ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳದಿದ್ರೆ ರಾಜೀನಾಮೆ: ರೇಣುಕಾಚಾರ್ಯ
ದಾವಣಗೆರೆ: 'ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ' ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ. ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ರಾತ್ರಿ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನಟ್ಟಾರು ಎಂಬ ಯುವಕ ತನ್ನ ಕೋಳಿ ಅಂಗಡಿ ಮುಚ್ಚಿ ಮನೆಗೆ ತೆರಳುವ ವೇಳೆ ಕೇರಳ ನೋಂದಣಿಯ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಘಟನೆಗೆ ಹಲವು ಹಿಂದೂ ಸಂಘಟನೆಗಳು ಕಿಡಿ ಕಾರಿವೆ. ಹೊನ್ನಾಳಿ ಬಿಜೆಪಿ ಶಾಸಕ ಕೂಡ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿದ್ದು, ರಾಜ್ಯದ ಉದ್ದಗಲಕ್ಕೆ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದು ನಮ್ಮ ಸರ್ಕಾರ ಯೋಗಿ ಆದಿತ್ಯನಾಥ್ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ ಎಂದಿದ್ದಾರೆ.

ಹಿಂದೂ ಕಾರ್ಯಕರ್ತರನ್ನು
ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ? ಪ್ರತಿ ಬಾರಿ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್‌ಗಳಿಂದ ಏನೂ ಪ್ರಯೋಜನವಿಲ್ಲ. ನಮ್ಮ ಸರ್ಕಾರ ಹಿಂದೂ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್‌ಕೌಂಟರ್ ಮಾಡಬೇಕು ಎಂದಿದ್ದಾರೆ.

ಅಧಿಕಾರಕ್ಕಿಂದ ಹಿಂದುಗಳ ರಕ್ಷಣೆಯೇ ಮುಖ್ಯ
ನನಗೆ ವೈಯಕ್ತಿಕವಾಗಿ ಅಧಿಕಾರಕ್ಕಿಂತ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ. ಆದ್ದರಿಂದ ರಾಜ್ಯ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಮತ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಯೋಚಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ನನಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನೂ ಸಹ ಪೊಲೀಸ್ ಇಲಾಖೆ ಇದುವರೆಗೂ ಪತ್ತೆ ಹಚ್ಚಿಲ್ಲ ಎಂದು ಹೇಳಿಕೊಳ್ಳುವುದಕ್ಕೆ ನನಗೆ ಮುಜುಗರವಾಗುತ್ತದೆ.

ಕ್ರಮ ತೆಗೆದುಕೊಂಡರೆ ಮಾತ್ರ ಸರಕಾರದಲ್ಲಿ ಉಳಿಯುತ್ತೇನೆ
ಜನತೆಗೆ ಬೇಕಾಗಿರುವುದು ನಮ್ಮ ಪೌರುಷದ ಭಾಷಣ ಅಥವಾ ಹೇಳಿಕೆಗಳಲ್ಲ, ನಾವು ತೆಗೆದುಕೊಳ್ಳುವ ನಿರ್ದಾಕ್ಷಿಣ್ಯ ಕ್ರಮಗಳು. ಹಿಂದೂ ಸಮೂಹ ನಮ್ಮ ಮೇಲೆ ಇಟ್ಟಿರುವ ಭರವಸೆಯನ್ನ ಉಳಿಸಿಕೊಳ್ಳಲು ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಾನು ಈ ಸರ್ಕಾರದಲ್ಲಿ ಮುಂದುವರೆಯುತ್ತೇನೆ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎನ್ನುವುದನ್ನು ಮತ್ತೊಮ್ಮೆ ಹೇಳುತ್ತೇನೆ ಎಂದು ಎಂ. ಪಿ. ರೇಣುಕಾಚಾರ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

1 ಲಕ್ಷ ರೂ. ಪರಿಹಾರ ಘೋಷಣೆ
ಬಿಜೆಪಿ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ವೈಯಕ್ತಿಕವಾಗಿ 1ಲಕ್ಷ ರೂಪಾಯ ಧನಸಹಾಯ ನೀಡುತ್ತೇನೆ. ನಾವು ಎಷ್ಟು ಕೋಟಿ ಕೊಟ್ಟರೂ ಪ್ರವೀಣ್ ಅವರ ಜೀವವನ್ನು ವಾಪಾಸ್ ತರಲು ಸಾಧ್ಯವಿಲ್ಲ ಎನ್ನುವುದು ಗೊತ್ತಿರುವ ವಿಚಾರ. ಆದರೆ ಪ್ರವೀಣ್ ಅವರ ಕುಟುಂಬದ ದುಃಖದಲ್ಲಿ ಭಾಗಿಯಾಗುವುದು ನಮ್ಮೆಲ್ಲರ ಕರ್ತವ್ಯ ಎಂದು ರೇಣುಕಾಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications