ದಾವಣಗೆರೆಗೆ ಭೇಟಿ ನೀಡಿದ ಉಸ್ತುವಾರಿ ಸಚಿವ ಭೈರತಿ ಬಸವರಾಜ್
ದಾವಣಗೆರೆ. ಏಪ್ರಿಲ್ 13: ರಾಜ್ಯದಲ್ಲಿ ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿದೆ. ಮುಖ್ಯಮಂತ್ರಿ ನೇತೃತ್ವದ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ದಾವಣಗೆರೆಗೆ ಭೇಟಿ ನೀಡಿದ ಅವರು, ಸರ್ಕ್ಯೂಟ್ ಹೌಸ್ ನಲ್ಲಿ ವರದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ. ಈ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುತ್ತೇನೆ ಎಂದರು.
ಸಂಸದರು, ಶಾಸಕರು ಒಳಗೊಂಡಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ದಿಯನ್ನು ಪ್ರಾಮಾಣಿಕವಾಗಿ ಮಾಡಲಾಗುವುದು ಎಂದ ಅವರು, ಮಹಾಮಾರಿ ಕೊರೊನಾ ಎಲ್ಲೆಡೆ ವ್ಯಾಪಿಸುತ್ತಿದೆ. ಮುಖ್ಯಮಂತ್ರಿಗಳ ಆದೇಶದಂತೆ ಜಿಲ್ಲೆಗೆ ಭೇಟಿ ನೀಡಿದ್ದೇನೆ. ವಿಶೇಷ ಸಭೆ ಕರೆದು ಚರ್ಚೆ ಎಲ್ಲಾ ವಿಷಯಗಳ ಕುರಿತಂತೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ಕೊವಿಡ್ ನಿಂದಾಗಿ ರಾಜ್ಯದಲ್ಲಿ ರೈತರ ಸಮಸ್ಯೆ ಹೆಚ್ಚಾಗುತ್ತಿದೆ. ಪಡಿತರ ಆಹಾರ ಪೂರೈಕೆ ಬಗ್ಗೆ ಯಾವುದೇ ಸಮಸ್ಯೆಗಳು ಉಂಟಾಗದಂತೆ ಕ್ರಮವಹಿಸುವ ಅಗತ್ಯವಿದೆ. ತೊಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಮರ್ಪಕವಾಗಿ ರೈತರ ನೆರವಿಗೆ ಧಾವಿಸುವಂತೆ ಕ್ರಮ ಕೈಗೊಳ್ಳಲಾಗುವುದು.
ಮುಖ್ಯವಾಗಿ ಕೃಷಿ ಇಲಾಖೆಯಲ್ಲಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ, ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆ ನಿಗದಿ ಸೇರಿದಂತೆ ಮುಂದಿನ ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗಲಿದೆ ಆದ್ದರಿಂದ ಅವರಿಗೆ ಬಿತ್ತನೆ ಬೀಜ ಸಮರ್ಪಕವಾಗಿ ಸಿಗುವಂತೆ ಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಸಚಿವ ಭೈರತಿ ಬಸವರಾಜು ಹೇಳಿದರು.
ಪ್ರತ್ಯೇಕವಾಗಿ ಪ್ರತಿ ತಾಲ್ಲೂಕುಗಳಿಗೂ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳ ಪರಿಹಾರಕ್ಕಾಗಿ ಸ್ಥಳೀಯ ಶಾಸಕರೊಂದಿಗೆ ಸಭೆ ನಡೆಸಲಾಗುವುದು. ವಿಶೇಷವಾಗಿ ರೈತರ ಸಮಸ್ಯೆಗಳು ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯ ಮಾಡಲಾಗುವುದು. ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳಿಲ್ಲ, ಇದು ಸಂತೋಷದ ವಿಷಯ. ಕೊರೊನಾ ನಿರ್ಮೂಲನೆಗೆ ಲಾಕ್ ಡೌನ್ ನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಸಮರೊಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.
ಈ ವೇಳೆ ಶಾಸಕರುಗಳಾದ ಎಸ್.ಎ ರವೀಂದ್ರನಾಥ್, ಎಂ.ಪಿ ರೇಣುಕಾಚಾರ್ಯ, ಪ್ರೋ.ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮೇಯರ್ ಬಿ.ಜೆ ಅಜಯ್ ಕುಮಾರ್, ಜಿ.ಪಂ ಸಿಇಒ ಪದ್ಮಾ ಬಸವಂತಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ್ ಮುದ್ದಜ್ಜಿ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಹಾಗೂ ಅಧಿಕಾರಿಗಳಿದ್ದರು.












Click it and Unblock the Notifications