ಬೆಸ್ಕಾಂಗೆ ಫಜೀತಿ ತಂದಿಟ್ಟ ಭರವಸೆ: ಕಾಂಗ್ರೆಸ್ ಬಂದಿದೆ ಕರೆಂಟ್ ಬಿಲ್ ಕಟ್ಟಲ್ಲ ಎಂದ ಜನರು
ಚಿತ್ರದುರ್ಗ, ಮೇ 15: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡುತ್ತೇವೆ ಎಂದು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿತ್ತು. ಅದರಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿದ್ದು, ಮುಖ್ಯಮಂತ್ರಿ ಆಯ್ಕೆ ಚರ್ಚೆ ನಡೆಯುತ್ತಿದೆ.
ಇತ್ತ ಬೆಸ್ಕಾಂ ಅಧಿಕಾರಿಗಳು ಕರೆಂಟ್ ಬಿಲ್ ಕಟ್ಟಿ ಎಂದು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ಕರೆಂಟ್ ಬಿಲ್ ಕಟ್ಟಲ್ಲ ಎಂದು ಸಿಬ್ಬಂದಿಗಳಿಗೆ ಅವಾಜ್ ಹಾಕಿದ ಘಟನೆ ಕೋಟೆ ನಾಡು ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಜಾಲಿಕಟ್ಟೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಪ್ರತಿ ತಿಂಗಳು ಬರುವಂತೆ ಬೆಸ್ಕಾಂನ ಮೀಟರ್ ರೀಡರ್‌ಗಳು ಈ ಗ್ರಾಮಕ್ಕೆ ಬಂದಿದ್ದಾರೆ. ಆಗ ಗ್ರಾಮಸ್ಥರು ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಆವಾಜ್ ಹಾಕಿದ್ದಾರೆ.
ಇನ್ನು ಸರ್ಕಾರದ ಆದೇಶ ಬರುವವರೆಗೂ ಬಿಲ್ ಕಟ್ಟಿ ಎಂದು ಬೆಸ್ಕಾಂ ಸಿಬ್ಬಂದಿ ಹೇಳಿದ್ದಾರೆ. ಆದರೆ ಚಿತ್ರದುರ್ಗ ತಾಲೂಕಿನ ಜಾಲಿಕಟ್ಟೆ ಗ್ರಾಮಸ್ಥರು ನೀವು ಕಾಂಗ್ರೆಸ್ ನಾಯಕರನ್ನೇ ಕೇಳಿ ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಅಧಿಕಾರಕ್ಕೆ ಬಂದ ತಕ್ಷಣ ಮೊದಲನೇ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಐದು ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರು ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೀಡಿರುವ ಭರವಸೆಗಳನ್ನು ಈಡೇರಿಸುತ್ತದೆ ಎಂದು ಜನ ಕಾಯುತ್ತಿದ್ದಾರೆ.

ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಭರಸೆಗಳ ಲೆಕ್ಕಚಾರ ಈ ಕೆಳಗಿನಂತಿದೆ
ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಲ್ಲಿ ಎರಡು ಉಚಿತಗಳನ್ನು ಈಡೇರಿಸಲು ಸರ್ಕಾರ ವರ್ಷಕ್ಕೆ ಅಂದಾಜು 45 ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ಹೇಳಲಾಗಿದೆ. ಉಚಿತ ವಿದ್ಯುತ್ ಯೋಜನೆಗೆ ವಾರ್ಷಿಕ ಅಂದಾಜು 9000 ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ಹೇಳಲಾಗಿದೆ, ಇನ್ನು ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂಪಾಯಿ ಹಣ ನೀಡುವ ಯೋಜನೆಗೆ ವಾರ್ಷಿದ 36,000 ಕೋಟಿ ರೂಪಾಯಿ ಬೇಕಾಗುತ್ತದೆ. ಇವೆರಡೂ ಯೋಜನೆ ಜಾರಿ ಮಾಡಲೇ ಅಂದಾಜು 45 ಸಾವಿರ ಕೋಟಿ ಹಣ ಬೇಕಾಗುತ್ತದೆ ಎಂದು ವರದಿಯಾಗಿದೆ.
ಒಟ್ಟಾರೆಯಾಗಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ನೀಡಿರುವ ಭರವಸೆಗಳನ್ನು ಯಾವಾಗ ಈಡೇರಿಸುತ್ತದೆ ಎಂದು ಜನರು ಕಾತುರದಿಂದ ಕಾಯುತ್ತಿದ್ದಾರೆ.












Click it and Unblock the Notifications