ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಶ್ರೀಶೈಲಪ್ಪ ಬಿದರೂರ
ಗದಗ, ಏಪ್ರಿಲ್ 09 : ಗದಗ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಾಯಕ ಶ್ರೀಶೈಲಪ್ಪ ಬಿದರೂರ ಅವರು ಕಾಂಗ್ರೆಸ್ ಸೇರಿದ್ದಾರೆ. ಇದರಿಂದಾಗಿ ಬಿಜೆಪಿಗೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಹಿನ್ನಡೆ ಉಂಟಾಗುವ ಸಾಧ್ಯತೆ ಇದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶ್ರೀ ಶೈಲಪ್ಪ ಬಿದರೂರ ಅವರು ಕಾಂಗ್ರೆಸ್ ಸೇರಿದ್ದಾರೆ. 30ಕ್ಕೂ ಹೆಚ್ಚು ಅವರ ಬೆಂಬಲಿಗರು ಸಹ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.

ಮೂರು ಬಾರಿ ಶ್ರೀಶೈಲಪ್ಪ ಬಿದರೂರ ಅವರು ಶಾಸಕರಾಗಿದ್ದರು. ಆದರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೈ ತಪ್ಪಿತ್ತು. ಇದರಿಂದಾಗಿ ಅವರು ಚುನಾವಣೆಯಲ್ಲಿ ತಟಸ್ಥರಾಗಿ ಉಳಿದಿದ್ದರು.
ಗದಗ ಮತ್ತು ರೋಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶ್ರೀಶೈಲಪ್ಪ ಬಿದರೂರ ಅವರು ಸಾಕಷ್ಟು ಪ್ರಭಾವ ಹೊಂದಿದ್ದಾರೆ. ಲೋಕಸಭಾ ಚುನಾವಣೆಗೆ ಕೆಲವು ದಿನಗಳು ಇರುವಾಗ ಅವರು ಕಾಂಗ್ರೆಸ್ ಸೇರಿದ್ದು, ಬಿಜೆಪಿಗೆ ಹಿನ್ನಡೆ ಉಂಟು ಮಾಡುವ ಸಾಧ್ಯತೆ ಇದೆ.
ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಅವರು ಶ್ರೀಶೈಲಪ್ಪ ಬಿದರೂರ ಜೊತೆ ಮಾತುಕತೆ ನಡೆಸಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಚುನಾವಣೆ ಏಪ್ರಿಲ್ 23ರಂದು ನಡೆಯಲಿದೆ. ಬಿಜೆಪಿಯಿಂದ ಹಾಲಿ ಸಂಸದ ಶಿವಕುಮಾರ್ ಉದಾಸಿ, ಕಾಂಗ್ರೆಸ್-ಜೆಡಿಎಸ್‌ನಿಂದ ಡಿ.ಆರ್.ಪಾಟೀಲ್ ಅವರು ಕಣದಲ್ಲಿದ್ದಾರೆ.












Click it and Unblock the Notifications