Dhruva Narayan: ಆರ್.ಧ್ರುವನಾರಾಯಣ ನಿಧನ: ಹೊನ್ನಾಳಿ, ಹರಿಹರ ಪ್ರಜಾಧ್ವನಿ ಯಾತ್ರೆ ರದ್ದು
ದಾವಣಗೆರೆ, ಮಾರ್ಚ್ 11: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಧ್ರುವನಾರಾಯಣ ನಿಧನದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಹಾಗೂ ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಯಾತ್ರೆ ರದ್ದುಗೊಳಿಸಲಾಗಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಹಾಗೂ ಹರಿಹರದಲ್ಲಿ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಗೆ ಸಕಲ ಸಿದ್ಧತೆ ಮಾಡಲಾಗಿತ್ತು . ಶುಕ್ರವಾರ ಚನ್ನಗಿರಿ, ಬಸವಾಪಟ್ಟಣ, ಜಗಳೂರಿನಲ್ಲಿ ಪ್ರಜಾಧ್ವನಿ ಯಾತ್ರೆ ನಡೆದಿತ್ತು.

ದಾವಣಗೆರೆ ಬಾಪೂಜಿ ಗೆಸ್ಟ್ ಹೌಸ್‌ನಲ್ಲಿ ತಂಗಿದ್ದ ಸಿದ್ದರಾಮಯ್ಯ ಅವರು ಹೊನ್ನಾಳಿಗೆ ಹೊರಡಲು ಸಿದ್ದರಾಗುತ್ತಿದ್ದರು. ಈ ವೇಳೆ ಧ್ರುವನಾರಾಯಣ ಅವರ ಸಾವಿನ ಸುದ್ದಿ ಬಂದಿದ್ದು, ದಾವಣಗೆರೆ ಜಿಲ್ಲೆಯ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಸಿದ್ದರಾಮಯ್ಯ ದಾವಣಗೆರೆಯಿಂದ ಧ್ರುವನಾರಾಯಣ ಅವರ ಅಂತಿಮ ದರ್ಶನಕ್ಕೆ ತೆರಳಿದರು.
ಇನ್ನು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಧ್ರುವನಾರಾಯಣ ನಿಧನ ದೊಡ್ಡ ನಷ್ಟ. ಪಕ್ಷಕ್ಕೆ ಹಾಗೂ ನಾಡು ಓರ್ವ ಅತ್ಯುತ್ತಮ ರಾಜಕಾರಣಿ ಕಳೆದುಕೊಂಡಂತಾಗಿದೆ. ಇಂಥ ಸಾವು ಬರುತ್ತೆ ಎಂದುಕೊಂಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಆರ್. ಧ್ರುವನಾರಾಯಣ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಧ್ರುವನಾರಾಯಣ್ ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ತನ್ನ ಶ್ರಮ, ಪ್ರಬುದ್ಧತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ್ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು, ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ. ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ ನೆನಪಲ್ಲಿರುತ್ತದೆ ಎಂದು ನೋವಿನಿಂದ ಪ್ರತಿಕ್ರಿಯಿಸಿದ್ದಾರೆ.












Click it and Unblock the Notifications