ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಶಾಕ್ ಕೊಟ್ಟ ಎನ್.ವೈ.ಗೋಪಾಲಕೃಷ್ಣ
ಚಿತ್ರದುರ್ಗ, ಮಾರ್ಚ್, 31: ಮೊಳಕಾಲ್ಮೂರು ಕ್ಷೇತ್ರದ ಎನ್.ವೈ. ಗೋಪಾಲಕೃಷ್ಣ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರಮಾರ (ಮಾರ್ಚ್ 31) ಬೆಳಗ್ಗೆ 11.30 ರ ವೇಳೆಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎನ್.ವೈ. ಗೋಪಾಲಕೃಷ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ. ಅವರು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈಗಾಗಲೇ ಕಾಂಗ್ರೆಸ್ ಪಕ್ಷ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡನೇ ಹಂತದ ಪಟ್ಟಿಯಲ್ಲಿ ಎನ್.ವೈ. ಗೋಪಾಲಕೃಷ್ಣ ಅವರ ಹೆಸರು ಕೇಳಿಬರುತ್ತಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಗೋಪಾಲಕೃಷ್ಣ
ಗೋಪಾಲಕೃಷ್ಣ ಅವರು ಮೂಲತಃ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದರು. ಗೋಪಾಲಕೃಷ್ಣ ನಾಲ್ಕು ಬಾರಿ ಶಾಸಕರಾಗಿ ಹೊರಹೊಮ್ಮಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಬಿಜೆಪಿ ಪಕ್ಷ ಸೇರ್ಪಡೆ ಆಗಿ, ಅಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ಗೋಪಾಲಕೃಷ್ಣನವರ ರಾಜಕೀಯದ ಹಾದಿ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿಯ ಬಿ.ಶ್ರೀರಾಮುಲು ಅವರು ಇದೀಗ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಾತೃ ಕ್ಷೇತ್ರದಲ್ಲಿ ಸ್ಪರ್ಧಿಸಬಹುದು ಎಂಬ ನಿಟ್ಟಿನಲ್ಲಿ ಗೋಪಾಲಕೃಷ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಇನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದು ಸ್ಪರ್ಧಿಸಿ ಸೋಲು ಕಂಡಿದ್ದ ಡಾ.ಯೋಗೇಶ್ ಬಾಬು ಕೂಡ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದು, ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ.

ಮತ್ತೊಂದೆಡೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸಹ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುವ ಚಿಂತನೆಯಲ್ಲಿದ್ದಾರೆ. ಈ ಮಧ್ಯೆ ಗೋಪಾಲಕೃಷ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿರುವ ವಿಚಾರ ಕೂತುಹಲ ಮೂಡಿಸಿದೆ. ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿಗಳಲ್ಲಿ ತಳಮಳ ಶುರುವಾಗಿದೆ.
6 ಬಾರಿ ಶಾಸಕರಾಗಿ ಆಯ್ಕೆ
ಎನ್.ವೈ ಗೋಪಾಲಕೃಷ್ಣ ಅವರು ಒಟ್ಟು ಆರು ಬಾರಿ ವಿಧಾನಸಭೆಗೆ ಆಯ್ಕೆ ಆಗಿದ್ದು, ನಾಲ್ಕು ಬಾರಿ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಬಳ್ಳಾರಿ ಹಾಗೂ ಕೂಡ್ಲಿಗಿ ಕ್ಷೇತ್ರದಿಂದ ಒಂದೊಂದು ಬಾರಿ ಜಯ ಸಾಧಿಸಿದ್ದರು. 1993ರಿಂದ 2013ವರೆಗೆ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸಿ ಜಯಸಾಧಿಸಿದ್ದರು.
ಇನ್ನು 2014ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ ಕಳೆದ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೇರಿ ಕೂಡ್ಲಿಗಿ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆ ಆಗಿದ್ದರು.
ಒಟ್ಟಾರೆಯಾಗಿ ಎನ್.ವೈ ಗೋಪಾಲಕೃಷ್ಣ ಮರಳಿ ಮಾತೃ ಪಕ್ಷಕ್ಕೆ ವಾಪಸ್ಸಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇದರಿಂದ ಟಿಕೆಟ್ ಪ್ರಬಲ ಆಕಾಂಕ್ಷಿ ಆಗಿರುವ ಯೋಗೇಶ್ ಬಾಬು ಅವರಿಗೆ ಟಿಕೆಟ್ ಕೈತಪ್ಪಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಕಾಂಗ್ರೆಸ್ ಸೇರ್ಪಡೆಯಾದ ಕೂಡ್ಲಿಗಿ ಬಿಜೆಪಿ ಶಾಸಕ
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳಲ್ಲಿ ಬೆಳವಣಿಗೆಗಳು ಆಗುತ್ತಲೇ ಇವೆ. ರಾಜಕೀಯ ನಾಯಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುತ್ತಿದ್ದು, ಎಲ್ಲಾ ಪಕ್ಷಗಳಲ್ಲಿ ಇದೀಗ ಬಂಡಾಯದ್ದೇ ಚಿಂತೆ ಆಗಿದೆ. ಇದೇ ರೀತಿ ಇಂದು ಕೂಡ್ಲಿಗಿ ಬಿಜೆಪಿ ಶಾಸಕ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಶಾಸಕ ಗೋಪಾಲಕೃಷ್ಣ ಅವರು ನಿನ್ನೆ ಕಾಂಗ್ರೆಸ್ ಮುಖಂಡರನ್ನು ಭೇಟಿ ಆಗಿದ್ದು, ಇಂದು ಕೊನೆಗೂ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೂಡ್ಲಿಗಿ ವಿಧಾಸಭಾ ಕ್ಷೇತ್ರದಲ್ಲಿ 6 ಬಾರಿ ಶಾಸಕರಾಗಿರುವ ಎನ್.ವೈ.ಗೋಪಾಲಕೃಷ್ಣ ಅವರು ಕಾಂಗ್ರೆಸ್ ಸೇರ್ಪಡೆಯಾಗುವ ಮೂಲಕ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ.












Click it and Unblock the Notifications