ಪ್ರಚಾರದ ವೇಳೆ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ: ಯುವಕನ ಮೇಲೆ ಬ್ಲೇಡ್‌ನಿಂದ ಹಲ್ಲೆ
ಹಾಸನ, ಏಪ್ರಿಲ್ 29: ಹಾಸನದಲ್ಲಿ ಚುನಾವಣಾ ಕಣ ರಂಗೇರಿದ್ದು, ಅಭ್ಯರ್ಥಿಗಳ ಪರ ಮತಯಾಚನೆಗೆ ಇಳಿದಿರುವ ಕಾರ್ಯಕರ್ತರ ನಡುವಿನ ಗಲಾಟೆ ಕೂಡ ಹೆಚ್ಚಾಗುತ್ತಿದೆ. ಜೆಡಿಎಸ್ ಕಾರ್ಯಕರ್ತನ ಮೇಲೆ ಕಿಡಿಗೇಡಿಗಳು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಚುನಾವಣೆ ಪ್ರಚಾರದ ವೇಳೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆಯಲ್ಲಿ ಜೆಡಿಎಸ್ ಕಾರ್ಯಕರ್ತ ನಾಗರಹಳ್ಳಿ ಗ್ರಾಮದ ನಿವಾಸಿ ಕಿರಣ್ ಮೇಲೆ ಕಿಡಿಗೇಡಿಗಳು ಬ್ಲೇಡ್‌ನಿಂದ ಹಲ್ಲೆ ನಡೆಸಿದ್ದಾರೆ.

ನಿನ್ನೆ ರಾತ್ರಿ ಕಾಂಗ್ರೆಸ್ ಅಭ್ಯರ್ಥಿ ಶಿವಲಿಂಗೇಗೌಡರ ಪರ ಪತ್ನಿ ಹಾಗೂ ಪುತ್ರ ಅರಸೀಕೆರೆ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ್ದರು. ರಾತ್ರಿ 9.30 ರ ಸುಮಾರಿನಲ್ಲಿ ನಾಗರಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಿವಲಿಂಗೇಗೌಡರ ಪರ ಜೈಕಾರ ಕೂಗಿದ್ದಾರೆ. ಈ ವೇಳೆ ಮಧ್ಯೆ ಪ್ರವೇಶಿಸಿದ ಜೆಡಿಎಸ್ ಕಾರ್ಯಕರ್ತ ಕಿರಣ್ ಈ ವೇಳೆ 9.30 ರಲ್ಲಿ ಏಕೆ ಇಷ್ಟು ಜೋರಾಗಿ ಜೈಕಾರ ಹಾಕಿ ಪ್ರಚಾರ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಿರಣ್ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ಗುಂಪಿನಲ್ಲಿದ್ದ ಕಿಡಿಗೇಡಿಗಳು ಕಿರಣ್ ಮೇಲೆ ಏಕಾಏಕಿ ಬ್ಲೇಡ್‌ನಿಂದ ಹಲ್ಲೆ ನಡೆಸಿದ್ದಾರೆ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಕಿರಣ್‌ನನ್ನು ಸ್ಥಳೀಯರು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಚಿಕಿತ್ಸೆ ಮುಂದುವರಿದಿದ್ದು, ಕಿರಣ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ಸಂಬಂಧ ಹಾಸನ ಜಿಲ್ಲೆಯ ಗಂಡಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣಾ ಪ್ರಚಾರದ ವೇಳೆ ಗಲಾಟೆ ನಡೆಸಿ ಜೆಡಿಎಸ್ ಕಾರ್ಯಕರ್ತನ ಮೇಲೆ ಬ್ಲೇಟ್‌ನಿಂದ ಹಲ್ಲೆ ಮಾಡಿದ ಆರೋಪಿಗಾಗಿ ಗಂಡಸಿ ಪೊಲೀಸರು ಬಲೆ ಬೀಸಿದ್ದಾರೆ.












Click it and Unblock the Notifications