ಬೇರೆ ಜಿಲ್ಲೆಯಲ್ಲಿ ಧಾರವಾಡ ಪ್ರಗತಿ ಪರಿಶೀಲನಾ ಸಭೆ: ತಾವಿದ್ದಲ್ಲಿಗೆ ಅಧಿಕಾರಿಗಳನ್ನು ಕರೆಯಿಸಿಕೊಂಡ ಶಾಸಕರು
ಧಾರವಾಡ, ಜೂನ್ 06: ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರು ಧಾರವಾಡ ಜಿಲ್ಲೆ ಬಿಟ್ಟು ಬೇರೆ ಜಿಲ್ಲೆಯ ತಾಲೂಕಾ ಕೇಂದ್ರವೊಂದರಲ್ಲಿ ತಮ್ಮ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.
ಸದ್ಯ ಧಾರವಾಡ ಜಿಲ್ಲಾ ಪ್ರವೇಶಕ್ಕೆ ವಿನಯ್ ಕುಲಕರ್ಣಿ ಅವರಿಗೆ ನಿರ್ಬಂಧವಿರುವುದರಿಂದ ಅವರು ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರಿನ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಸಮೇತ ತಾಲೂಕಾ ಹಂತದ ಎಲ್ಲಾ ಅಧಿಕಾರಿಗಳನ್ನು ಕರೆಯಿಸಿಕೊಂಡು ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ. ಅಲ್ಲದೇ ಅಧಿಕಾರಿಗಳ ತಂಡದ ಜೊತೆ ಕಿತ್ತೂರಿನ ಪ್ರವಾಸಿ ಮಂದಿರದ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನೂ ಸಹ ಆಚರಿಸಿದ್ದಾರೆ.

ಸದ್ಯ ಕಿತ್ತೂರಿನಲ್ಲೇ ಮನೆ ಮಾಡಿಕೊಂಡಿರುವ ಶಾಸಕ ವಿನಯ್ ಕುಲಕರ್ಣಿ ಅವರು, ಕಿತ್ತೂರಿನ ಪ್ರವಾಸಿ ಮಂದಿರದಲ್ಲೇ ಅಧಿಕಾರಿಗಳನ್ನು ಕರೆಯಿಸಿಕೊಂಡು ಸಭೆ ನಡೆಸಿದ್ದಾರೆ. ಒಟ್ಟಾರೆ ಧಾರವಾಡ ಜಿಲ್ಲೆಯ ಅಧಿಕಾರಿಗಳು ಜಿಲ್ಲೆ ಬಿಟ್ಟು ಬೇರೊಂದು ಜಿಲ್ಲೆಗೆ ಹೋಗಿ ಪ್ರಗತಿ ಪರಿಶೀಲನಾ ಸಭೆ ನಡೆಸುವಂತಾಗಿದೆ.
ಪ್ರತಿಭಟನೆಗಿಳಿದ ಬಿಜೆಪಿ : ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ
ಧಾರವಾಡ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಯಾವುದೇ ಮಾನದಂಡಗಳಿಲ್ಲದೇ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಇದೀಗ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿಗಳಿಗೆ ಮಾನದಂಡ ಅಳವಡಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

200 ಯುನಿಟ್ ಫ್ರೀ ಎಂದು ಹೇಳಿದ ಕಾಂಗ್ರೆಸ್ ಇದೀಗ ವಿದ್ಯುತ್ ದರವನ್ನು ಏರಿಕೆ ಮಾಡಿದೆ. ಹಲವು ಮಾನದಂಡಗಳನ್ನು ಅಳವಡಿಸಿ ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿಗೆ ತರುತ್ತಿದೆ. ಯಾವುದೇ ಮಾನದಂಡಗಳಿಲ್ಲದೇ ಕಾಂಗ್ರೆಸ್ ತಾನು ಕೊಟ್ಟ ಗ್ಯಾರಂಟಿಗಳನ್ನು ಜಾರಿಗೆ ತರಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.
ನಿರುದ್ಯೋಗಿ ಪದವಿಧರರಿಗೆ ಮಾಸಿಕ 3000 ಭತ್ಯೆ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಇದೀಗ 2022-23 ರಲ್ಲಿ ತೇರ್ಗಡೆಯಾದ ಪದವಿಧರರಿಗೆ ಮಾತ್ರ ನಿರುದ್ಯೋಗ ಭತ್ಯೆ ನೀಡುವುದಾಗಿ ಹೇಳಿದೆ. ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್‌ನಲ್ಲೇ ಗ್ಯಾರಂಟಿ ಘೋಷಣೆ ಮಾಡುವುದಾಗಿ ಹೇಳಿದ್ದ ಕಾಂಗ್ರೆಸ್ ಈಗ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹೇಳುತ್ತಿದೆ. ಇದು ಮತದಾರರಿಗೆ ಮಾಡುತ್ತಿರುವ ಘೋರ ಅನ್ಯಾಯ. ಕಾಂಗ್ರೆಸ್ ತಾನು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.












Click it and Unblock the Notifications