84ನೇ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಅಂತಿಮ
ಧಾರವಾಡ, ನವೆಂಬರ್ 11 : 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಅಂತಿಮವಾಗಿದೆ. ಜನವರಿ 4 ರಿಂದ ಮೂರು ದಿನಗಳ ಕಾಲ ಧಾರವಾಡದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಕಳೆದ ವರ್ಷದ ನವೆಂಬರ್‌ನಲ್ಲಿ ಮೈಸೂರಿನಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು. ಈ ವರ್ಷವೂ ನವೆಂಬರ್‌ನಲ್ಲಿ ಸಾಹಿತ್ಯ ಸಮ್ಮೇಳನ ನಡೆಸಬೇಕು ಎಂದು ಒತ್ತಾಯಿಸಲಾಗಿತ್ತು. ಆದರೆ, ಡಿಸೆಂಬರ್ 7ರಿಂದ ಸಾಹಿತ್ಯ ಸಮ್ಮೇಳನ ನಡೆಸುವುದಾಗಿ ದಿನಾಂಕ ಘೋಷಣೆಯಾಗಿತ್ತು.
ಆದರೆ, ಸಾಹಿತ್ಯ ಸಮ್ಮೇಳನ ನಡೆಸಲು ಅಗತ್ಯ ಸಿದ್ಧತೆಗಳು ಆಗದ ಹಿನ್ನಲೆಯಲ್ಲಿ ಜನವರಿ 6, 2019ರಿಂದ ಸಾಹಿತ್ಯ ಸಮ್ಮೇಳನ ನಡೆಸುವುದಾಗಿ ಘೋಷಣೆ ಮಾಡಲಾಗಿತ್ತು. ಈಗ ದಿನಾಂಕ ಮತ್ತೆ ಬದಲಾವಣೆಯಾಗಿದ್ದು, ಜನವರಿ 4ರಿಂದ ಸಮ್ಮೇಳನ ನಡೆಯಲಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅವರು, 'ಜನವರಿ 8ರಂದು ಸಾರಿಗೆ ಮುಷ್ಕರ ಇದೆ. ಅಂದು ಕೆಎಸ್ಆರ್‌ಟಿಸಿ ಬಸ್ ಮತ್ತು ಇತರ ವಾಹನಗಳ ಸಂಚಾರ ಇರುವುದು ಅನುಮಾನ. ಆದ್ದರಿಂದ, ಜನವರಿ 4ರಿಂದ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ' ಎಂದು ಹೇಳಿದ್ದಾರೆ.
84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡದಲ್ಲಿ ನಡೆಯಲಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ್ ಕಂಬಾರ ಅವರು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮೈಸೂರಿನಲ್ಲಿ ನಡೆದ 83ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 1.5 ಲಕ್ಷ ಜನರು ಪಾಲ್ಗೊಂಡಿದ್ದರು. ಇದಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಧಾರವಾಡದಲ್ಲಿ ಸೇರಬಹುದು ಎಂದು ಅಂದಾಜಿಸಲಾಗಿದೆ.












Click it and Unblock the Notifications