ಹಾಸನದ ವಸತಿ ಶಾಲೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪ: ಪ್ರಾಂಶುಪಾಲರು ಸೇರಿ ಐವರು ಬಂಧನ
ಹಾಸನ ಮಾರ್ಚ್ 11: ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜಿಲ್ಲೆಯ ಬೇಲೂರು ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲರು ಸೇರಿದಂತೆ ಐವರನ್ನು ಹಾಸನ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಆರೋಪಿಗಳಾದ ಪುನಿತ್ (28), ಶಿಕ್ಷಕ ಶಿವಯ್ಯ (32), ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾಬಾಯಿ (38), ಭದ್ರತಾ ಸಿಬ್ಬಂದಿ ಶ್ರುತಿ ಬಿ.ಸಿ (30), ಶಿಕ್ಷಕ ವಿಜಯಕುಮಾರ (39) ಎಂದು ಗುರುತಿಸಲಾಗಿದೆ.
ಅಧಿಕಾರಿಗಳ ಪ್ರಕಾರ, ಕಳೆದ ಕೆಲವು ತಿಂಗಳುಗಳಿಂದ ವಸತಿ ಶಾಲೆಯ ಎಂಟು ಅಪ್ರಾಪ್ತ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ವಾರದ ಆರಂಭದಲ್ಲಿ, ವಿದ್ಯಾರ್ಥಿಗಳು ಶೀಘ್ರವಾಗಿ ಪ್ರಾಂಶುಪಾಲರನ್ನು ಬದಲಾಯಿಸುವಂತೆ ಪ್ರತಿಭಟನೆಯನ್ನು ಪ್ರಾರಂಭಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸ್ ತಂಡ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಪ್ರತಿನಿಧಿಗಳು ಶಾಲೆಗೆ ಭೇಟಿ ನೀಡಿದ್ದರು.
ಸಂವಾದದ ಸಂದರ್ಭದಲ್ಲಿ, ಪ್ರತಿಭಟನಾನಿರತ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿನ ಸಿಬ್ಬಂದಿಯಿಂದ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಿದರು. ಅವರ ಹೇಳಿಕೆಗಳನ್ನು ಆಧರಿಸಿ, ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಒಂದೆರಡು ಸಿಬ್ಬಂದಿಯನ್ನು ಕರೆದೊಯ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಳೇಬೀಡು ಪೊಲೀಸರು ಐವರು ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ 2012, ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆ 2015 ಮತ್ತು ಕಲಂ 354(ಎ), ಭಾರತೀಯ ದಂಡ ಸಂಹಿತೆಯ (IPC) 509, 114 ಮತ್ತು 119 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪ್ರಾಂಶುಪಾಲರು ಸೇರಿದಂತೆ ಐವರ ವಿರುದ್ಧ ಜಾತಿ ದೌರ್ಜನ್ಯ ಮತ್ತು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.












Click it and Unblock the Notifications