Pralhad Joshi: ಶಾಸಕ ವಿನಯ್ ಕುಲಕರ್ಣಿ ಪತ್ನಿಯಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೈಡ್‌ಲೈನ್!
Pralhad Joshi: ಧಾರವಾಡದಲ್ಲಿ ಹೊಸ ರಾಜಕೀಯ ಜಿದ್ದಾಜಿದ್ದಿ ಪ್ರಾರಂಭವಾಗಿದೆ. ಧಾರವಾಡದಲ್ಲಿ ಬಿಜೆಪಿ ಹಿಡಿತ ಜೋರಾಗಿ ಇದೆ. ಆದರೆ, ಕಾಂಗ್ರೆಸ್ ಶಾಸಕರು ಹಾಗೂ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಬಿಜೆಪಿಗೆ ಪೈಪೋಟಿ ನೀಡುತ್ತಿದ್ದಾರೆ. ಬಿಜೆಪಿ ಹಿಡಿತದಲ್ಲೇ ಇಲ್ಲಿನ ಪಾಲಿಕೆ ಇದೆಯಾದರೂ ಶಾಸಕ ವಿನಯ ಕುಲಕರ್ಣಿ ಪತ್ನಿಯಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸೈಡ್‌ಲೈನ್ ಮಾಡಲಾಗುತ್ತಿದೆ ಎನ್ನಲಾಗಿದೆ.
ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಹಸ್ತಕ್ಷೇಪ ಜೋರಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಬಿಜೆಪಿಯಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸೈಡ್‌ಲೈನ್ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಧಾರವಾಡದಲ್ಲಿ ಶಾಸಕ ವಿನಯ ಕುಲಕರ್ಣಿ ಪತ್ನಿ ಅವರ ಹಸ್ತಕ್ಷೇಪ ಮಿತಿಮೀರಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಧಾರವಾಡ ಕೆಎಂಎಫ್ ನಾಮನಿರ್ದೇಶಿತ ನಿರ್ದೇಶಕಿ ಹಾಗೂ ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಶಿಷ್ಟಾಚಾರ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಧಾರವಾಡ ಜಿಲ್ಲಾ ಪಂಚಾಯ್ತಿ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದೆ.
ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿ ಅವರು ಶಾಸಕರಿದ್ದರೂ ಅವರ ಪತ್ನಿ ಶಿವಲೀಲಾ ಅವರು ತಾವೇ ಶಾಸಕರು ಎಂಬಂತೆ ವರ್ತಿಸುತ್ತಿದ್ದಾರೆ. ಕೇಂದ್ರದ ನರೇಗಾ ಯೋಜನೆಗಳ ಭೂಮಿಪೂಜೆಗೆ ತಾವೇ ತೆರಳಿ ಭೂಮಿಪೂಜೆ ಮಾಡುತ್ತಿದ್ದಾರೆ. ಕೇಂದ್ರದ ಅನುದಾನ ಇದ್ದರೆ ಈ ಭಾಗದ ಸಂಸದರು ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಶಿಷ್ಟಾಚಾರದ ಪ್ರಕಾರ ಆಹ್ವಾನ ನೀಡಬೇಕು. ಆದರೆ, ಅವರನ್ನು ಭೂಮಿಪೂಜೆ ಕರೆಯುತ್ತಿಲ್ಲ. ಅಧಿಕಾರಿಗಳು ಕೂಡ ಶಿವಲೀಲಾ ಅವರ ಜೊತೆ ಸೇರಿ ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ. ಕೂಡಲೇ ಅಂತಹ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಇನ್ನು ಧಾರವಾಡ ತಾಲೂಕಿನ ಗರಗ ಹಾಗೂ ಇನ್ನಿತರ ಗ್ರಾಮಗಳಲ್ಲಿ ನರೇಗಾ ಯೋಜನೆಯಡಿ ಅನುದಾನ ಮಂಜೂರಾದಾಗ ಶಿವಲೀಲಾ ಅವರೇ ಶಿಷ್ಟಾಚಾರ ಉಲ್ಲಂಘಿಸಿ ಭೂಮಿಪೂಜೆಗೆ ತೆರಳುತ್ತಿದ್ದಾರೆ. ಮೊನ್ನೆಯಷ್ಟೇ ಗರಗ ಗ್ರಾಮದಲ್ಲಿ ಬೂದು ನೀರು ನಿರ್ವಹಣೆ ಕಾಮಗಾರಿಗೆ ಕೇಂದ್ರದಿಂದ 166.90 ಲಕ್ಷ ಅನುದಾನ ಮಂಜೂರಾಗಿತ್ತು. ಅದಕ್ಕೆ ಕೇಂದ್ರ ಸಚಿವರ ಅನುಮತಿ ಪಡೆಯದೇ ಶಿವಲೀಲಾ ಅವರು ತಾವೇ ಭೂಮಿಪೂಜೆ ಮಾಡಿದ್ದಾರೆ. ಇದಕ್ಕೆ ಅಧಿಕಾರಿಗಳು ಸಹ ಸಾಥ್ ನೀಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದರು. ಸದ್ಯ ಪ್ರತಿಭಟನಾಕಾರರಿಂದ ಮನವಿ ಪಡೆದಿರುವ ಜಿಲ್ಲಾ ಪಂಚಾಯ್ತಿ ಸಿಇಓ ಭುವನೇಶ ಪಾಟೀಲ, ಶಿಷ್ಟಾಚಾರ ಉಲ್ಲಂಘನೆಯಾಗಿರುವ ಬಗ್ಗೆ ಪರಿಶೀಲಿಸಿ, ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದಿದ್ದಾರೆ.
ಜಿಲ್ಲಾ ಪಂಚಾಯ್ತಿಯಿಂದ ನೇರವಾಗಿ ಡಿಸಿ ಕಚೇರಿಗೆ ಬಂದ ಬಿಜೆಪಿ ಕಾರ್ಯಕರ್ತರು ಅಲ್ಲಿಯೂ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೂ ಮನವಿ ಸಲ್ಲಿಸಿದ್ದಾರೆ.












Click it and Unblock the Notifications