ಹಾಸನ; ಬಿಜೆಪಿ-ಜೆಡಿಎಸ್ ಮೈತ್ರಿಗೆ ತಟ್ಟಿದ ಬಂಡಾಯದ ಬಿಸಿ!
ಹಾಸನ, ಮಾರ್ಚ್ 23: ಲೋಕಸಭೆ ಚುನಾವಣೆ 2024ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಮೈತ್ರಿಕೂಟದಲ್ಲಿ ಹಾಸನ ಕ್ಷೇತ್ರ ಜೆಡಿಎಸ್ ಪಾಲಾಗಿದೆ, ಪ್ರಜ್ವಲ್ ರೇವಣ್ಣ ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಗೆ ಮೈತ್ರಿ ಅಭ್ಯರ್ಥಿ. ಈ ಕುರಿತು ಜೆಡಿಎಸ್ ಅಧಿಕೃತ ಘೋಷಣೆ ಮಾಡುವುದು ಬಾಕಿ ಇದೆ.
ಹಾಸನದ ಹಾಲಿ ಸಂಸದರು ಆಗಿರುವ ಪ್ರಜ್ವಲ್ ರೇವಣ್ಣ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಗುರುವಾರ ಅವರು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಭೇಟಿಯಾಗಿ ಆಶೀರ್ವಾದ ಪಡೆದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದಾರೆ.

ಆದರೆ ಈಗ ಹಾಸನ ಕ್ಷೇತ್ರದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕ್ಷೇತ್ರದಲ್ಲಿ ನಡೆಯುತ್ತಿದ್ದ ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಕಲಹ ಈಗ ಬಹಿರಂಗವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯುವುದಕ್ಕೆ ಬಿಜೆಪಿ ನಾಯಕರು ವಿರೋಧ ಮಾಡಿದ್ದರು. ಅದು ಈಗ ಮತ್ತೊಂದು ಹಂತ ತಲುಪಿದೆ.
ನಾಮಪತ್ರಕ್ಕೆ ಪೂಜೆ, ಪ್ರಚಾರ ಆರಂಭ: ಹಾಸನದಲ್ಲಿ ಜೆಡಿಎಸ್ ನಾಯಕರ ವಿರುದ್ಧ ಹೋರಾಟ ನಡೆಸಿದ್ದ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ತಂಡ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗೆ ಪರ್ಯಾಯವಾಗಿ ಬಂಡಾಯ ಅಭ್ಯರ್ಥಿ ಕಣಕ್ಕಿಳಿಸಲು ತಯಾರಿ ನಡೆಸಿದೆ.
ಹಾಸನ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಚ್. ಪಿ. ಕಿರಣ್ ಕುಮಾರ್ ಮೈತ್ರಿ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಮೈತ್ರಿಯ ಕುರಿತು ಅಧಿಕೃತವಾಗಿ ಜಿಲ್ಲಾಮಟ್ಟದಲ್ಲಿ ಮಾತುಕತೆ ನಡೆಯದ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ನಾಮಪತ್ರದ ಅರ್ಜಿಗೆ ಪೂಜೆ ಸಲ್ಲಿಸಿದ್ದಾರೆ.
ಎಚ್.ಪಿ. ಕಿರಣ್ ಕುಮಾರ್ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂ ಗೌಡ ಆಪ್ತರು. ಕಿರಣ್ ಕುಮಾರ್ ಶನಿವಾರ ತಮ್ಮ ಬೆಂಬಲಿಗರ ಜೊತೆ ಹಾಸನದ ಸಿದ್ದೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಕೆ ಮಾಡಿ ಪ್ರಚಾರ ಆರಂಭಿಸಿದರು. ಇದು ಜೆಡಿಎಸ್ ನಾಯಕರಿಗೆ ತಲೆನೋವಾಗಿದೆ.
ಬಿಜೆಪಿ ನಾಯಕರು ಜಿಲ್ಲೆಯ ಪ್ರಭಾವಿ ನಾಯಕ ಪ್ರೀತಂ ಗೌಡರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಅಲ್ಲದೇ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ತಂದೆ ಎಚ್. ಡಿ. ರೇವಣ್ಣ, ತಾಯಿ ಭವಾನಿ ರೇವಣ್ಣ ಜೊತೆ ಪ್ರಚಾರ ಆರಂಭಿಸಿದ್ದಾರೆ. ಆದರೆ ಪ್ರೀತಂ ಗೌಡರ ಜೊತೆ ಮಾತುಕತೆ ನಡೆಸಿಲ್ಲ.
ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಡೆಗೆ ತಿರುಗೇಟು ನೀಡಲು ಮುಂದಾದ ಬಿಜೆಪಿ ನಾಯಕರು ಮೈತ್ರಿ ಅಭ್ಯರ್ಥಿ ಇನ್ನೂ ಘೋಷಣೆ ಆಗಿಲ್ಲ ಎಂದು ಪ್ರಚಾರ ಶುರು ಮಾಡಿದ್ದಾರೆ. ಈ ಕಲಹ ಹಾಸನ ಕ್ಷೇತ್ರದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಹಾಸನ ಜೆಡಿಎಸ್‌ನ ಭದ್ರಕೋಟೆ. ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ. ಹಾಸನ ಕ್ಷೇತ್ರಕ್ಕೆ ಕಾಂಗ್ರೆಸ್ ಎಂ. ಶ್ರೇಯಸ್ ಪಟೇಲ್ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಪ್ರಜ್ವಲ್ ರೇವಣ್ಣ ಅಭ್ಯರ್ಥಿಯಾಗುವುದಕ್ಕೆ ಬಿಜೆಪಿ ನಾಯಕರ ವಿರೋಧವಿತ್ತು. ಪ್ರಜ್ವಲ್ ರೇವಣ್ಣ ಹೆಸರು ಅಧಿಕೃತವಾಗಿ ಘೋಷಣೆ ಮಾಡದಿದ್ದರೂ ಸಹ ಅವರೇ ಅಭ್ಯರ್ಥಿ ಎಂಬುದು ಖಚಿತವಾಗಿದೆ.
ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಹಾಸನ ಕ್ಷೇತ್ರ ನಮಗೆ ಬೇಕು ಎಂದು ಜೆಡಿಎಸ್ ಬೇಡಿಕೆ ಇಟ್ಟಿತ್ತು. 2019ರಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಜೆಡಿಎಸ್ ಗೆದ್ದಿರುವುದು ಹಾಸನ ಕ್ಷೇತ್ರವನ್ನು ಮಾತ್ರ. ಆದರೆ ಈ ಬಾರಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು.
ಪ್ರಜ್ವಲ್ ಬದಲು ಜೆಪಿಯಿಂದ ಮಾಜಿ ಶಾಸಕ ಎ. ಟಿ. ರಾಮಸ್ವಾಮಿ, ಕಿರಣ್, ಸಿದ್ದೇಶ್ ನಾಗೇಂದ್ರಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಇತ್ತು. ಆದರೆ ಜೆಡಿಎಸ್ ನಾಯಕರ ಒತ್ತಾಯಕ್ಕೆ ಮಣಿದ ಬಿಜೆಪಿಗರು ಪ್ರಜ್ವಲ್ ರೇವಣ್ಣಗೆ ಟಿಕೆಟ್ ನಿರಾಕರಿಸುವ ಸಾಧ್ಯತೆ ತೀರಾ ಕಡಿಮೆ ಇತ್ತು. ಆದ್ದರಿಂದ ಪ್ರಜ್ವಲ್ ರೇವಣ್ಣ ಈಗಾಗಲೇ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಸನದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದು, ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯಲಿದ್ದಾರೆ ಎಂದು ಸುಳಿವು ಕೊಟ್ಟಿದ್ದಾರೆ. ಮಾರ್ಚ್ 25ರಂದು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದೆ.
ಹಾಸನ ಕ್ಷೇತ್ರದ ವ್ಯಾಪ್ತಿಯಲ್ಲಿ ಬೇಲೂರು ಮತ್ತು ಸಕಲೇಶಪುರದಲ್ಲಿ ಬಿಜೆಪಿ ಶಾಸಕರಿದ್ದಾರೆ. ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಪ್ರಭಾವಿ ನಾಯಕರು. ಹಾಸನದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು 2019ರ ಚುನಾವಣೆಯನ್ನು ಜೆಡಿಎಸ್ ಎದುರಿಸಿತ್ತು. ಮೊದಲ ಚುನಾವಣೆಯಲ್ಲಿಯೇ ಗೆದ್ದು ಪ್ರಜ್ವಲ್ ರೇವಣ್ಣ ಸಂಸದರಾಗಿದ್ದರು.
ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಚುನಾವಣೆ ಎದುರಿಸುತ್ತಿದೆ. 2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 676,606 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಬಿಜೆಪಿ ಪ್ರಜ್ವಲ್ ರೇವಣ್ಣ ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸಿತ್ತು. ಎ. ಮಂಜು 535,282 ಮತಗಳನ್ನು ಪಡೆದು ಸೋಲು ಕಂಡಿದ್ದರು.












Click it and Unblock the Notifications