ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಎಸ್ಕೇಪ್: ಜರ್ಮನಿಗೆ ತೆರಳಿದೆಯಾ ಎಸ್‌ಐಟಿ ತಂಡ? ಗೃಹ ಸಚಿವರು ಬಿಚ್ಚಿಟ್ಟ ಗಂಭೀರ ಮಾಹಿತಿ ಏನು?
ಹಾಸನ, ಏಪ್ರಿಲ್, 28: ಅಶ್ಲೀಲ ವಿಡಿಯೋ ಪ್ರಕರಣ ಇಡೀ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದು, ಇದನ್ನು ಎಸ್‌ಐಟಿಗೆ ವಹಿಸುವುದಾಗಿ ಸರ್ಕಾರ ತೀರ್ಮಾನಿಸಿದೆ. ಇದರ ಬೆನ್ನಲೇ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಈ ಸಂಬಂಧ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ.ಪರಮೇಶ್ವರ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಅಶ್ಲೀಲ ವಿಡಿಯೋ ಪ್ರಕರಣ ಇದೀಗ ರಾಜ್ಯಾದಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಈ ಬೆನ್ನಲ್ಲೇ ಸಂಸದ ಪ್ರಜ್ವಲ್ ರೇವಣ್ಣ ಅವರು ಶನಿವಾರ (ಏಪ್ರಿಲ್ 28) ಮುಂಜಾನೆ 3 ಗಂಟೆ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜರ್ಮನಿಯ ಫ್ರಾಂಕ್ ಫರ್ಟ್‌ಗೆ ಹಾರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ ಅವರು, "ಈಗಾಗಲೇ ಅಶ್ಲೀಲ ವಿಡಿಯೋ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಒಪ್ಪಿಸಿದ್ದೇವೆ. ನಾವು ಒಂದು ಬಾರಿ ಎಸ್‌ಐಟಿಗೆ ವಹಸಿದರೆ, ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆಯೋ, ಅದು ಅವರಿಗೆ ಬಿಟ್ಟಿದ್ದು. ನಾವು ಅದಕ್ಕೆ ಅಡ್ಡಿಪಡಿಸುವ ಕೆಲಸವನ್ನು ಮಾಡುವುದಿಲ್ಲ," ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿರುವ ಬಗ್ಗೆ ಪ್ರತಿಕ್ರಿಯಿಸಿ, "ಒಂದು ವೇಳೆ ಅವರು ವಿದೇಶಕ್ಕೆ ಹೋಗಿದ್ದೇ ಆದರೆ ಎಸ್‌ಐಟಿ ತಂಡವೇ ಅವರನ್ನು ಕರೆತಂದು ತನಿಖೆ ಮಾಡುವ ಕೆಲಸವನ್ನು ಮಾಡುತ್ತದೆ. ನಾವು ಅವರಿಗೆ ತನಿಖೆಗೆ ಅಡ್ಡಿಯಾಗುವುದಿಲ್ಲ. ಇದನ್ನು ಎಸ್‌ಐಟಿ ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಮಾಡುತ್ತೇವೆ," ಎಂದು ತಿಳಿಸಿದ್ದಾರೆ.
ಸಂತ್ರಸ್ತ ಮಹಿಳೆಯರು ತಮಗಾಗಿರುವ ಅನ್ಯಾಯಕ ಬಗ್ಗೆ ಹೇಳಿಕೊಳ್ಳಲು ನಿಮ್ಮನ್ನು ಸಂಪರ್ಕಿಸಿದ್ದಾರಾ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, "ಚುನಾವಣೆಯಲ್ಲಿ ಕಾರ್ಯನಿರತರಾಗಿರುವುದರಿಂದ ನಮಗೆ ಯಾರೂ ಸಂಪರ್ಕ ಮಾಡಿಲ್ಲ. ಆದರೆ ಸಿಎಂ ಹಾಗೂ ಡಿಜಿ ಅವರಿಗೆ ಮಹಿಳಾ ಆಯೋಗದವರು ಈ ಬಗ್ಗೆ ಪತ್ರ ಬರೆದಿದ್ದಾರೆ. ಇದರ ಆಧಾರದ ಮೇಲೆ ತನಿಖೆ ಮಾಡಲಾಗುತ್ತದೆ. ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡಿದೆ," ಎಂದರು.
"ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ," ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡಿದ್ದರು.
"ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ," ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.












Click it and Unblock the Notifications