ವೀರಶೈವ ಲಿಂಗಾಯತ ಮಹಾಸಭಾದ ಅಧಿವೇಶನಕ್ಕೆ ಸಿದ್ದರಾಮಯ್ಯಗೆ ಆಹ್ವಾನ ಇಲ್ಲ: ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?
ದಾವಣಗೆರೆ, ಡಿಸೆಂಬರ್, 18: ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಮಹಾ ಅಧಿವೇಶನ ದಾವಣಗೆರೆಯಲ್ಲಿ ನಡೆಯುತ್ತಿರುವ ಕಾರಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿಲ್ಲ. ಇದು ಸಮಾಜದ ಕಾರ್ಯಕ್ರಮ ಆಗಿರುವುದರಿಂದ ಕರೆದಿಲ್ಲ. ಹಾಗಾಗಿ, ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.
ನಗರದ ಎಂಸಿಸಿ ಬಿ ಬ್ಲಾಕ್‌ನ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಾತಿಗಣತಿ ವರದಿ ಅಂಗೀಕರಿಸಿ ಬಿಡುಗಡೆ ಸಂಬಂಧ ಈಗಾಗಲೇ ಮಹಾಸಭಾವು ಸ್ಪಷ್ಟ ನಿರ್ಧಾರ ಹೇಳಿದೆ ಎಂದು ತಿಳಿಸಿದರು.

ಜಾತಿಗಣತಿ ವರದಿ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿರುವುದು ನಾವು ಮಾತ್ರ ಅಲ್ಲ, ಒಕ್ಕಲಿಗ ಸಮುದಾಯ ಸೇರಿದಂತೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಜಾತಿಗಣತಿ ವಿರೋಧ ಮಾಡಿದರೆ ಕಾಂಗ್ರೆಸ್‌ಗೆ ನಷ್ಟ ಆಗಲ್ಲ. ನಾನು ಕಾಂಗ್ರೆಸಿಗ. ಪಕ್ಷಕ್ಕೆ ಪ್ರೋತ್ಸಾಹ ಮಾಡಲು ಇರುವುದು ಎಂದು ಹೇಳಿದರು. ಈ ಮೂಲಕ ಜಾತಿಗಣತಿ ವರದಿ ಅಂಗೀಕಾರಕ್ಕೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದರು.
ರಾಜ್ಯದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿರುವ ಕಾಂತರಾಜ್ ವರದಿ ಆಯೋಗದ ಜಾತಿಗಣತಿ ವಿಚಾರ ಅಂಗೀಕರಿಸಬಾರದು ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾವು ಮನವಿ ಸಲ್ಲಿಸಿದೆ. ಇದಕ್ಕೆ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಜಾತಿ ಗಣತಿ ವರದಿ ನಾನು ನೋಡಿಲ್ಲವೆಂದು ಅವರು ಹೇಳಿದ್ದಾರೆ. ಹಾಗಾಗಿ, ನಾವು ಕಾದು ನೋಡುತ್ತೇವೆ ಎಂದು ಹೇಳಿದರು.
ಮೊದಲು ವರದಿ ಬಿಡುಗಡೆ ಆಗಲಿ. ಜಾತಿಗಣತಿ ವರದಿ ಬಿಡುಗಡೆ ಮಾಡದೇ ವಿರೋಧ ಮಾಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರಲ್ವಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಸಿದ್ದರಾಮಯ್ಯರೂ ಸಹ ನಾನು ಸಹ ವರದಿ ನೋಡಿಲ್ಲ, ಲೋಪದೋಷವಾಗಿದ್ದರೆ ಸರಿಪಡಿಸುವ ಭರವಸೆ ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಊಹಾಪೋಹಕ್ಕೆ ಅವಕಾಶ ನೀಡುವುದು ಬೇಡ. ಎಲ್ಲರೂ ಒಟ್ಟಾಗಿ ಹೋಗೋಣ ಎಂದು ಹೇಳಿದರು.
ದಾವಣಗೆರೆಯಲ್ಲಿ ಡಿಸೆಂಬರ್ 23 ಮತ್ತು 24ರಂದು ನಡೆಯಲಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುವುದು. ಈಗಾಗಲೇ ಎಲ್ಲವನ್ನೂ ಹೇಳಲಾಗದು. ಸಮಾವೇಶದಲ್ಲಿ ತೆಗೆದುಕೊಳ್ಳುವ ನಿರ್ಣಯ ಕುರಿತಂತೆ ಮಹಾಸಭಾದ ಪದಾಧಿಕಾರಿಗಳು, ಸಮಾಜದ ಶ್ರೀಗಳು ಸೇರಿದಂತೆ ಎಲ್ಲರೊಟ್ಟಿಗೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಶಾಮನೂರು ಶಿವಶಂಕರಪ್ಪ ಅವರು ಹೇಳಿದರು.
ದಾವಣಗೆರೆಯಲ್ಲಿ ಡಿಸೆಂಬರ್ 23 ಹಾಗೂ 24ರಂದು ನಡೆಯಲಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧಿವೇಶನದಲ್ಲಿ ಶಕ್ತಿ ಪ್ರದರ್ಶನ ಮಾಡುತ್ತೇವೆ. ಸುಮಾರು ಎರಡರಿಂದ ಮೂರು ಲಕ್ಷಕ್ಕೂ ಹೆಚ್ಚು ಅಧಿಕ ಜನರು ಸೇರುವ ನಿರೀಕ್ಷೆ ಇದೆ ಎಂದು ಶಾಮನೂರು ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಈಗಾಗಲೇ ಎಂಬಿಎ ಮೈದಾನದಲ್ಲಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಲಕ್ಷಕ್ಕೂ ಅಧಿಕ ಖುರ್ಚಿಗಳನ್ನು ಹಾಕಲಾಗಿದೆ. ಊಟ, ವಸತಿ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದವರು ಸಹ ವಸತಿ, ಊಟದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ವಚನಾನಂದ ಸ್ವಾಮೀಜಿ ಅವರು ತಿಳಿಸಿದ್ದಾರೆ. ಯಾವುದೇ ರೀತಿಯ ತೊಂದರೆ ಆಗದಂತೆ ನಾವೂ ವ್ಯವಸ್ಥೆ ಮಾಡಿಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.
ಲಕ್ಷಾಂತರ ಜನರು ಪಾಲ್ಗೊಳ್ಳುವುದರಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ಸಿದ್ಧತೆ ನಡೆಯುತ್ತಿದ್ದು, ಇದಕ್ಕಾಗಿ ತಂಡಗಳನ್ನು ರಚಿಸಲಾಗಿದೆ. ಕೇರಳ, ಮಹಾರಾಷ್ಟ್ರ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಿಂದಲೂ ವೀರಶೈವ ಲಿಂಗಾಯತ ಸಮಾಜದವರು ಪಾಲ್ಗೊಳ್ಳುತ್ತಾರೆ. ಹಾಗಾಗಿ ನಮ್ಮ ನಿರೀಕ್ಷೆಗೂ ಹೆಚ್ಚಿನ ಸಮಾಜದ ಜನರು ಬರುವ ವಿಶ್ವಾಸ ಇದೆ ಎಂದು ಹೇಳಿದರು.
ರಾಷ್ಟ್ರಮಟ್ಟದ ಮಹಾಅಧಿವೇಶನ ಆಗಿರುವ ಕಾರಣಕ್ಕೆ ಬಂದವರೆಲ್ಲರನ್ನೂ ಚೆನ್ನಾಗಿ ನೋಡಿಕೊಳ್ಳುತ್ತೇವೆ. ಅಧಿವೇಶನದ ಯಶಸ್ಸಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.
ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಒಳಪಂಗಡಗಳನ್ನು ಒಬಿಸಿ ಪಟ್ಟಿಗೆ ಸೇರಿಸಬೇಕು. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂಬುದು ನಮ್ಮ ಬೇಡಿಕೆ. ಕೇವಲ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂಬುದಲ್ಲ. ಎಲ್ಲಾ ಒಳಪಂಗಡದವರಿಗೂ ಈ ಸೌಲಭ್ಯ ಸಿಗುವಂತಾಗಬೇಕು ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.
ವೀರಶೈವ ಲಿಂಗಾಯತ ಸಮಾಜದಲ್ಲಿ ಹಲವು ಒಳಪಂಗಡಗಳಿವೆ. ಗಾಣಿಗರು, ಕ್ಷೌರಿಕರು, ಬಡಿಗೇರ್ ಸೇರಿದಂತೆ ಕಸುಬುನಿಂದ ಬಂದ ಉಪಜಾತಿಗಳ ವೀರಶೈವ ಲಿಂಗಾಯತರಿದ್ದಾರೆ. ಎಲ್ಲರಿಗೂ ಸೌಲಭ್ಯ ಸಿಗುವಂತಾಗಬೇಕು ಎಂಬುದು ನಮ್ಮ ಬೇಡಿಕೆ ಎಂದು ತಿಳಿಸಿದರು.
ಯಾವುದೇ ಊಹಾಪೋಹಗಳಿಗೆ ಆಸ್ಪದ ಕೊಡುವುದು ಬೇಡ. ವೀರಶೈವ ಲಿಂಗಾಯತ ಸಮಾಜದ ಕಾರ್ಯಕ್ರಮ ಇದು. ಹಾಗಾಗಿ, ಬೇರೆಯವರನ್ನು ಕರೆದಿಲ್ಲ. ಮಹಾ ಅಧಿವೇಶನದಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.












Click it and Unblock the Notifications