Hassan Police constable: ಹಾಸನ ಎಸ್‌ಪಿ ಕಚೇರಿಯಲ್ಲಿಯೇ ಪತ್ನಿಗೆ ಚಾಕು ಇರಿದ ಪೊಲೀಸ್ ಪೇದೆ
ಹಾಸನ, ಜುಲೈ. 01: ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೋಮವಾರ (ಜುಲೈ 1) ಜಾರಿಗೆ ಬಂದಿದ್ದು, ಕರ್ನಾಟಕದಲ್ಲಿ ಮೊದಲ ಪ್ರಕರಣ ವರದಿಯಾಗಿದೆ. ಹಾಸನ ಜಿಲ್ಲಾ ಎಸ್‌ಪಿ ಕಚೇರಿಯಲ್ಲಿ ತನ್ನ ಪತ್ನಿಯನ್ನು ಕೊಂದ ಆರೋಪದ ಮೇಲೆ ಪೊಲೀಸ್ ಪೇದೆಯೊಬ್ಬರನ್ನು ಬಂಧಿಸಲಾಗಿದೆ.
ಆರೋಪಿಯನ್ನು ಲೋಕನಾಥ್ ಎಂದು ಗುರುತಿಸಲಾಗಿದ್ದು, ಈತ ತನ್ನ ಪತ್ನಿ ಮಮತಾ (37)ಗೆ ಚಾಕುವಿನಿಂದ ಇರಿದಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಲೋಕನಾಥ್ ಇಂತಹ ಕೃತ್ಯ ಎಸಗಿದ್ದಾರೆ. ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಘಟನೆ ನಡೆದಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿದ್ದು, ಇಂದು ಪತಿ ವಿರುದ್ಧ ದೂರು ನೀಡಲು ಬಂದಿದ್ದ ಎಸ್ಪಿ ಕಚೇರಿಗೆ ಬಂದಿದ್ದ ಪತ್ನಿ ಮಮತಾ ಮೇಲೆ ಹಲ್ಲೆ ಮಾಡಿದ್ದಾರೆ. ಚಾಕುವಿನಿಂದ ಇರಿದು ಕಾನ್ಸ್‌ಟೇಬಲ್ ಲೋಕನಾಥ್ ಸ್ಥಳದಿಂದ ಪರಾರಿಯಾಗಿದ್ದಾರೆ. ಅಲ್ಲಿದ್ದ ಪೊಲೀಸ್ ಅಧಿಕಾರಿಗಳು ಹಲ್ಲೆಗೊಳಗಾದ ಮಮತಾರನ್ನು ಹತ್ತಿರದ ಜಿಲ್ಲಾಸ್ಪತ್ರೆಗೆ ಆಸ್ಪತ್ರೆಗೆ ಸಾಗಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಶಾಂತಿಗ್ರಾಮ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಲೋಕನಾಥ್ ಪೊಲೀಸ್ ಪೇದೆಯಾಗಿ ಕೆಲಸ ನಿರ್ವಹಿಸುತ್ತಿದ್ದರು. 17 ವರ್ಷಗಳ ಹಿಂದೆ ಲೋಕನಾಥ್ ಹಾಗು ಮಮತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ ಇಬ್ಬರು ಮಕ್ಕಳಿದ್ದ ಕುಟುಂಬದಲ್ಲಿ ಕೌಟುಂಬಿಕ ಕಲಹವಿತ್ತು.
ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಯ ಪ್ರಕಾರ, ಇತ್ತೀಚೆಗೆ ಇಬ್ಬರ ನಡುವಿನ ಸಂಬಂಧ ಹಳಸಿತ್ತು. ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಾಸನ ನಗರ ಪೊಲೀಸರು ಬಿಎನ್‌ಎಸ್ ಸೆಕ್ಷನ್ 103 (ಕೊಲೆ ಮಾಡಿದವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ಮತ್ತು ದಂಡಕ್ಕೆ ಗುರಿಯಾಗುತ್ತಾರೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications