ಬಕ್ರೀದ್; ಧಾರವಾಡದಲ್ಲಿ ಜಾನುವಾರು ಅಕ್ರಮವಾಗಿ ಸಾಗಾಟ ತಡೆಗೆ ಕಣ್ಗಾವಲು
ಧಾರವಾಡ, ಜೂನ್ 26; ಬಕ್ರೀದ್ ಹಬ್ಬದ ಸಮಯದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡುವುದನ್ನು ತಡೆಗಟ್ಟಲು ಧಾರವಾಡ ಜಿಲ್ಲಾಡಳಿತ ಅನೇಕ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ 15 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಜೂನ್ 29ರ ಬುಧವಾರ ಬಕ್ರೀದ್ ಹಬ್ಬವಿದೆ.
ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಬಕ್ರೀದ್ ಹಬ್ಬದ ಆಚರಣೆಯ ಸಮಯದಲ್ಲಿ ಜಾನುವಾರುಗಳ ವಧೆ ಹಾಗೂ ಜಾನುವಾರುಗಳ ಸಾಗಾಣಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಸಮಿತಿ ಸಭೆಯನ್ನು ನಡೆಸಿದರು.

ಜೂನ್ 29ರಂದು ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಜಾನುವಾರುಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜಿಲ್ಲೆಯಲ್ಲಿ 15 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ರಕ್ಷಣೆ ಮಾಡಿದ ನಂತರ ಜಾನುವಾರುಗಳನ್ನು ಸಂಭಂದಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು. ಸ್ಥಳೀಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಈ ಸಭೆಯಲ್ಲಿ ಜಿಲ್ಲಾ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಉಮೇಶ ಕೊಂಡಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನ, ಸಹಾಯಕ ಪೊಲೀಸ್ ಆಯುಕ್ತ ವಿಜಯಕುಮಾರ. ಟಿ., ಡಿವೈಎಸ್‍ಪಿ ಎಸ್. ಎಸ್. ಹಿರೇಮಠ ಮುಂತಾದವರು ಪಾಲ್ಗೊಂಡಿದ್ದರು.
ಮದ್ಯ ಮಾರಾಟ ನಿಷೇಧ; ಜೂನ್ 29ರಂದು ಧಾರವಾಡ ಜಿಲ್ಲಾಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಧಾರವಾಡ ಗ್ರಾಮೀಣ ಜಿಲ್ಲೆಯಾದ್ಯಂತ ಜೂನ್ 28ರ ರಾತ್ರಿ 11.59 ಗಂಟೆಯಿಂದ ಜೂನ್ 30ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತುಪಡಿಸಿ ಧಾರವಾಡ ಜಿಲ್ಲೆಯಾದ್ಯಂತ ಮದ್ಯಾಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
ಈ ಆದೇಶ ಜಾರಿ ಇರುವ ಸಮಯದಲ್ಲಿ ಮದ್ಯದ ಅಂಗಡಿಗಳು, ಬಾರ್‌ಗಳು, ಕ್ಲಬ್‍ಗಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚಿರತಕ್ಕದ್ದು. ಅಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ಅಬಕಾರಿ ಇನ್ಸ್‍ಪೆಕ್ಟರ್, ಉಪವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 (2) ರನ್ವಯ ಅವಶ್ಯಕತೆ ಕಂಡುಬಂದಲ್ಲಿ ಶಾಂತಿಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಧಾರವಾಡ ಜಿಲ್ಲೆಯ ಅಬಕಾರಿ ಇಲಾಖೆಯ ಉಪ ಆಯುಕ್ತರು ಮತ್ತು ಆರಕ್ಷಕ ಅಧೀಕ್ಷಕರು ಹಾಗೂ ಹೆಚ್ಚುವರಿ ಆರಕ್ಷಕ ಅಧೀಕ್ಷಕರು ತಮ್ಮ ವ್ಯಾಪ್ತಿಯಲ್ಲಿ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.
ಪೊಲೀಸರಿಂದ ಶಾಂತಿ ಸಭೆ; ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಪೊಲೀಸರು ಶಾಂತಿ ಸಭೆಯನ್ನು ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ನಡೆಸುತ್ತಿದ್ದಾರೆ. ಎಲ್ಲಾ ಸಮಾಜ ಬಾಂಧವರು ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹಬ್ಬವನ್ನು ಶಾಂತಿಯುತವಾಗಿ ಆಚರಣೆ ಮಾಡಲು ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತಿದ್ದಾರೆ.
ಪ್ರತಿ ವರ್ಷದಂತೆ ಈ ಬಾರಿಯೂ ಎಲ್ಲ ಸಮುದಾಯದವರು ಸೇರಿಕೊಂಡು ಜಾತಿ ಬೇಧ ಭಾವ ಮಾಡದೇ ಹಬ್ಬವನ್ನು ಆಚರಿಸಿ, ಇದಕ್ಕೆ ಬೇಕಾಗುವ ಸಹಕಾರ, ಪೊಲೀಸ್ ಭದ್ರತೆಯನ್ನು ನೀಡಲು ಇಲಾಖೆ ಜನರೊಂದಿಗೆ ಇದೆ ಎಂದು ಪೊಲೀಸರು ಭರವಸೆ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸಹ ಹಬ್ಬದ ದಿನ ವಿಶೇಷ ಗಮನವಹಿಸುವಂತೆ ಎಲ್ಲಾ ಠಾಣೆಗಳಿಗೆ ಸೂಚನೆ ನೀಡಿದ್ದಾರೆ.











Click it and Unblock the Notifications