ಹಿಜಾಬ್ ವಿವಾದ; ದಾವಣಗೆರೆಯಲ್ಲಿ ನಿಷೇಧಾಜ್ಞೆ ಜಾರಿ
ದಾವಣಗೆರೆ, ಫೆಬ್ರವರಿ 09; ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಾವಣಗೆರೆ ಮಹಾನಗರಪಾಲಿಕೆ ಹಾಗೂ ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಫೆಬ್ರವರಿ 8 ರಂದು ಮಧ್ಯಾಹ್ನ 2 ಗಂಟೆಯಿಂದ ಫೆಬ್ರವರಿ 9ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ. ಫೆಬ್ರವರಿ 9ರಿಂದ ಹೈಸ್ಕೂಲ್, ಕಾಲೇಜುಗಳಿಗೆ ಸರ್ಕಾರ ಮೂರು ದಿನಗಳ ರಜೆ ಘೋಷಣೆ ಮಾಡಿದೆ.
ರಾಜ್ಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲಾ ಕಾಲೇಜುಗಳಲ್ಲಿ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಆದರೆ ಕೆಲವು ವಿದ್ಯಾರ್ಥಿಗಳು, ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವುದು ಕಂಡುಬಂದಿದ್ದು, ಫೆಬ್ರವರಿ 7 ರಂದು ದಾವಣಗೆರೆ ನಗರದಲ್ಲಿ ಪರ ಮತ್ತು ವಿರೋಧದ ಪ್ರತಿಭಟನೆಗಳು ನಡೆದಿದ್ದವು.

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಿದ್ದು, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕಾನೂನು ಮತ್ತು ಸುವ್ಯವಸ್ಥೆ ಪಾಲನೆ ಹಿತದೃಷ್ಟಿಯಿಂದ ದಾವಣಗೆರೆ ಮಹಾನಗರಪಾಲಿಕೆ ಹಾಗೂ ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಿತ ವ್ಯಾಪ್ತಿಯಲ್ಲಿ ಕಾನೂನು ಭಂಗ ಉಂಟುಮಾಡುವ ಉದ್ದೇಶದಿಂದ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಯಾವುದೇ ಮೆರವಣಿಗೆ, ಸಭೆ, ಸಮಾರಂಭ, ವಿಜಯೋತ್ಸವ, ಇತರೆ ಸಾರ್ವಜನಿಕ ಸಮಾವೇಶಗಳನ್ನು ನಿಷೇಧಿಸಲಾಗಿದೆ. ಶಸ್ತ್ರ, ದೊಣ್ಣೆ, ಕತ್ತಿ, ಕಲ್ಲು, ಚಾಕು ಮತ್ತಿತರೆ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆ ಉಂಟುಮಾಡುವ ಯಾವುದೇ ವಸ್ತುಗಳು, ಸ್ಫೋಟಕ ವಸ್ತುಗಳನ್ನು ಒಯ್ಯುವುದು ಅಥವಾ ಶೇಖರಿಸುವುದನ್ನು ನಿಷೇಧಿಸಿದೆ.
ಯಾವುದೇ ವ್ಯಕ್ತಿಗಳ ಅಥವಾ ಶವಗಳ ಪ್ರತಿಕೃತಿ ಪ್ರದರ್ಶನ ಮಾಡುವುದು, ಪ್ರಚೋದಿಸಬಹುದಾದಂತಹ ಬಹಿರಂಗ ಘೋಷಣೆ ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು ಸಂಕೇತಗಳನ್ನು, ಭಿತ್ತಿಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಿದೆ.
ಯಾವುದೇ ಖಾಸಗಿ, ಸಾರ್ವಜನಿಕ ಆಸ್ತಿಗಳನ್ನು ಹಾನಿಗೊಳಿಸುವ, ವಿರೂಪಗೊಳಿಸುವ ಎಲ್ಲ ರೀತಿಯ ಚಟುವಟಿಕೆಗಳನ್ನು ನಿಷೇಧಿಸಿದೆ. ಯಾವುದೇ ವ್ಯಕ್ತಿ ಜಾತಿ, ಧರ್ಮ, ಕೋಮು, ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಕತೆಗೆ ಬಾಧಕ ಉಂಟು ಮಾಡಬಹುದಾದಂತಹ ಚಟುವಟುಕೆಗಳನ್ನು ನಿಷೇಧಿಸಲಾಗಿದೆ.
