ಹಾಸನದಲ್ಲಿ ಮೈತ್ರಿ: ಬಿಎಸ್‌ವೈ ಆಶೀರ್ವಾದ ಪಡೆದ ಪ್ರಜ್ವಲ್
ಬೆಂಗಳೂರು, ಮಾರ್ಚ್ 21: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಮೈತ್ರಿಕೂಟದಲ್ಲಿ ಹಾಸನ ಕ್ಷೇತ್ರ ಜೆಡಿಎಸ್ ಪಾಲಾಗಿದೆ. ಏಪ್ರಿಲ್ 26ರಂದು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಹಾಸನ ಕ್ಷೇತ್ರಕ್ಕೆ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದೆ.
ಹಾಸನ ಕ್ಷೇತ್ರಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಇನ್ನೂ ಘೋಷಣೆಯಾಗಿಲ್ಲ. ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಅವರು ಇಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಭೇಟಿಯಾಗಿ ಆಶೀರ್ವಾದ ಪಡೆದರು.

ಗುರುವಾರ ಬೆಂಗಳೂರಿನ ನಿವಾಸದಲ್ಲಿ ಬಿ. ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರನ್ನು ಮಾಜಿ ಸಚಿವ ಎಚ್. ಡಿ. ರೇವಣ್ಣ, ಪ್ರಜ್ವಲ್ ರೇವಣ್ಣ ಭೇಟಿ ಮಾಡಿ ಮಾತುಕತೆ ನಡೆಸಿದರು. ಎನ್‌ಡಿಎ ಮೈತ್ರಿಕೂಟದ ಜೊತೆ ಮುಂದಿನ ಲೋಕಸಭಾ ಚುನಾವಣೆ ಹಾಗೂ ಪ್ರಚಾರ ತಂತ್ರದ ಬಗ್ಗೆ ಚರ್ಚಿಸಿದರು.
ಹಾಸನದಲ್ಲಿ ಮೈತ್ರಿ ಅಭ್ಯರ್ಥಿ: ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಜೆಡಿಎಸ್ ಬೇಡಿಕೆ ಇಟ್ಟ ಸೀಟುಗಳಲ್ಲಿ ಹಾಸನ ಸಹ ಒಂದಾಗಿದೆ. 2019ರ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯದಲ್ಲಿ ಗೆದ್ದ ಏಕೈಕ ಸೀಟು ಸಹ ಹಾಸನ. ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಈ ಕುರಿತು ಎಚ್. ಡಿ. ಕುಮಾರಸ್ವಾಮಿ ಈಗಾಗಲೇ ಸುಳಿವು ನೀಡಿದ್ದಾರೆ.
ಹಾಸನ ಕ್ಷೇತ್ರಕ್ಕೆ ಕಾಂಗ್ರೆಸ್ ಎಂ. ಶ್ರೇಯಸ್ ಪಟೇಲ್ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಪ್ರಜ್ವಲ್ ರೇವಣ್ಣ ಅಭ್ಯರ್ಥಿಯಾಗುವುದಕ್ಕೆ ಬಿಜೆಪಿ ನಾಯಕರ ವಿರೋಧ ಇದೆ ಎಂಬ ಸುದ್ದಿಯೂ ಇದೆ.
ಪ್ರಜ್ವಲ್ ರೇವಣ್ಣಗೆ ಬಿಜೆಪಿ ನಾಯಕರ ವಿರೋಧವಿದೆ ಎಂಬ ಸುದ್ದಿಗಳ ನಡುವೆಯೇ ರೇವಣ್ಣ, ಪ್ರಜ್ವಲ್ ರೇವಣ್ಣ ಇಂದು ಯಡಿಯೂರಪ್ಪ, ವಿಜಯೇಂದ್ರ ಭೇಟಿ ಮಾಡಿದ್ದಾರೆ. ಜೆಡಿಎಸ್ ಪಕ್ಷ ಮಾರ್ಚ್ 25ರಂದು ಕೋಲಾರ, ಹಾಸನ ಮತ್ತು ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ.
ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬೇಲೂರು ಮತ್ತು ಸಕಲೇಶಪುರದಲ್ಲಿ ಬಿಜೆಪಿ ಶಾಸಕರಿದ್ದಾರೆ. ಕಳೆದ ಬಾರಿ ಹಾಸನದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಚುನಾವಣೆ ಎದುರಿಸಿತ್ತು. ಮೊದಲ ಚುನಾವಣೆಯಲ್ಲಿಯೇ ಗೆದ್ದು ಪ್ರಜ್ವಲ್ ರೇವಣ್ಣ ಸಂಸತ್ ಪ್ರವೇಶ ಮಾಡಿದ್ದರು. ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ.
2019ರಲ್ಲಿ ಮೊಮ್ಮಗ ಪ್ರಜ್ವಲ್ ರೇವಣ್ಣಗಾಗಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹಾಸನ ಕ್ಷೇತ್ರ ಬಿಟ್ಟುಕೊಟ್ಟಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 676,606 ಮತಗಳನ್ನು ಪಡೆದು ಜಯಗಳಿಸಿ ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಿದರು.
ಕಳೆದ ಚುನಾವಣೆಯಲ್ಲಿ ಬಿಜೆಪಿ ಪ್ರಜ್ವಲ್ ರೇವಣ್ಣ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಎ. ಮಂಜು 535,282 ಮತಗಳನ್ನು ಪಡೆದು ಸೋಲು ಕಂಡಿದ್ದರು. ಈ ಬಾರಿ ಜೆಡಿಎಸ್-ಬಿಜೆಪಿ ಮೈತ್ರಿ ಕಾರಣ ಕಾಂಗ್ರೆಸ್ ಮತ್ತು ಮೈತ್ರಿಕೂಟದ ನಡುವೆ ಚುನಾವಣೆಯಲ್ಲಿ ಹೋರಾಟ ನಡೆಯಲಿದೆ.
ಜೆಡಿಎಸ್-ಬಿಜೆಪಿ ಮೈತ್ರಿ ಭಾಗವಾಗಿ ಜಿಲ್ಲೆಗಳಲ್ಲಿ ಎರಡೂ ಪಕ್ಷಗಳ ಕೋರ್ ಕಮಿಟಿ ಸಭೆ ನಡೆಯಲಿದೆ. ಬಳಿಕ ಪ್ರಚಾರದ ರೂಪುರೇಷೆ ತಯಾರಾಗಲಿದೆ. ಇದಕ್ಕೂ ಮೊದಲು ಅಧಿಕೃತವಾಗಿ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಲ್ಲಿ ಎಚ್. ಡಿ. ರೇವಣ್ಣ ವಿರುದ್ಧ ಕಣಕ್ಕಿಳಿದು ಸೋತಿದ್ದ ಕಾಂಗ್ರೆಸ್ ಎಂ. ಶ್ರೇಯಸ್ ಪಟೇಲ್ ಈಗ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಎದುರಾಳಿಯಾಗಿ ಅವರು ಕಣಕ್ಕಿಳಿಯುತ್ತಿದ್ದಾರೆ.












Click it and Unblock the Notifications