ಅಪಘಾತದಲ್ಲಿ ಗಾಯಗೊಂಡ ಅಂಗನವಾಡಿ ಕಾರ್ಯಕರ್ತೆಯರಿಗೆ ಸಾಂತ್ವಾನ ಹೇಳಿದ ಸಚಿವ ಹಾಲಪ್ಪ ಆಚಾರ್
ಧಾರವಾಡ ಡಿ. 22: ಬೆಳಗಾವಿಯ ಸುವರ್ಣ ವಿಧಾನಸೌಧದ ವಿಧಾನಮಂಡಲ ಅಧಿವೇಶನದ ಬಳಿ ಪ್ರತಿಭಟನೆಗಾಗಿ ಆಗಮಿಸುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ಗಾಯಗೊಂಡಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಸಚಿವ ಹಾಲಪ್ಪ ಆಚಾರ್ ಸಾಂತ್ವಾನ ಹೇಳಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿ ಧಾರವಾಡ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಳ್ಳಾರಿ ನಗರದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಸಾಂತ್ವಾನ ಹೇಳಿದ್ದಾರೆ.
ಬಳ್ಳಾರಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಬೆಳಗಾವಿ ವಿಧಾನ ಮಂಡಲದ ಅಧಿವೇಶನದ ಬಳಿ ಸಂಘಟನೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಖಾಸಗಿ ವಾಹನಗಳಲ್ಲಿ ಆಗಮಿಸುತ್ತಿದ್ದರು.

ಡಿಸೆಂಬರ್ 22 ರ ಬೆಳಗಿನ ಜಾವ ಕಾರ್ಯಕರ್ತೆಯರು ಪ್ರಯಾಣಿಸುತ್ತಿದ್ದ ಖಾಸಗಿ ವಾಹನಕ್ಕೆ ಧಾರವಾಡ ಜಿಲ್ಲೆಯ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ತೇಗೂರ ಗ್ರಾಮದ ಹತ್ತಿರ ಬೆಂಗಳೂರು - ಪುಣಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ 12 ಮಂದಿಗೆ ತೀವ್ರ ಗಾಯಗಳಾಗಿವೆ.
ಘಟನೆ ಬಗ್ಗೆ ಮಾಹಿತಿ ಪಡೆದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಸಾಂತ್ವಾನ ಹೇಳಿದ್ದಾರೆ. ವೈದ್ಯರ ಬಳಿ ಗಾಯಾಳುಗಳ ಚಿಕಿತ್ಸೆ ಬಗ್ಗೆ ಮಾಹಿತಿ ಪಡೆದಿದ್ದಾರೆ.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರ, ಇಂದು ಬೆಳಗಿನ ಜಾವ ನಡೆದ ಅಪಘಾತದಲ್ಲಿ ಕಾರ್ಯಕರ್ತೆಯರು, ಸಹಾಯಕಿಯರು ಸೇರಿದಂತೆ 12 ಮಂದಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನ ಭೇಟಿ ಮಾಡಿ ಸಾಂತ್ವಾನ ಹೇಳಿದ್ದು, ಗಾಯಾಳುಗಳಿಗೆ ಎಲ್ಲಾ ರೀತಿಯ ಚಿಕಿತ್ಸೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಧಾರವಾಡ ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.












Click it and Unblock the Notifications