Madal Virupakshappa : ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ
ದಾವಣಗೆರೆ, ಮಾರ್ಚ್ 27; ಚನ್ನಗಿರಿಯ ಬಿಜೆಪಿ ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಲಾಗಿದೆ. ಚುನಾವಣೆಗೆ ಕೆಲವೇ ದಿನಗಳು ಇರುವಾಗ ಹಾಲಿ ಬಿಜೆಪಿ ಶಾಸಕನನ್ನು ಲೋಕಾಯುಕ್ತರು ಬಂಧಿಸಿರುವುದು ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ. ಶಾಸಕರ ನಿರೀಕ್ಷಣಾ ಜಾಮೀನನ್ನು ಸೋಮವಾರ ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು.
ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ರದ್ದಾಗುತ್ತಿದ್ದಂತೆಯೇ ಲೋಕಾಯುಕ್ತ ಪೊಲೀಸರು ಚನ್ನಗಿರಿಯ ಅವರ ನಿವಾಸಕ್ಕೆ ತೆರಳಿದ್ದರು. ಅವರು ಮನೆಯಲ್ಲಿ ಇಲ್ಲದ ಕಾರಣ ಬಂಧಿಸಲು ಕಾದು ಕುಳಿತಿದ್ದರು. ಅಂತಿಮವಾಗಿ ಸಂಜೆ 7 ಗಂಟೆ ಸುಮಾರಿಗೆ ಮಾಡಾಳ್ ವಿರೂಪಾಕ್ಷಪ್ಪರನ್ನು ಲೋಕಾಯುಕ್ತ ಪೊಲೀಸರು ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬಂಧಿಸಿದ್ದಾರೆ. ಅವರು ಬೆಂಗಳೂರಿಗೆ ಬರುವಾಗ ಪೊಲೀಸರು ಬಂಧಿಸಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಟೆಂಡರ್‌ಗೆ ಲಂಚ ಪಡೆಯುವಾಗ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯಕ್ತರ ಕೈಗೆ ಸಿಕ್ಕಿಬಿದ್ದರು. ಈ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಮೊದಲ ಆರೋಪಿಯಾಗಿದ್ದಾರೆ. ಆದರೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದ ಕಾರಣಕ್ಕೆ ಅವರನ್ನು ಬಂಧಿಸಲು ಸಾಧ್ಯವಾಗಿರಲಿಲ್ಲ.
ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಲೋಕಾಯುಕ್ತ ಪೊಲೀಸರು ದಾಖಲು ಮಾಡಿರುವ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಸಹ ಮತ್ತೊಂದು ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ಆದರೆ ಲೋಕಾಯುಕ್ತ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಎಂದು ಸೂಚನೆ ನೀಡಿತ್ತು. ಬಳಿಕ ಶಾಸಕರು ಎರಡು ದಿನ ವಿಚಾರಣೆ ಎದುರಿಸಿದ್ದರು.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಟೆಂಡರ್‌ಗೆ 40 ಲಕ್ಷ ರೂ. ಲಂಚ ಪಡೆಯುವಾಗ ಶಾಸಕರ ಪುತ್ರ ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದರು. ಬಳಿಕ ಅವರ ಮನೆ ಮೇಲೆ ದಾಳಿ ಮಾಡಿದಾಗ 6 ಕೋಟಿ ರೂ. ನಗದು ಹಣ ಪತ್ತೆಯಾಗಿತ್ತು. ಚನ್ನಗಿರಿಯಲ್ಲಿರುವ ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೆಯೂ ಲೋಕಾಯುಕ್ತರು ದಾಳಿ ಮಾಡಿದ್ದರು. ಆಗ ಹಣ, ಚಿನ್ನ ಪತ್ತೆಯಾಗಿತ್ತು.
ಮಾಡಾಳ್ ವಿರೂಪಾಕ್ಷಪ್ಪಗೆ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದನ್ನು ಲೋಕಾಯುಕ್ತ ಪೊಲೀಸರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಆದರೆ ಸೋಮವಾರ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಶಾಸಕರಿಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದುಗೊಳಿಸಿತ್ತು. ಈ ಆದೇಶ ಹೊರಬಿದ್ದ ಬಳಿಕ ಲೋಕಾಯುಕ್ತ ಪೊಲೀಸರು ಶಾಸಕರನ್ನು ಬಂಧಿಸಲು ಅವರ ನಿವಾಸಕ್ಕೆ ಆಗಮಿಸಿದ್ದರು.

ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಬಂಧನದ ಬಳಿಕ ನಾಪತ್ತೆಯಾಗಿದ್ದರು. ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡುವ ತನಕ ಅವರು ಪತ್ತೆಯಾಗಿರಲಿಲ್ಲ. ಲೋಕಾಯಕ್ತರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದರೂ ಸಹ ಅವರು ಪತ್ತೆಯಾಗಿರಲಿಲ್ಲ. ಅಂತಿಮವಾಗಿ ನಿರೀಕ್ಷಣಾ ಜಾಮೀನು ಸಿಕ್ಕ ಬಳಿಕ ಅವರು ಚನ್ನಗಿರಿಯ ನಿವಾಸಕ್ಕೆ ಆಗಮಿಸಿದ್ದರು. ಆಗ ಅಪಾರ ಬೆಂಬಲಿಗರು ಅವರನ್ನು ಸ್ವಾಗತಿಸಿದ್ದರು.
ಪುತ್ರ ಪ್ರಶಾಂತ್ ಮಾಡಾಳ್ ಬಂಧನವಾಗುತ್ತಿದ್ದಂತೆಯೇ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದರು. ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡುವಾಗ ಕೆಎಸ್‌ಡಿಎಲ್ ಕಚೇರಿಗೆ ತೆರಳಬಾರದು ಎಂದು ಸಹ ಷರತ್ತು ಹಾಕಿತ್ತು.
ಮಾಡಾಳ್ ವಿರೂಪಾಕ್ಷಪ್ಪರನ್ನು ಲೋಕಾಯುಕ್ತ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಲೋಕಾಯುಕ್ತ ಕಚೇರಿಗೆ ಅವರನ್ನು ಕರೆತಂದು ವಿಚಾರಣೆ ನಡೆಸುವ ನಿರೀಕ್ಷೆ ಇದೆ. ನ್ಯಾಯಾಧೀಶರ ಮುಂದೆ ಶಾಸಕರನ್ನು ಇಂದು ಹಾಜರುಪಡಿಸುತ್ತಾರೆಯೋ?. ಅಥವ ಮಂಗಳವಾರ ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆಯೋ? ಎಂದು ತನಿಖಾಧಿಕಾರಿಗಳು ತೀರ್ಮಾನಿಸಲಿದ್ದಾರೆ.












Click it and Unblock the Notifications