PM Modi Karnataka Visit: ಮಾರ್ಚ್ 11ಕ್ಕೆ ಧಾರವಾಡ ಐಐಟಿ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ
ಕೇಂದ್ರ ಸರ್ಕಾರವು ರಸ್ತೆ ಅಭಿವೃದ್ಧಿ, ಸಾರಿಗೆ ಮತ್ತು ಇತರ ಕ್ಷೇತ್ರಗಳ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂಪಾಯಿ ವ್ಯಯಿಸುತ್ತಿದೆ.
ಧಾರವಾಡ, ಫೆಬ್ರವರಿ.20: ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಧಾರವಾಡ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 11 ರಂದು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಜನತಾ ಬಜಾರ್ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಪ್ರಲ್ಹಾದ್ ಜೋಶಿ, ಏಪ್ರಿಲ್‌ನಲ್ಲಿ ಧಾರವಾಡ - ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಚಾಲನೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಧಾರವಾಡ - ಬೆಂಗಳೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಹೊಸ ರೈಲು ಪ್ರಯಾಣಿಕರಿಗೆ ಐದು ಗಂಟೆಗಳಲ್ಲಿ ಬೆಂಗಳೂರು ತಲುಪಲು ಸಹಾಯ ಮಾಡುತ್ತದೆ ಎಂದು ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕೇಂದ್ರ ಸರ್ಕಾರವು ರಸ್ತೆ ಅಭಿವೃದ್ಧಿ, ಸಾರಿಗೆ ಮತ್ತು ಇತರ ಕ್ಷೇತ್ರಗಳ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂಪಾಯಿ ವ್ಯಯಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಅಭಿವೃದ್ಧಿಗೊಂಡಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
ಹುಬ್ಬಳ್ಳಿ - ಧಾರವಾಡ ಅಭಿವೃದ್ಧಿ ಕುರಿತು ವಿವರಿಸಿದ ಅವರು, ಹುಬ್ಬಳ್ಳಿ ಈಗಾಗಲೇ ದೇಶದ ಪ್ರಮುಖ ನಗರಗಳೊಂದಿಗೆ ವಿಮಾನ ಸಂಪರ್ಕ ಹೊಂದಿದೆ. 2047ರ ವೇಳೆಗೆ ಅವಳಿ ನಗರಗಳ ಅಗತ್ಯತೆಗಳ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಿ, ಅದರಂತೆ ಯೋಜನೆಗಳನ್ನು ರೂಪಿಸಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ ಗಣಿ ಮತ್ತು ಭೂವಿಜ್ಞಾನ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಸ್ಮಾರ್ಟ್ ಸಿಟಿ ಯೋಜನೆಯಿಂದ ಆಗಿರುವ ಅಭಿವೃದ್ಧಿ ಕುರಿತು ವಿವರಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಾತನಾಡಿ, ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ವಿಶೇಷ ಆಸಕ್ತಿಯಿಂದ ಹುಬ್ಬಳ್ಳಿ - ಧಾರವಾಡವನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಸೇರಿಸಲಾಗಿದ್ದು, ಅವಳಿ ನಗರದಲ್ಲಿ ಇನ್ನೂ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕಿದೆ ಎಂದರು.
ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಿದ್ದಕ್ಕಾಗಿ ಪ್ರಲ್ಹಾದ್ ಜೋಶಿ ಅವರಿಗೆ ಕೃತಜ್ಞತೆ ಸಲ್ಲಿಸಿದ ವಿಧಾನಸಭೆ ಸದಸ್ಯ ಪ್ರಸಾದ್ ಅಬ್ಬಯ್ಯ, ಅವಳಿ ನಗರದಲ್ಲಿ ಸ್ಲಂಗಳನ್ನು ಅಭಿವೃದ್ಧಿಪಡಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.












Click it and Unblock the Notifications