Lakkundi Utsava 2023:ಸಾರ್ವಜನಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಬಗ್ಗೆ ಇಲ್ಲಿದೆ ಮಾಹಿತಿ
ಐತಿಹಾಸಿಕ ಲಕ್ಕುಂಡಿ ಉತ್ಸವ 2023ಕ್ಕೆ ಆಗಮಿಸುವ ಸಾರ್ವಜನಿಕರಿಗಾಗಿ ಗದಗ ನಗರದಿಂದ ಲಕ್ಕುಂಡಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು, ಉಚಿತ ಸಾರಿಗೆ ಬಸ್‌ಗಳಿಗೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಚಾಲನೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
ಗದಗ, ಫೆಬ್ರವರಿ 10: ಐತಿಹಾಸಿಕ ಲಕ್ಕುಂಡಿ ಉತ್ಸವವು ಫೆಬ್ರವರಿ 10 ರಿಂದ 12 ವರೆಗೆ ಗದಗ ತಾಲೂಕಿನ ಲಕ್ಕುಂಡಿಯಲ್ಲಿ ನಡೆಯಲಿದೆ. ಉತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ನೆರವಾಗಲಿ ಎಂದು ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು, ಉಚಿತ ಸಾರಿಗೆ ಬಸ್‌ಗಳಿಗೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹಾಗೂ ಎಂಸಿಎ ನಿಗಮದ ಅಧ್ಯಕ್ಷ ಎಂ ಎಸ್ ಕರಿಗೌಡ್ರ ಅವರು ಗದಗ ಹೊಸ ಬಸ್ ನಿಲ್ದಾಣದಲ್ಲಿ ಶುಕ್ರವಾರ ಚಾಲನೆ ನೀಡಿದರು.
ಲಕ್ಕುಂಡಿ ಉತ್ಸವಕ್ಕೆ ಉಚಿತ ಸಾರಿಗೆ ವ್ಯವಸ್ಥೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ "ಐತಿಹಾಸಿಕ ಲಕ್ಕುಂಡಿ ಉತ್ಸವಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸುವ ಎಲ್ಲಾ ಸಾರ್ವಜನಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ದೊರೆಯಬೇಕು. ಇತರ ಜಿಲ್ಲೆಗಳಿಂದ ಬರುವವರಿಗೆ ಸುಗಮ ಸಾರಿಗೆ ಸಂಚಾರ ತಲುಪಬೇಕು" ಎಂದು ಹೇಳಿದರು.
ಲಕ್ಕುಂಡಿ ಉತ್ಸವಕ್ಕೆ ಗದಗದಿಂದ ಒಟ್ಟು 10 ಬಸ್‌ಗಳನ್ನು ಉಚಿತವಾಗಿ ಸಾರ್ವಜನಿಕರಿಗೆ ಸಂಚರಿಸಲು ಸೌಲಭ್ಯ ಒದಗಿಸಿದೆ. ಗದಗಿನ ಹೊಸ ಬಸ್ ನಿಲ್ದಾಣ ಹಾಗೂ ಹಳೇ ಬಸ್ ನಿಲ್ದಾಣದಿಂದ ನಿರಂತರವಾಗಿ ಬಸ್‌ಗಳು ಸಂಚರಿಸಲಿವೆ. ಸಾರ್ವಜನಿಕರು ಬಸ್‌ಗಳ ಉಚಿತ ಸೇವೆ ಪ್ರಯೋಜನ ಪಡೆಯಬೇಕು ಎಂದರು.

ಉದ್ಘಾಟನೆ ನಂತರಉಚಿತ ಸಾರಿಗೆ ಬಸ್‌ನಲ್ಲಿ ಲಕ್ಕುಂಡಿಯವರೆಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲಾ ಜನಪ್ರತಿನಿಧಿಗಳು , ಅಧಿಕಾರಿಗಳು ಸಂಚರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ., ಉಪವಿಭಾಗಾಧಿಕಾರಿ ಅನ್ನಪೂರ್ಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ಡಿಯುಡಿಸಿ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಳೆ, ಪ್ರದೀಪ ನವಲಗುಂದ ವಾ.ಕ.ರ.ಸಾ.ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಶೀನಯ್ಯ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಇನ್ನು ಮೂರು ದಿನಗಳ ಕಾಲ ನಡೆಯುವ ಐತಿಹಾಸಿಕ ಲಕ್ಕುಂಡಿ ಉತ್ಸವದ ಅಂಗವಾಗಿ ತಾಲೂಕಿನ ಲಕ್ಕುಂಡಿ ಗ್ರಾಮದ ಸರಕಾರಿ ಹಿರಿಯ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರು ಶುಕ್ರವಾರ ಚಾಲನೆ ನೀಡಿದರು. ಡೊಳ್ಳು ಕುಣಿತ, ನಂದಿಕೋಲು, ಕರಡಿ ಮಜಲು, ಜಾಂಜ್ ಮೇಳ, ಕೀಲುಕುದುರೆ ಕಲಾವಿದರು ಮೆರವಣಿಗೆಯಲ್ಲಿ ಭಾಗವಹಿಸಿದ್ದು, 205ಕ್ಕೂ ಹೆಚ್ಚು ಮಹಿಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಸಾಗಿದ್ದಾರೆ.












Click it and Unblock the Notifications