ಶಾಸಕ ವಿನಯ್ ಕುಲಕರ್ಣಿ ಧಾರವಾಡ ಭೇಟಿಗೆ ಒಪ್ಪದ ಹೈಕೋರ್ಟ್
ಬೆಂಗಳೂರು, ಸೆಪ್ಟೆಂಬರ್ 24; ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಧಾರವಾಡ ಭೇಟಿಗೆ ಮತ್ತೆ ಹಿನ್ನಡೆಯಾಗಿದೆ. ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಕರ್ನಾಟಕ ಹೈಕೋರ್ಟ್ ಮತ್ತೆ ಅನುಮತಿ ನಿರಾಕರಿಸಿದೆ.
ಈ ಹಿಂದೆ ಹಲವು ಬಾರಿ ಅನುಮತಿ ನಿರಾಕರಣೆ ಮಾಡಲಾಗಿದ್ದರೂ ಸಹ ಮತ್ತೊಂದು ಸಾರಿ ಜಾಮೀನು ಷರತ್ತು ಸಡಿಲಿಕೆ ಕೋರಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಶಾಸಕ ವಿನಯ್ ಕುಲಕರ್ಣಿ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ವಿನಯ್ ಕುಲಕರ್ಣಿ ಧಾರವಾಡ ಕ್ಷೇತ್ರದಿಂದ 89,333 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಶಾಸಕನಾಗಿರುವ ಕಾರಣಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ, ಜನರ ಸಮಸ್ಯೆ ಆಲಿಸಲು ಧಾರವಾಡಕ್ಕೆ ಭೇಟಿ ನೀಡಿದಲು ಅವಕಾಶ ಕೋರಿದ್ದರು.
ಆದರೆ ಸಿಬಿಐ ಪರ ವಕೀಲರು, ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿದಾಗಲೂ ಷರತ್ತು ಸಡಿಲಿಸಿಲ್ಲ. ಚುನಾವಣೆ ವೇಳೆಯೂ ಕ್ಷೇತ್ರ ಭೇಟಿಗೆ ಅನುಮತಿ ನಿರಾಕರಿಸಲಾಗಿದೆ. ಈಗಾಗಲೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಗುರುತರ ಆರೋಪವಿದೆ ಹಾಗೂ ಪ್ರಮುಖ ಸಾಕ್ಷಿಗಳ ವಿಚಾರಣೆ ಇನ್ನೂ ಆರಂಭವಾಗಿಲ್ಲ. ಹಾಗಾಗಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿ ವಜಾಗೊಳಿಸಿಗೊಳಿಸಬೇಕು ಎಂದು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ ಏನು?; ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಸಿಬಿಐಗೆ ವರ್ಗಾಯಿಸಿತ್ತು. 8 ಮಂದಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.
ಪ್ರಕರಣದಲ್ಲಿ ಮೊದಲ ಆರೋಪಿ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಇದರಿಂದ ಅವರು ಸುಪ್ರಿಂಕೋರ್ಟ್‌ಗೆ ಮೊರೆ ಹೋಗಿದ್ದರು.
2021ರ ಆಗಸ್ಟ್‌ನಲ್ಲಿ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದ್ದ ಸುಪ್ರೀಂಕೋರ್ಟ್, ನ್ಯಾಯಾಲಯದ ಅನುಮತಿ ಪಡೆಯದೆ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬುದು ಸೇರಿ 4 ಷರತ್ತು ವಿಧಿಸಿತ್ತು.
2023ರ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿರುವ ಕಾರಣ ಧಾರವಾಡ ಪ್ರವೇಶಿಸಲು ವಿನಯ್ ಕುಲಕರ್ಣಿ ಅನುಮತಿ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆ ಮನವಿಯನ್ನು ವಿಶೇಷ ನ್ಯಾಯಾಲಯವು 2023ರ ಏ.18ರಂದು ತಿರಸ್ಕರಿಸಿದ್ದರಿಂದ ವಿನಯ್ ಕುಲಕರ್ಣಿ ಹೈಕೋರ್ಟ್ ಕದತಟ್ಟಿದ್ದರು. ಅಲ್ಲೂ ಅವರಿಗೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗಿತ್ತು.
ಅದಾದ ನಂತರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಅಲ್ಲೂ ಅವರಿಗೆ ಜಯ ಸಿಗಲಿಲ್ಲ. ನಿರಂತರವಾಗಿ ನ್ಯಾಯಾಲಯಗಳು ಅವರಿಗೆ ಅನುಮತಿ ನಿರಾಕರಿಸುತ್ತಲೇ ಬರುತ್ತಿವೆ, ಹಾಗಾಗಿ ಅವರಿಗೆ ಸದ್ಯಕ್ಕೆ ಧಾರವಾಡಕ್ಕೆ ಭೇಟಿ ನೀಡಲು ಅವಕಾಶ ಸಿಗುವ ಸಾಧ್ಯತೆಗಳು ಕಡಿಮೆ.












Click it and Unblock the Notifications