ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಹಾಸನ ಮೂಲದ ನಾಲ್ವರು ಸಾವು
ಧಾರವಾಡ, ಜನವರಿ 06: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಬಳಿ ನಡೆದಿದೆ.
ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯ ಬೆಳ್ಳಿಗಟ್ಟಿ ಬಳಿ ಇಂದು (ಜನವರಿ 06) ಬೆಳ್ಳಂಬೆಳಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹಾಸನದ ಮೂಲದ ಮೂವರು, ಬೆಂಗಳೂರಿನ ಓರ್ವ ಸಾವನ್ನಪ್ಪಿದ್ದಾರೆ. ಮಣಿಕಂಠ (26), ಪವನ(23), ಚಂದನ (31), ಪ್ರಭು (34) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಗೆಳೆಯರ ಕಾರು ಹಾಗೂ ಬೆಂಗಳೂರಿನಿಂದ ಶಿರಡಿಗೆ ತೆರಳುತಿದ್ದ ಕಾರು ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿಯಾಗಿ ಮಂಜು ಮುಸುಕಿದ್ದರಿಂದ ಈ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಕಾರುಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಇನ್ನು ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇನ್ನೂ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಧಾರವಾಡ ಜಿಲ್ಲೆಯ ಕುಂದಗೋಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಪಘಾತ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.












Click it and Unblock the Notifications