Hasanamba Temple: ಹಾಸನಾಂಬ ದೇಗುಲದ ಬಾಗಿಲು ಓಪನ್: ಭಕ್ತರಿಗೆ ದರ್ಶನ ಕೊಟ್ಟ ಶಕ್ತಿ ದೇವತೆ
ಹಾಸನ, ಅಕ್ಟೋಬರ್ 24: ಹಾಸನದ ಶಕ್ತಿ ದೇವತೆ ಹಾಸನಾಂಬ ದೇವಿಯ ದೇಗುಲದ ಬಾಗಿಲನ್ನು ವರ್ಷಕ್ಕೊಮ್ಮೆ ತೆರೆದು ವಿವಿಧ ಪೂಜಾ ಕೈಂಕರ್ಯದೊಂದಿಗೆ ತಾಯಿಯ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡುವುದು ಹಿಂದಿನಿಂದಲೂ ನಡೆದು ಬಂದಿದೆ. ಅದರಂತೆ ಇಂದು (ಅಕ್ಟೋಬರ್ 24) ಗುರುವಾರ ಮಧ್ಯಾಹ್ನ ದೇವಾಲಯದ ಬಾಗಿಲು ತೆರೆಯಲಾಯಿತು.
ಅರಸು ವಂಶಸ್ಥರು ಬಾಳೆ ಗಿಡ ಕಡಿದ ನಂತರ ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ದೇಗುಲದ ಬಾಗಿಲನ್ನು ತೆರೆಯಲಾಗಿದ್ದು, ಹನ್ನೊಂದು ದಿನಗಳ ಕಾಲ ದೇವಿಗೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಲಿದೆ. ಇಂದಿನಿಂದ ನವೆಂಬರ್ 3ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು, ನಾಳೆಯಿಂದ ನವೆಂಬರ್ 2ರವರೆಗೆ ಭಕ್ತರಿಗೆ ದೇವರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಶಾಸಕರುಗಳಾದ ಎಚ್.ಪಿ.ಸ್ವರೂಪ್‌ಪ್ರಕಾಶ್, ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್‌ಪಟೇಲ್, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ತೆರೆಯಲಾಯಿತು.
ಹಾಸನಾಂಬೆ ದೇಗುಲದ ಬಾಗಿಲು ತೆರೆದ ನಂತರ ಮೊದಲ ದಿನದಂದು ತಾಯಿ ಹಾಸನಾಂಬೆಗೆ ಯಾವುದೇ ರೀತಿಯ ಆಭರಣಗಳನ್ನು ಧರಿಸುವ ಸಂಪ್ರದಾಯವಿಲ್ಲ. ಆದರೆ ಎರಡನೆಯ ದಿನ ಜಿಲ್ಲಾ ಖಜಾನೆಯಿಂದ ದೇವಿಯ ಆಭರಣ ವಸ್ತ್ರಗಳನ್ನು ಪಲ್ಲಕಿಯಲ್ಲಿ ತಂದು ಅಲಂಕರಿಸಿ ಪೂಜೆ ಮಾಡಿ ನೈವೇದ್ಯ ಅರ್ಪಿಸಲಾಗುವುದು. ಹಾಸನಾಂಬೆಯನ್ನು ಕುಂಭಗಳ ರೂಪದಲ್ಲಿ ಪ್ರತಿಷ್ಠಾಪಿಸಿ ಈ ಕುಂಭಗಳಿಗೆ ಹೆಣ್ಣು ದೇವತೆಯಂತೆ ಮುಖವಾಡಗಳನ್ನು ಮಾಡಿ ಅಲಂಕರಿಸುವುದು ಇಲ್ಲಿನ ವಿಶೇಷತೆಯಾಗಿದೆ.












Click it and Unblock the Notifications