ಚಿತ್ರದುರ್ಗ ಜಿಲ್ಲೆಯಲ್ಲಿ ₹11,00,00,000 ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ-ಮಾಹಿತಿ ಇಲ್ಲಿದೆ
ಚಿತ್ರದುರ್ಗ, ಆಗಸ್ಟ್, 17: ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ (ಕೆಎಂಇಆರ್‌ಸಿ) ಅನುದಾನದಡಿ ಚಿತ್ರದುರ್ಗ ತಾಲ್ಲೂಕಿಗೆ 18 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳು ಮಂಜೂರಾಗಿವೆ. ಇದರಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 11 ಕೋಟಿ ರೂಪಾಯಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ ಎಂದು ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಹೇಳಿದರು.
ಹಿರೇಗುಂಟನೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ ಶುಕ್ರವಾರ ವೈದ್ಯಾಧಿಕಾರಿ, ಶುಶ್ರೂಷಕರು ಹಾಗೂ ಗ್ರೂಪ್ ಡಿ ನೌಕರರ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕೆಎಂಇಆರ್‌ಸಿ ಅನುದಾನದಲ್ಲಿ ಸಿದ್ದಾಪುರ, ಪಂಡರಹಳ್ಳಿ, ಭೀಮಸಮುದ್ರ ಗ್ರಾಮಗಳಲ್ಲಿ ನೂತನ ಆಯುಷ್ಮಾನ್ ಆರೋಗ್ಯ ಉಪಕೇಂದ್ರಗಳ ನಿರ್ಮಾಣಕ್ಕೆ 75 ಲಕ್ಷ ರೂಪಾಯಿ ನಿರ್ಮಾಣ ಕಾಮಗಾರಿಗೆ 5 ಲಕ್ಷ ರೂಪಾಯಿ ಜಿಎಸ್‌ಟಿ ಸೇರಿ ಒಟ್ಟು 80 ಲಕ್ಷ ರೂಪಾಯಿ ಅನುದಾನ ಮೀಸಲಿರಿಸಲಾಗಿದೆ. ಪೂರ್ಣ ಪ್ರಮಾಣದಲ್ಲಿ ಅನುದಾನವು ಲಭ್ಯವಿದ್ದು, ಯಾವುದೇ ಹಣಕಾಸಿನ ತೊಂದರೆಯಿಲ್ಲ. ಆರೆಂಟು ತಿಂಗಳಲ್ಲಿ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಹೇಳಿದರು.
ಭೀಮಸಮುದ್ರ ಪಿಹೆಚ್‍ಸಿ ಅಭಿವೃದ್ಧಿ: ಭೀಮಸಮುದ್ರ ಗ್ರಾಮದಲ್ಲಿ ಶುಕ್ರವಾರ ಸಂಸದ ಗೋವಿಂದ ಎಂ.ಕಾರಜೋಳ ಹಾಗೂ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಕೆಎಂಇಆರ್‌ಸಿ ಅನುದಾನದಡಿ 2.90 ಕೋಟಿ ರೂಪಾಯಿ ವೆಚ್ಚದಲ್ಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಹಾಗೂ ತಲಾ 75 ಲಕ್ಷ ರೂಪಾಯಿ ವೆಚ್ಚದಲ್ಲಿ ಎರಡು ನೂತನ ಆಯುಷ್ಮಾನ್ ಆರೋಗ್ಯ ಉಪಕೇಂದ್ರಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಗೋವಿಂದ ಎಂ.