ಮಲಪ್ರಭಾ ಕಾಲುವೆಗೆ ನೀರು ಹರಿಸುವ ವೇಳಾಪಟ್ಟಿ ಪ್ರಕಟ
ಧಾರವಾಡ, ಮೇ 10: ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ನೀರು ಹರಿಸಲು ನಿರ್ಧರಿಸಲಾಗಿದೆ. ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕು ವ್ಯಾಪ್ತಿಯ 58 ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲಾಗುವುದೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ತಿಳಿಸಿದ್ದಾರೆ.
ರಾಜ್ಯದಲ್ಲಿ ಬರಗಾಲದ ನಡುವೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ 10 ದಿನಗಳ ಕಾಲ ನಿರಂತರ ಮಲಪ್ರಭಾ ಬಲದಂಡೆ ಕಾಲುವೆಗಳಿಂದ 0.5 ಟಿಎಂಸಿ (600 ಕ್ಯೂಸೆಕ್ಸ್) ನೀರನ್ನು ನಾಲ್ಕು ತಾಲೂಕುಗಳ 58 ಕೆರೆಗಳಿಗೆ ಬಿಡಲಾಗುವುದು ಎಂದಿದ್ದಾರೆ.

ನವಲಗುಂದ ತಾಲೂಕಿನ 37 ಕೆರೆ, ಅಣ್ಣಿಗೇರಿಯ 13, ಹುಬ್ಬಳ್ಳಿಯ 7 ಹಾಗೂ ಕುಂದಗೋಳದ 3 ಪೂರಕ ಸಂಗ್ರಹಣಾ ಕೆರೆಗಳನ್ನು ಭರ್ತಿ ಮಾಡಲಾಗುವುದು. ಆಯಾ ತಾಲೂಕಿನ ತಹಶೀಲ್ದಾರರು, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ, ನೀರಾವರಿ ಇಲಾಖೆ ಎಇಇಗಳು ಕ್ರೀಯಾಶೀಲರಾಗಿ ನಿಗಾ ವಹಿಸಿತಕ್ಕದ್ದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕಾಲುವೆಗೆ ಹರಿಸಲಾದ ನೀರು ಕೇವಲ ಕುಡಿಯುವ ನೀರಿಗೆ ಮಾತ್ರ ಬಳಕೆಯಾಗಬೇಕು. ಕುಡಿಯುವ ನೀರು ಹೊರತುಪಡಿಸಿ ಇನ್ಯಾವುದೇ ಉದ್ದೇಶಕ್ಕಾಗಿ ಬಳಕೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ನೀರಾವರಿ ಇಲಾಖೆ, ಕಂದಾಯ ಇಲಾಖೆ, ಹೆಸ್ಕಾಂ, ಪೊಲೀಸ್ ಹಾಗೂ ಗ್ರಾಮೀಣ ಕುಡಿಯುವ ನೀರು ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೂರು ತಂಡಗಳನ್ನು ಮೂರು ಶಿಫ್ಟಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.

ಎಲ್ಲರೂ ಒಬ್ಬರಿಗೊಬ್ಬರು ಸಹಕಾರದೊಂದಿಗೆ ನಾಲ್ಕು ತಾಲೂಕುಗಳ 7 ಉಪ ವಿಭಾಗಗಳ ಸುಮಾರು 90 ಕಿ.ಮೀ. ವ್ಯಾಪ್ತಿಯ ಕಾಲುವೆ ಸುತ್ತ ಯಾವುದೇ ತೊಂದರೆಯಾಗದಂತೆ ನಿಗಾ ವಹಿಸಿ ಕ್ರಿಯಾಶೀಲರಾಗಿ ಕೆಲಸ ಮಾಡತಕ್ಕದ್ದು ಎಂದು ಸೂಚನೆ ನೀಡಿದ್ದಾರೆ. ಕಾಲುವೆ ಸುತ್ತಲಿನ 66 ಗ್ರಾಮಗಳಲ್ಲಿ 144 ಸೆಕ್ಷನ್ ಆದೇಶ ಹೊರಡಿಸಲಾಗುವುದೆಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ನೀರು ಹರಿಸುವ ಸಮಯದಲ್ಲಿ ಆಯಾ ವಿಭಾಗಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆಂದು ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ ತಿಳಿಸಿದ್ದಾರೆ.
ಇನ್ನು, ಬರಗಾಲದ ಸ್ಥಿತಿಯಾಗಿರುವುದರಿಂದ 58 ಕೆರೆಗಳನ್ನು ಸಂಪೂರ್ಣ ಭರ್ತಿ ಮಾಡಲಾಗುವುದು. ಕುಡಿಯುವ ನೀರು ಹೊರತುಪಡಿಸಿ ಬೇರೆ ಉದ್ದೇಶಕ್ಕೆ ನೀರು ಬಳಕೆಯಾಗದಂತೆ ಆಯಾ ವ್ಯಾಪ್ತಿಯ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರರು, ಪಿಡಿಓ ಗ್ರಾಮಲೆಕ್ಕಿಗರು, ಪೊಲೀಸ್ ಸಿಬ್ಬಂದಿ ತಮ್ಮ ವ್ಯಾಪ್ತಿಯಲ್ಲಿ ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದಿದ್ದಾರೆ.
ಹೆಸ್ಕಾಂ ಅಧಿಕಾರಿಗಳು ನೀರು ಹರಿಸುವ ಸಮಯದಲ್ಲಿ ಎಲ್ಲ ಐಪಿಸೆಟ್‍ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸತಕ್ಕದ್ದು, ಸೆಕ್ಷನ್ ಅಧಿಕಾರಿಗಳನ್ನು ಇದಕ್ಕೆ ನೇಮಿಸಲಾಗುವುದೆಂದು ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಕಿರಣ ಕುಮಾರ ತಿಳಿದ್ದಾರೆ.












Click it and Unblock the Notifications