M.P.Renukacharya: ಸಿಎಂ, ಡಿಸಿಎಂ, ಎಸ್.ಎಸ್.ಮಲ್ಲಿಕಾರ್ಜುನ್ ಭೇಟಿ ಬಗ್ಗೆ ಎಂ.ಪಿ.ರೇಣುಕಾಚಾರ್ಯ ಹೇಳಿದ್ದೇನು ಗೊತ್ತಾ?
ದಾವಣಗೆರೆ, ಆಗಸ್ಟ್, 26: ಬಿಜೆಪಿ ಮಾಜಿ ಶಾಸಕ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ವದಂತಿಗೆ ಪ್ರತಿಕ್ರಿಯಿಸಿದ್ದು, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದು ಹೊನ್ನಾಳಿಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಹೊನ್ನಾಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವುದಿಲ್ಲ. ನನ್ನನ್ನು ಅವರು ಕರೆದೂ ಇಲ್ಲ, ನಾನು ಹೋಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ ಎಂದು ಹೇಳಿದರು.

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕನ್ನು ಬರಪಟ್ಟಿಗೆ ಸೇರಿಸುವಂತೆ ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡಿದ್ದೇನೆ. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ಅದೇ ರೀತಿಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಭೇಟಿ ಮಾಡಿದ್ದೇನೆ. ಈ ನಾಯಕರ ಭೇಟಿ ಉದ್ದೇಶ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡುವಂತೆ ಒತ್ತಾಯಿಸಲು. ಈ ವಿಚಾರ ಬಿಟ್ಟು ಬೇರೆ ವಿಚಾರ ಮಾತನಾಡಿಲ್ಲ. ನಾನು ಕಾಂಗ್ರೆಸ್ ಸೇರಲ್ಲ, ಈ ಬಗ್ಗೆ ಆಸಕ್ತಿಯೂ ಇಲ್ಲ ಎಂದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಕೃಷ್ಣ ಭೈರೇಗೌಡರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಮಾಜಿ ಶಾಸಕನಾಗಿ ನನ್ನ ಕರ್ತವ್ಯವನ್ನು ಮಾಡಿದ್ದೇನೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವುದಿಲ್ಲ ಎಂದರು.
ಮುಂಬರುವ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿಯ ಪ್ರಬಲ ಆಕ್ಷಾಂಕ್ಷಿ ಎಂದು ನಾನು ಹೇಳಿದ್ದೇನೆ. ನನಗೆ ಲೋಕಸಭೆಗೆ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸ ಇದೆ. ಹಲವು ವರ್ಷಗಳಿಂದ ಬಿಜೆಪಿಯಲ್ಲಿ ದುಡಿದಿದ್ದೇನೆ. ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಿದ ಅನುಭವವಿದೆ. ವಿಶ್ವ ಮೆಚ್ಚಿದ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರ 9 ವರ್ಷಗಳ ಕ್ರಾಂತಿಕಾರಕ ಅಭಿವೃದ್ಧಿ ಕಾರ್ಯಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿವೆ. ಬೇರೆಯವರಿಗೆ ಬಿಜೆಪಿ ಟಿಕೆಟ್ ಕೊಟ್ಟರೂ ಗೆಲುವಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.
ದಾವಣಗೆರೆ ಲೋಕಸಭಾ ಕ್ಷೇತ್ರವು ಬಿಜೆಪಿ ಭದ್ರಕೋಟೆಯಾಗಿದೆ. ಜಿ.ಎಂ. ಸಿದ್ದೇಶ್ವರ ಅವರು ಈಗಾಗಲೇ ನಾಲ್ಕು ಬಾರಿ ಗೆದ್ದಿದ್ದಾರೆ. ನನಗೂ ಅವಕಾಶ ನೀಡುವಂತೆ ಮನವಿ ಮಾಡುತ್ತೇನೆ. ಹಾಗೆಂದ ಮಾತ್ರಕ್ಕೆ ನನಗೆ ಟಿಕೆಟ್ ಕೊಡಬೇಕು ಎಂಬುದಲ್ಲ. ನಾನೂ ಸಹ ಟಿಕೆಟ್ ಆಕಾಂಕ್ಷಿ ಎಂದು ರೇಣುಕಾಚಾರ್ಯ ತಿಳಿಸಿದರು.












Click it and Unblock the Notifications