ದಾವಣಗೆರೆಯಲ್ಲಿ ಲಂಚಗುಳಿತನ ಹೆಚ್ಚಿರುವ ದೂರಿದೆ, ಅಂತವರಿಗೆ ಜಾಗವಿಲ್ಲ-ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ
ದಾವಣಗೆರೆ, ಜೂನ್ 5: ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋತ್ತರಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ಜನ ಬದಲಾವಣೆ ಬಯಸಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸದೇ ಉಡಾಫೆ, ಅಸಡ್ಡೆ ಮಾಡುವ ಅಧಿಕಾರಿಗಳಿಗೆ ಜಾಗವಿಲ್ಲ. ಅಂತವರ ಮೇಲೆ ಯಾರದೂ ಮುಲಾಜಿಲ್ಲದೇ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು.
ಅಧಿಕಾರಿಗಳು ಜನಪ್ರತಿನಿಧಿಗಳ ಜೊತೆ ಉತ್ತಮವಾದ ಸಂಬಂಧ ಇಟ್ಟುಕೊಳ್ಳಬೇಕು. ಅವರು ಪ್ರತಿನಿಧಿ, ಅಧಿಕಾರಿಗಳು ಜನ ಸೇವಕರು, ಜನರ ಕಷ್ಟ, ಸುಖಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು. ಆದರೆ ವಿಳಂಬ ಮಾಡಬಾರದು. ವಿಳಂಬ ಮಾಡುವುದು ಸಹ ಒಂದು ರೀತಿಯ ಭ್ರಷ್ಟಾಚಾರ ಮಾಡಿದಂತೆ. ಜಿಲ್ಲಾ ಮಟ್ಟದಲ್ಲಿ ಜನಸ್ನೇಹಿ ಆಡಳಿತ ಇರಬೇಕು. ಜನರು ಕಚೇರಿಗಳಿಗೆ ಬಂದಾಗ ಗೌರವಯುತವಾಗಿ ನಡೆದುಕೊಂಡು, ಕಷ್ಟಗಳಿಗೆ ಪರಿಹಾರ ಮಾಡುವುದಲ್ಲದೇ ಜನರ ಜೊತೆ ಸೌಜನ್ಯಯುತವಾಗಿ ನಡೆದುಕೊಳ್ಳಬೇಕು ಎಂದರು.

ದಾವಣಗೆರೆ ಜಿಲ್ಲೆ ಬಹಳ ಪ್ರಗತಿ ಪರವಾದ ಜಿಲ್ಲೆಯಾಗಿದ್ದು ಇನ್ನಷ್ಟು ಪ್ರಗತಿ ಕಾಣಬೇಕಾಗಿದೆ. ಜಿಲ್ಲೆಯ ಅಭಿವೃದ್ದಿಯಲ್ಲಿ ವಿವಿಧ ಇಲಾಖೆಗಳ ಪಾತ್ರ ಬಹಳ ಪ್ರಮುಖವಾಗಿದೆ. ತಹಶೀಲ್ದಾರರ ಕಚೇರಿ ಜನರಿಗೆ ಹೆಚ್ಚು ಸೇವೆ ಕೊಡುವ ಕಚೇರಿಯಾಗಿದ್ದು ಇಲ್ಲಿ ಲಂಚಗುಳಿತನ, ಅಲೆದಾಡಿಸುವುದು ಹೆಚ್ಚಿದೆ ಎಂಬ ದೂರುಗಳಿವೆ, ಇದಕ್ಕೆ ಅವಕಾಶ ನೀಡುವುದಿಲ್ಲ. ತಹಶೀಲ್ದಾರ್ ಕಚೇರಿ, ಪೊಲೀಸ್ ಸ್ಟೇಷನ್, ತಾಲ್ಲೂಕು ಪಂಚಾಯತ್, ಕೃಷಿ, ರೇಷ್ಮೆ, ತೋಟಗಾರಿಕೆ, ಸಮಾಜ ಕಲ್ಯಾಣ ಸೇರಿದಂತೆ ಇಲಾಖೆಗಳು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ಅಧಿಕಾರಿಗಳ ಕ್ಷೇತ್ರ ಭೇಟಿಗೆ ಸೂಚನೆ
ಜಿಲ್ಲಾಧಿಕಾರಿ ತಹಶೀಲ್ದಾರ್ ಕಚೇರಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಗಳಿಗೆ, ಆಸ್ಪತ್ರೆಗಳಿಗೆ ಭೇಟಿ ನೀಡಬೇಕು. ಇದರಿಂದ ಕೆಳಗಿನ ಅಧಿಕಾರಿಗಳು ಜಾಗೃತರಾಗುವರು. ಅಧಿಕಾರಿಗಳು ತಮ್ಮ ಜವಾಬ್ದಾರಿ, ಕರ್ತವ್ಯವನ್ನು ಸಮಾಜದ ಅಭಿವೃದ್ದಿಗಾಗಿ ಮಾಡಬೇಕು. ಮೇಲಾಧಿಕಾರಿಗಳು ಪದೇ ಪದೇ ಭೇಟಿ ನೀಡಿ ಕೆಲಸ ಕಾರ್ಯಗಳ ಪರಿಶೀಲನೆ, ಉಸ್ತುವಾರಿ ಮಾಡಲಿಲ್ಲವೆಂದರೆ ಭ್ರಷ್ಟಾಚಾರ ಕಡಿಮೆಯಾಗುವುದಿಲ್ಲ. ಜಿಲ್ಲಾ ಮಟ್ಟದ ಆಡಳಿತ ಸದಾ ಪಾರದರ್ಶಕವಾಗಿರಬೇಕು ಎಂದರು.
ಸಾರ್ವಜನಿಕರಿಂದ ದೂರುಗಳಿಗೆ ಪ್ರತಿಕ್ರಿಯಿಸಿ
ಪತ್ರಿಕೆಗಳು, ಟಿ.ವಿ.ಗಳಲ್ಲಿ ಮತ್ತು ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುವ ಕೆಲಸ ಮಾಡಬೇಕು. ಅನೇಕ ಅಧಿಕಾರಿಗಳು ಕ್ಷೇತ್ರಗಳಿಗೆ ಹೋಗದೆ ಹವಾನಿಯಂತ್ರಿತ ಕೊಠಡಿಗಳಲ್ಲಿ ಕೂತು ಹೋಗುತ್ತಾರೆ. ಸರ್ಕಾರ ವಾಹನ ಸೇರಿದಂತೆ ಎಲ್ಲಾ ಸೌಲಭ್ಯ ನೀಡಿದ್ದು ಐಷರಾಮಿ ಜೀವನ ಮಾಡಲಿ ಎಂದಲ್ಲ, ಜನರ ಕೆಲಸ ಮಾಡಲಿ ಎಂದು, ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳದೇ ಜನರ ಕೆಲಸ ಮಾಡಬೇಕೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು ಎಂದರು.

