದ್ದು, ಮೂರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಒಮ್ಮೆ ಚಳ್ಳಕೆರೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಇದೀಗ ಹಿರಿಯೂರು ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.
2008ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರಚಂಡ ಬಹುಮತದಿಂದ ಗೆಲುವು ಸಾಧಿಸಿ, ಬಿಜೆಪಿ ಸರ್ಕಾರಕ್ಕೆ ಬೆಂಬಲ ಸೂಚಿಸಿ ಸಚಿವರಾಗಿದ್ದ ಸುಧಾಕರ್ ಅವರು, 2013ರಲ್ಲಿ ದಿವಂಗತ ಮಾಜಿ ಸಚಿವ ಎ. ಕೃಷ್ಣಪ್ಪ ವಿರುದ್ಧ ಕೂದಲೆಳೆ ಅಂತರದಲ್ಲಿ ಮತ್ತೊಮ್ಮೆ ಜಯ ಸಾಧಿಸಿದ್ದರು. ನಂತರ 2018ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಪೂರ್ಣಿಮಾ ಶ್ರೀನಿವಾಸ್ ವಿರುದ್ಧ ಸೋಲುಂಡಿದ್ದರು. ಇದೀಗ ನಾಲ್ಕನೇ ಬಾರಿಗೆ ಅದೃಷ್ಟ ಪರೀಕ್ಷೆಯನ್ನು ಎದುರಿಸಲು ಸಜ್ಜಾಗಿದ್ದಾರೆ.
ತ್ರಿಕೋನ ಸ್ಪರ್ಧೆಯಿಂದ ಏರ್ಪಟ್ಟಿರುವ ಹಿರಿಯೂರು ಕ್ಷೇತ್ರ ಈ ಬಾರಿ ಕಾಂಗ್ರೆಸ್ ಪಕ್ಷ ಕ್ಷೇತ್ರವನ್ನು ಹಿಡಿತಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಅಭ್ಯರ್ಥಿ ಡಿ.ಸುಧಾಕರ್ ಅವರು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಹಗಲು, ಇರುಳು ಎನ್ನದೆ ಕ್ಷೇತ್ರ ಸುತ್ತುತ್ತಿದ್ದಾರೆ. ಕ್ಷೇತ್ರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಧ್ಯದ ಮಟ್ಟಿಗೆ ಕಾಂಗ್ರೆಸ್ ಅಭ್ಯರ್ಥಿ ಸ್ವಲ್ಪ ಮಟ್ಟಿಗೆ ಮುಂದಿದ್ದಾರೆ. ಚುನಾವಣೆಗೆ ಇನ್ನು ಹದಿನೈದು ದಿನಗಳು ಬಾಕಿ ಇದ್ದು, ರಾಜಕೀಯ ಚಿತ್ರಣ ಬದಲಾಗುವ ಸಾಧ್ಯತೆಯು ಇದೆ ಎನ್ನಲಾಗಿದೆ.
ನಾಮಪತ್ರ ಸಲ್ಲಿಸಿದವರ ವಿವರ
ಇನಗನು ವಿಧಾನಸಭಾ ಚುನಾವಣೆಗೆ ದಿನ ಕಳೆದಂತೆ ಚಟುವಟಿಕೆಗಳು ರಂಗಿರುತ್ತಿದ್ದು, ಚಿತ್ರದುರ್ಗ ಜಿಲ್ಲೆಯಾದ್ಯಂತ ವಿವಿಧ ಪಕ್ಷದ ಅಭ್ಯರ್ಥಿಗಳು ರಣ ಬಿಸಿಲು ಲೆಕ್ಕಿಸದೇ ಅದ್ಧೂರಿಯಾಗಿ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದ್ದಾರೆ.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಎಸ್ ತಿಪ್ಪೇಸ್ವಾಮಿ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಎಂ ಚಂದ್ರಪ್ಪ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಜಿಹೆಚ್. ತಿಪ್ಪಾರೆಡ್ಡಿ, ಹೊಸದುರ್ಗ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಎಸ್ ಲಿಂಗಮೂರ್ತಿ, ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನ ಮಾಜಿ ಸಚಿವ ಡಿ ಸುಧಾಕರ್ ಇತ್ತೀಚೆಗಷ್ಟೇ ನಾಮಪತ್ರ ಸಲ್ಲಿಸಿದ್ದರು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಟಿ. ರಘುಮೂರ್ತಿ, ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಸ್ಥಳೀಯ ಅಭ್ಯರ್ಥಿ ಗನ್ನಾಯಕನಹಳ್ಳಿ ಹೆಚ್ ಮಹೇಶ್, ಹೊಸದುರ್ಗ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಸಚಿವ ಗೂಳಿಹಟ್ಟಿ ಡಿ ಶೇಖರ್ ಅಪಾರ ಬೆಂಬಲಿಗರೊಂದಿಗೆ ರೋಡ್ ಶೋ ನಡೆಸಿ ನಂತರ ಚುನಾವಣಾ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದರು.
ಹೊಸದುರ್ಗ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗೂಳಿಹಟ್ಟಿ ಡಿ ಶೇಖರ್ ಅವರು ಬಿಜೆಪಿ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ತನ್ನ ಬೆಂಬಲಿಗರೊಂದಿಗೆ ಚುನಾವಣಾ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
2008ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡು ಬಿಜೆಪಿ ಸರ್ಕಾರದಲ್ಲಿ ಜವಳಿ ಸಚಿವರಾಗಿದ್ದ ಗೂಳಿಹಟ್ಟಿ ನಂತರ ಚುನಾವಣೆಯಲ್ಲಿ ಸೋಲು ಕಂಡಿದ್ದರು. 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದು ಉಮೇದುವಾರಿಕೆ ಸಲ್ಲಿಸಿದರು.












Click it and Unblock the Notifications