ದಾವಣಗೆರೆ: ಸರ್ಕಾರಿ ಜಮೀನು ಒತ್ತುವರಿಗೆ ಮುಂದಾದ್ರೆ ಕಟ್ಟುನಿಟ್ಟಿನ ಕ್ರಮ ಎಂದ ಜಿಲ್ಲಾಧಿಕಾರಿ
ದಾವಣಗೆರೆ, ಸೆಪ್ಟೆಂಬರ್ 25: ಕಾನೂನಿನ ಪ್ರಕಾರ ಸರ್ಕಾರಿ ಜಮೀನುಗಳನ್ನು ಅನುಮತಿ ಇಲ್ಲದೆ, ಯಾರೂ ಸಹ ಒತ್ತುವರಿ ಮಾಡಿಕೊಳ್ಳುವಂತಿಲ್ಲ. ಆದರೂ, ಕೆಲವೆಡೆ ಇಂತಹ ಕಾರ್ಯಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಇದೀಗ ದಾವಣಗೆರೆ ಭಾಗದಲ್ಲಿ ಇಂತಹ ಯಾವುದೇ ಭೂಮಿಗಳನ್ನು ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಖಡಕ್ ಸೂಚನೆ ನೀಡಿದ್ದಾರೆ. ಹಾಗಾದ್ರೆ ಇನ್ನೂ ಏನೆಲ್ಲಾ ಹೇಳಿದ್ದೇ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಕೆಲ ಹಳ್ಳಿಗಳಲ್ಲಿ ಅಮಾಯಕ ಜನರು ಅವರಿಗೇ ಅದು ಸರ್ಕಾರಿ ಜಮೀನು ಅಂತಾ ಗೊತ್ತಿಲ್ಲದೆ, ಅಲ್ಲಿ ವಾಸ ಮಾಡುತ್ತಿದ್ದಾರೆ. ಇದೀಗ ಇಂತಹ ಜಮೀನುಗಳಲ್ಲಿ ವಾಸ ಆಗಿರುವ ಜನರಿಗೆ ಆತಂಕ ಶುರುವಾಗಿದೆ. ಹೌದು.. ಯಾರೂ ಸಹ ಸರ್ಕಾರಿ ಜಮೀನನ್ನು ಒತ್ತುವರಿ ಮಾಡುವಂತಿಲ್ಲ. ಒಂದು ವೇಳೆ ಹೀಗೆ ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿನ ಸರ್ಕಾರಿ ಜಮೀನುಗಳನ್ನು ಒತ್ತುವರಿ ಮಾಡಿದರೆ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಮೂರನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ವೇಳೆ ಈ ವಿಚಾರನ್ನು ಹೇಳಿದರು.
ಜಗಳೂರು ತಾಲ್ಲೂಕು ಚಿದರುವಳ್ಳಿ ಗ್ರಾಮದ 13 ಹೆಕ್ಟೇರ್ ಜಮೀನಿನಲ್ಲಿ ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅನೇಕ ಬಡ ಕುಟುಂಬದವರು ಮನೆಗಳನ್ನು ನಿರ್ಮಾಣ ಮಾಡಿಕೊಂಡಿರುತ್ತಾರೆ. ಆ ಪ್ರದೇಶವನ್ನು ಕಂದಾಯ ಗ್ರಾಮವನ್ನಾಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ.
ಕಂದಾಯ ಗ್ರಾಮವಾಗಿ ಘೋಷಣೆ ಮಾಡಿದ ನಂತರ ಅಧಿಕೃತವಾಗಿ ಹಕ್ಕುಪತ್ರ ಸಹ ವಿತರಣೆ ಮಾಡಲಾಗುವುದು. ಆ ಪ್ರದೇಶದಲ್ಲಿ ಪ್ರಸ್ತುತ ಯಾವುದೇ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುವಂತಿಲ್ಲ. ಒಂದೇ ವೇಳೆ ಇದನ್ನು ಮೀರಿ ಕಾನೂನು ಬಾಹಿರವಾಗಿ ನಿರ್ಮಾಣ ಕಾರ್ಯಗಳನ್ನು ಆರಂಭಿಸಿದರೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇನ್ನು ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದ್ದರೆ, ಅದನ್ನು ಪರಿಶೀಲಿಸಿ ಸೂಕ್ತ ಕ್ರಮವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದರು. ನೆರೆ ಜಿಲ್ಲೆಗಳಿಂದ ಹೆಚ್ಚು ವಿದ್ಯಾರ್ಥಿಗಳು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ವಿದ್ಯಾರ್ಥಿನಿಲಯಗಳ ಬೇಡಿಕೆ ಹೆಚ್ಚಿದೆ. ಆದ್ದರಿಂದ ಇನ್ನೂ 4-5 ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಲಾಗುವುದು. ಅಗತ್ಯ ಇದ್ದರೆ, ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡಗಳಲ್ಲಿ ಪ್ರಾರಂಭ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.












Click it and Unblock the Notifications