ಪೂರ್ವ ಮುಂಗಾರಿನಲ್ಲಿ ಬಿದ್ದ ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಬೆಳೆಗಳಿಗೆ ಹಾನಿಯಾಗಿದ್ದು ಇದಕ್ಕೆ ಎಸ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಲಾಗುತ್ತದೆ. ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಜಿಲ್ಲಾ ಮಂತ್ರಿಯಾಗುತ್ತಾರೆ. ಅವರು ಸುಧೀರ್ಘವಾಗಿ ಕೆಡಿಪಿ ಸಭೆಗಳನ್ನು ನಡೆಸುವರು. ಈ ವೇಳೆ ಜಿಲ್ಲೆಯ ಶಾಸಕರುಗಳು ಚರ್ಚಿಸಿ ಜಿಲ್ಲೆಯಲ್ಲಿ ಈ ಹಿಂದೆ ಏನಾಗಿತ್ತು, ಮುಂದೆ ಏನಾಗಬೇಕೆಂದು ಜಿಲ್ಲೆಯ ಅಭಿವೃದ್ದಿ ಕುರಿತು ಚರ್ಚೆ ಮಾಡಿ ಎಂದು ಸಲಹೆ ನೀಡಿದರು.
ಏಯ್ ಕುಳಿತ್ಕೋ...ನಾನಿನ್ನು ಇಲ್ಲೇ ಇದ್ದೇನೆ: ಎಸ್‌ಪಿ ವಿರುದ್ಧ ಸಿಎಂ ಗರಂ
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರೆದಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆದ ಪ್ರಸಂಗ ನಡೆಯಿತು.
ಸಭೆ ಇನ್ನೇನೂ ಮುಗಿಯಿತು ಎಂದು ಎಸ್‌ಪಿ ಅರುಣ್ ಅವರು ಹೊರಡಲು ಅಣಿಯಾದರು. ಈ ವೇಳೆ ಏಯ್ ಎಸ್‌ಪಿ ಕುಳಿತ್ಕೋ. ನಾನು ಇನ್ನು ಮಾತನಾಡುವುದು ಇದೆ ಎಂದು ಹೇಳಿದರು. ಆಗ ಎದ್ದು ನಿಂತ ಎಸ್‌ಪಿ ಅವರು ಮತ್ತೆ ಆಸೀನರಾದರು.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಯಾರೂ ಸಹ ಕಾನೂನು ಕೈಗೆತ್ತಿಕೊಳ್ಳಬಾರದು. ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಪ್ರತಿಯೊಬ್ಬರೂ ಕಾನೂನು ಮತ್ತು ಸುವ್ಯವಸ್ಥೆಗೆ ಕಾಪಾಡಲು ಸಹಕರಿಸಬೇಕು. ನೈತಿಕ ಪೊಲೀಸ್ ಗಿರಿಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ನೈತಿಕವಾಗಲೀ, ಅನೈತಿಕ ಪೊಲೀಸ್ ಗಿರಿಯಾಗಲಿ ನಡೆಯಬಾರದು. ಅರ್ಥ ಆಯ್ತಾ ನಾನು ಹೇಳಿದ್ದು. ಎಲ್ಲಿಯೂ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಆಗಬಾರದು. ಕಾನೂನಿನ ಮುಂದೆ ಎಲ್ಲರೂ ಒಂದೇ ಎಂದು ಹೇಳಿದರು.












Click it and Unblock the Notifications