ದಾವಣಗೆರೆ : ಚುನಾವಣೆಗೆ ಶಾಮನೂರು ಕುಟುಂಬದವರು ಸ್ಪರ್ಧಿಸಲ್ಲ!
ದಾವಣಗೆರೆ, ಮಾರ್ಚ್ 29 : 'ಲೋಕಸಭಾ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಶಾಮನೂರು ಕುಟುಂಬದಿಂದ ಯಾರೂ ಸ್ಪರ್ಧೆ ಮಾಡುವುದಿಲ್ಲ. ನಮ್ಮ ಕುಟುಂಬಕ್ಕೆ ಟಿಕೆಟ್ ಬೇಡ' ಎಂಬ ಸಂದೇಶವನ್ನು ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ನಾಯಕರಿಗೆ ರವಾನೆ ಮಾಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬೆಂಬಲಿಗರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಯಾರು ಸ್ಪರ್ಧೆ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಯಿತು. ಆದರೆ, ಶಾಮನೂರು ಕುಟುಂಬದ ಯಾರೂ ಸಹ ಕಣಕ್ಕಿಳಿಯುವುದಿಲ್ಲ.
ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಬಿ.ಮಂಜಪ್ಪ ಅವರನ್ನು ಅಭ್ಯರ್ಥಿಯಾಗಿ ಮಾಡಬಹುದು ಎಂದು ಸಭೆಯಲ್ಲಿ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಎಚ್.ಬಿ.ಮಂಜಪ್ಪ ಅವರು ಶಾಮನೂರು ಕುಟುಂಬಕ್ಕೆ ಆಪ್ತರಾಗಿದ್ದಾರೆ.
ದಾವಣಗೆರೆ ಕ್ಷೇತ್ರದಿಂದ ಬಿಜೆಪಿಯಿಂದ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಅಭ್ಯರ್ಥಿಯಾಗಿದ್ದಾರೆ. ಕಳೆದ ಮೂರು ಚುನಾವಣೆಯಲ್ಲಿ ಗೆದ್ದು ಹ್ಯಾಟ್ರಿಕ್ ಬಾರಿಸಿರುವ ಅವರು, 4 ಬಾರಿಗೆ ಕಣಕ್ಕಿಳಿದಿದ್ದಾರೆ. ಏಪ್ರಿಲ್ 23ರಂದು ಮತದಾನ ನಡೆಯಲಿದೆ.

ಯಾರೂ ಸ್ಪರ್ಧೆ ಮಾಡುವುದಿಲ್ಲ
ಮಾಧ್ಯಮಗಳ ಜೊತೆ ಮಾತನಾಡಿದ ಶಾಮನೂರು ಶಿವಶಂಕರಪ್ಪ ಅವರು, 'ವಯಸ್ಸಾಗಿದೆ ಓಡಾಡಲು ಆಗುವುದಿಲ್ಲ ಎಂಬ ಕಾರಣದಿಂದ ಸ್ಪರ್ಧಿಸುವುದರಿಂದ ಹಿಂದೆ ಸರಿದೆ. ಎಸ್.ಎಸ್.ಮಲ್ಲಿಕಾರ್ಜುನ ಸಹ ಸ್ಪರ್ಧಿಸುವುದಿಲ್ಲ' ಎಂದು ಹೇಳಿದರು.

ಹೈಕಮಾಂಡ್ ಟಿಕೆಟ್ ನೀಡಿತ್ತು
ಎಐಸಿಸಿ ದಾವಣಗೆರೆ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ಆದರೆ, ಶಾಮನೂರು ಶಿವಶಂಕರಪ್ಪ ಅವರು ಸ್ಪರ್ಧೆ ಮಾಡುವುದಿಲ್ಲ, ಪುತ್ರನಿಗೆ ಟಿಕೆಟ್ ಕೊಡಿ ಎಂದು ಹೇಳಿದ್ದರು. ಆದರೆ ಈಗ ಎಸ್.ಎಸ್.ಮಲ್ಲಿಕಾರ್ಜುನ ಅವರು ಸಹ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ತೇಜಸ್ವಿ ಪಟೇಲ್ ಅಭ್ಯರ್ಥಿ
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ದಾವಣಗೆರೆ ಜಿಲ್ಲಾ ಪಂಚಾಯಿತಿ ಪಕ್ಷೇತರ ಸದದ್ಯ ತೇಜಸ್ವಿ ಪಟೇಲ್ ಅವರಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. 'ಶಾಮನೂರು ಕುಟುಂಬ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಒಪ್ಪಿದರೆ ಮಾತೆ ಸ್ಪರ್ಧಿಸುವೆ' ಎಂದು ತೇಜಸ್ವಿ ಪಟೇಲ್ ಸ್ಪಷ್ಟಪಡಿಸಿದ್ದಾರೆ.

ಯಾರಾಗಲಿದ್ದಾರೆ ಅಭ್ಯರ್ಥಿ
ದಾವಣಗೆರೆ ಕ್ಷೇತ್ರದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ, ನಿಖಿಲ್ ಕೊಂಡಜ್ಜಿ, ತೇಜಸ್ವಿ ಪಟೇಲ್ ಅವರ ಹೆಸರು ಕೇಳಿಬರುತ್ತಿದೆ. ಯಾರು ಅಭ್ಯರ್ಥಿಯಾಗಲಿದ್ದಾರೆ ಎಂದು ಕಾದು ನೋಡಬೇಕು. ನಾಮಪತ್ರಗಳನ್ನು ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನವಾಗಿದೆ.












Click it and Unblock the Notifications