ಸರ್ಕಾರಿ ಸಂಸ್ಥೆಗಳು, ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ, ಸಿಬ್ಬಂದಿ ವಿರುದ್ಧ ನಿಂದಿಸುವಂತಹ ಅವಹೇಳನಕಾರಿಯಾದಂತಹ ಯಾವುದೇ ಘೋಷಣೆ, ಭಾಷಣ, ಪ್ರಕಟಣೆ, ಅವಾಚ್ಯ ಶಬ್ದಗಳ ಬಳಕೆ, ಪ್ರಚೋದನಾಕಾರಿ ಭಾಷಣ, ಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಈಗಾಗಲೇ ಸರ್ಕಾರದ ಕಾರ್ಯಕ್ರಮಗಳು ನಿಗದಿಯಾಗಿದ್ದಲ್ಲಿ ಜಿಲ್ಲಾಧಿಕಾರಿಗಳ ಅನುಮತಿಯಿಲ್ಲದೆ ಮುಂದುವರೆಯತಕ್ಕದ್ದಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಮಂಗಳವಾರ ಗಲಾಟೆ ನಡೆದಿತ್ತು; ದಾವಣಗೆರೆ ಜಿಲ್ಲೆಯ ಹರಿಹರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಗಲಾಟೆ ನಡೆದಿತ್ತು. ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಬಂದಾಗ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿದೆ. ಹಿಜಾಬ್ ಧರಿಸಿ ಬಂದಿದ್ದಕ್ಕೆ ಮತ್ತೊಂದು ಗುಂಪು ವಿರೋಧ ವ್ಯಕ್ತಪಡಿಸಿತ್ತು.
ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಬೀಸಿದ್ದರು ಮತ್ತು ಅಶ್ರುವಾಯು ಪ್ರಯೋಗ ಮಾಡಿದ್ದರು. ಕೆಲವು ಕಿಡಿಗೇಡಿಗಳು ಪೊಲೀಸರ ಮೇಲೆಯೇ ಕಲ್ಲು ತೂರಾಟವನ್ನು ನಡೆಸಿದ್ದರು.
ಕಾಲೇಜು ಕಾಪೌಂಡ್ ಸಮೀಪ ನಡೆದಗ ಗಲಭೆಯಲ್ಲಿ ಬೈಕ್, ಕಾರು ಸೇರಿದಂತೆ ಹಲವು ವಾಹನಗಳು ಜಖಂಗೊಂಡಿದ್ದವು. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇನ್ನು ದಾವಣಗೆರೆ ನಗರದ ರಸ್ತೆ ಬಳಿ ಇರುವ ಬಿ. ಎಸ್. ಚನ್ನಬಸಪ್ಪ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಕೇಸರಿ ಶಾಲುಗಳನ್ನು ಆಚೆ ಇಟ್ಟು ತರಗತಿಗೆ ಹಾಜರಾಗುವಂತೆ ಉಪನ್ಯಾಸಕರುಮನವೊಲಿಸಿದರೂ ಕೇಳಿರಲಿಲ್ಲ.
ಹಿಜಾಬ್ ತೆಗೆದರೆ ಮಾತ್ರ ಕೇಸರಿ ಶಲ್ಯ ತೆಗೆಯುವುದಾಗಿ ವಿದ್ಯಾರ್ಥಿಗಳ ಪಟ್ಟು ಹಿಡಿದಿದ್ದರು. ಕೋರ್ಟಿನ ತೀರ್ಪು ಬರೋವರೆಗೂ ಹಿಜಾಬ್ ತೆಗೆಯಬೇಕು ಎಂದು ಒತ್ತಾಯಿಸಿದ್ದರು. ಆಗ ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಆಗಮಿಸಿದ್ದರು.












Click it and Unblock the Notifications