Suraj Revanna: ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ಹಾಕಿದವರ ವಿರುದ್ಧವೇ ಮತ್ತೊಂದು ಕೇಸ್!
ಹೊಳೆನರಸೀಪುರ, ಜೂನ್. 22: ದೇಶಾದ್ಯಂತ ಸದ್ದು ಮಾಡಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಜೈಲು ಪಾಲಾಗಿದ್ದಾರೆ. ಇದೇ ವೇಳೆ ಅವರ ಸಹೋದರ ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧವೂ ಗಂಭೀರ ಆರೋಪ ಕೇಳಿ ಬಂದಿದೆ. ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಅವರ ಮೇಲಿದೆ. ಇದೆ ವೇಳೆ ಪ್ರಕರಣದಲ್ಲಿ ಟ್ವಿಸ್ಟ್ ಕಾಣಿಸಿಕೊಂಡಿದೆ.
ದೂರ ದಾಖಲಿಸಿದ ಸಂತ್ರಸ್ತನ ಮೇಲೆಯೇ ಸೂರಜ್ ರೇವಣ್ಣ ಆಪ್ತರು ಪ್ರತಿದೂರು ದಾಖಲಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಪಕ್ಷದ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಂದ ಹಣ ವಸೂಲಿ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜೆಡಿಎಸ್ ಕಾರ್ಯಕರ್ತ ಮತ್ತು ಅವರ ಸಂಬಂಧಿಕರ ವಿರುದ್ಧ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತರ ವಿರುದ್ಧ ಎಫ್‌ಐಆರ್
ಎಂಎಲ್‌ಸಿ ಸೂರಜ್ ರೇವಣ್ಣ ಅವರ ಆಪ್ತ ಸಹಾಯಕ ಶಿವಕುಮಾರ್ ಶುಕ್ರವಾರ ದೂರು ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಚೇತನ್ ಕೆ ಎಸ್ ಮತ್ತು ಅವರ ಸೋದರ ಮಾವನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸೂರಜ್ ರೇವಣ್ಣ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಚೇತನ್ ಶುಕ್ರವಾರ ಪೊಲೀಸರಿಗೆ ದೂರು ನೀಡಿದ್ದಾರೆ.
ಸೂರಜ್ ರೇವಣ್ಣ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಅವರ ಪುತ್ರ ಮತ್ತು ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಹಿರಿಯ ಸಹೋದರ. ಪ್ರಜ್ವಲ್ ರೇವಣ್ಣ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
ಇನ್ನು, ಸೂರಜ್ ರೇವಣ್ಣ ವಿರುದ್ಧ ದೂರು ನೀಡಿರುವ ಚೇತನ್ ತನ್ನ ಸ್ನೇಹಿತನಾಗಿದ್ದಾನೆ ಮತ್ತು ಸೂರಜ್ ರೇವಣ್ಣ ಬ್ರಿಗೇಡ್‌ಗಾಗಿ ಕೆಲಸ ಮಾಡಲು ಪ್ರಾರಂಭಿಸಿದ್ದಾನೆ ಎಂದು ಶಿವಕುಮಾರ್ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಚೇತನ್ ಕುಟುಂಬದ ಖರ್ಚಿಗೆ ಹಣ ಕೇಳಿದ್ದರು. ಆದರೆ ಶಿವಕುಮಾರ್ ನಿರಾಕರಿಸಿದಾಗ ಆರೋಪಿ ಸೂರಜ್ ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಪೊಲೀಸ್ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಶಿವಕುಮಾರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಚೇತನ್ 5 ಕೋಟಿಗೆ ಬೇಡಿಕೆ ಇಟ್ಟಿದ್ದು, ನಂತರ 2 ಕೋಟಿ ನೀಡುವಂತೆ ಕೇಳಿದ್ದರು ಎಂದು ಶಿವಕುಮಾರ್ ಹೇಳಿಕೊಂಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಚೇತನ್ ಮತ್ತು ಅವರ ಸೋದರ ಮಾವನ ವಿರುದ್ಧ ಐಪಿಸಿ ಸೆಕ್ಷನ್ 384 (ಸುಲಿಗೆ), 506 (ಕ್ರಿಮಿನಲ್ ಬೆದರಿಕೆ) ಮತ್ತು 34 (ಪಿತೂರಿಯಲ್ಲಿ ಇತರರ ಶಾಮೀಲು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.












Click it and Unblock the Notifications