ಕಾರಜೋಳ, ಆರೋಗ್ಯ ಕೇಂದ್ರಗಳ ಕಟ್ಟಡ ಕಾಮಗಾರಿಗಳು ಬೇಗ ಪೂರ್ಣಗೊಂಡು ಸಾರ್ವಜನಿಕರಿಗೆ ಇದರ ಲಾಭ ದೊರಕುವಂತಾಗಬೇಕು ಎಂದರು. ಇದೇ ವೇಳೆ ಗ್ರಾಮದಲ್ಲಿ ನೂತನ ಸಿಸಿ ರಸ್ತೆಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಸಿದ್ದಾಪುರ, ಪಂಡರಹಳ್ಳಿ ಗ್ರಾಮಗಳಲ್ಲಿ ಕೂಡ ಕೆಎಂಇಆರ್‌ಸಿ ಅನುದಾನದಡಿ ಆಯುಷ್ಮಾನ್ ಆರೋಗ್ಯ ಉಪಕೇಂದ್ರಗಳ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಲ್ಯಾಣಿ, ಕೆರೆಗಳ ಸ್ವಚ್ಛತೆ ಹಾಗೂ ಅಭಿವೃದ್ಧಿಗೆ ಕ್ರಮ: ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿನ ಹಾಗೂ ನಗರಕ್ಕೆ ಹೊಂದಿಕೊಂಡಿರುವ ಕಲ್ಯಾಣಿಗಳು, ಕೆರೆಗಳ ಸ್ವಚ್ಛತೆ ಹಾಗೂ ನೀರು ಕಲುಷಿತ ಆಗುವುದನ್ನು ತಡೆಗಟ್ಟಲು ಅಗತ್ಯ ಯೋಜನೆ ರೂಪಿಸಿ, ಜಾರಿಗೊಳಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ (ಆಗಸ್ಟ್ 15) ವಿವಿಧ ಅಧಿಕಾರಿಗಳೊಂದಿಗೆ ಏರ್ಪಡಿಸಿದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಮಾತನಾಡಿ, ನಗರದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರಿನಿಂದ ಸಂಭವಿಸಿದ ಅಹಿತಕರ ಘಟನೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ನೀರಿನ ಮೂಲಗಳ ಸ್ವಚ್ಛತೆ, ಕೆರೆ, ಕಲ್ಯಾಣಿ, ಹೊಂಡಗಳ ಸ್ವಚ್ಛತೆಗೆ ಪ್ರಥಾದ್ಯತೆ ನೀಡುವಂತೆ ಸೂಚನೆ ನೀಡಿದ್ದಾರೆ ಎಂದರು.
ಇದಕ್ಕೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವರು ನಗರ ವ್ಯಾಪ್ತಿಯಲ್ಲಿನ ಸಂತೆಹೊಂಡ, ಮಠದ ಕೆರೆ, ಮಲ್ಲಾಪುರ ಕೆರೆ ಸೇರಿದಂತೆ ವಿವಿಧ ಕಲ್ಯಾಣಿ, ಕೆರೆಗಳು ಹಾಗೂ ಜಿಲ್ಲೆಯಲ್ಲಿನ ಕುಡಿಯುವ ನೀರಿಗಾಗಿ ಬಳಸುವ ಕೆರೆಗಳ ಸ್ವಚ್ಛತೆಗಾಗಿ ಅಗತ್ಯ ಯೋಜನೆ ರೂಪಿಸಬೇಕು. ಇದಕ್ಕಾಗಿ ಅಗತ್ಯವಿರುವ ಅನುದಾನವನ್ನು ಒದಗಿಸಲಾಗುವುದು ಎಂದು ಸೂಚನೆ ನೀಡಿದರು.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಚಿತ್ರದುರ್ಗದ ಮಠದ ಕೆರೆ, ಬಳಿಕ ಮಲ್ಲಾಪುರ ಕೆರೆ, ಗೋನೂರು ಕೆರೆ, ರಾಣಿ ಕೆರೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕಿದೆ. ಈ ಕೆರೆಗಳು ಕಲುಷಿತ ಆಗದಂತೆ ತಡೆಗಟ್ಟುವ ಕಾರ್ಯ ತ್ವರಿತವಾಗಿ ಆಗಬೇಕಿದೆ. ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು.












Click it and Unblock the Notifications