ಒಂದು ವಾರದೊಳಗೆ ಬೆಳೆ ಸಮೀಕ್ಷೆ ಮುಗಿಸಿ, ರೈತರಿಗೆ ನ್ಯಾಯಯುತ ಪರಿಹಾರ ತಲುಪಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಹಾವೇರಿ ನವೆಂಬರ್ 3: ಬೆಳೆ ಪರಿಹಾರ ಆನ್‌ಲೈನ್ ಮೂಲಕವೇ ರೈತರಿಗೆ ತಲುಪಲಿದ್ದು, ಅವರ ಮಾಹಿತಿ ಬಿಟ್ಟುಹೋದರೆ ಮ್ಯಾನ್ಯುವಲ್ ಆಗಿ ಅವರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ. ಹೀಗಾಗಿ ಶೇ.100 ರಷ್ಟು ಎಲ್ಲಾ ರೈತರ ಬೆಳೆ ಸಮೀಕ್ಷೆ ನಡೆಸಿ ಅವರಿಗೆ ನ್ಯಾಯಯುತ ಪರಿಹಾರ ತಲುಪಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಹಾವೇರಿಯಲ್ಲಿ ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, "ರಾಜ್ಯ ಈ ವರ್ಷ ಇತಿಹಾಸ ಕಾಣದ ಬರಕ್ಕೆ ತುತ್ತಾಗಿದೆ. ಮಳೆ ಇಲ್ಲದ ಕಾರಣ ರೈತರು ಪರಿತಪಿಸುವಂತಾಗಿದೆ. ಬೆಳೆ ಕೈಸೇರದೆ ಸಂಕಷ್ಟಕ್ಕೀಡಾಗಿದ್ದಾರೆ ಇಂತಹ ಸಂದರ್ಭದಲ್ಲಿ ನಾವು ರೈತರ ಪರ ನಿಲ್ಲಬೇಕಾಗಿದೆ. ಈ ಮಾತಿಗೆ ಬದ್ಧವಾಗಿ ಹಾವೇರಿ ಜಿಲ್ಲೆಯ ಎಲ್ಲಾ ತಾಲೂಕುಗಳನ್ನೂ ಬರಪೀಡಿತ ಎಂದು ಘೋಷಿಸಲಾಗಿದೆ.

Complete crop survey within a week, deliver fair compensation to farmers:Minister Krishna Byre Gowda

ಆದರೆ, ರೈತರಿಗೆ ನ್ಯಾಯಯುತ ಪರಿಹಾರ ತಲುಪಿಸಲು ಬೆಳೆ ಸಮೀಕ್ಷೆ ಅಗತ್ಯ. ಅಧಿಕಾರಿಗಳು ಹಾವೇರಿಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ನಡೆಸಿದ್ದೀರಿ. ಜಿಲ್ಲೆಯಲ್ಲಿ 2.29 ಲಕ್ಷ ರೈತರಿದ್ದಾರೆ. ಆದರೆ, ಈವರೆಗೆ ಎಲ್ಲಾ ರೈತರ ಸಂಪೂರ್ಣ ಭೂಮಿಯ ಸಮೀಕ್ಷೆಯಾಗಿಲ್ಲ . ಪರಿಸ್ಥಿತಿ ಹೀಗೆ ಮುಂದುವರೆದರೆ ಅನೇಕ ರೈತರಿಗೆ ಅನ್ಯಾಯವಾಗುತ್ತದೆ ಎಂದು ಕಿಡಿಕಾರಿದ ಸಚಿವರು, ಮುಂದಿನ ಒಂದು ವಾರದಲ್ಲಿ ಬೆಳೆ ಸಮೀಕ್ಷೆ ನಡೆಸಿ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಬೇಕು" ಎಂದು ಸಮಯದ ಗಡುವು ನೀಡಿದರು.

ಕುಡಿಯುವ ನೀರು ಪೂರೈಸಿ

ಹಾವೇರಿ ಭಾಗದಲ್ಲಿ ಎಲ್ಲೇ ಕುಡಿಯುವ ನೀರಿನ ಸಮಸ್ಯೆ ಉಂಟಾದರೂ ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಈ ವರ್ಷ ಬರಗಾಲ ಎದುರಾಗಿದೆ. ಮುಂದಿನ ಬೇಸಿಗೆ ಅಥವಾ ಅದಕ್ಕೂ ಮುನ್ನವೇ ಹಾವೇರಿ ಭಾಗದ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುತ್ತದೆ. ಹಾವೇರಿಯಲ್ಲಿ 220 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಅಧಿಕಾರಿಗಳು ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ ಎಂದು ಸರ್ವೆ ನಡೆಸಿ ನೀರಿನ ಸಮಸ್ಯೆ ಕಂಡುಬರುವ ಕಡೆಗಳಲ್ಲಿ ಖಾಸಗಿ ಟ್ಯಾಂಕರ್ ಮೂಲಕ ನೀರನ್ನು ಪೂರೈಸಿ. ಯಾವ ಭಾಗದಲ್ಲೂ ಸಾರ್ವಜನಿಕರು ನೀರಿನ ಸಮಸ್ಯೆ ಎದುರಿಸದಂತೆ ನೋಡಿಕೊಳ್ಳಿ, ಈ ಖರ್ಚಿಗೆ ಜಿಲ್ಲಾಧಿಕಾರಿಗಳ ಖಾತೆಯಿಂದ ಎಸ್ ಡಿ ಆರ್ ಎಫ್ ಹಣವನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.

Complete crop survey within a week, deliver fair compensation to farmers:Minister Krishna Byre Gowda

ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆರು ತಿಂಗಳ ಗಡುವು

ವಿಲೇವಾರಿಯಾಗದ ಬಗರ್ ಹುಕುಂ ಅರ್ಜಿಗಳ ಬಗ್ಗೆ ಗಮನ ಸೆಳೆದ ಸಚಿವ ಕೃಷ್ಣ ಬೈರೇಗೌಡ ಅವರು, "ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಸಾವಿರಾರು ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಅರ್ಜಿಗಳು ವಿಲೇವಾರಿಯಾಗದ ಕಾರಣ ರೈತರು ದಿನಂಪ್ರತಿ ಸರ್ಕಾರಿ ಕಚೇರಿಗಳಿಗೆ ಅಲೆಯುವಂತಾಗಿದೆ. ಇದು ಸರಿಯಲ್ಲ. ಹೀಗಾಗಿ ಈ ಎಲ್ಲಾ ಅರ್ಜಿಗಳನ್ನು ಮುಂದಿನ 6 ತಿಂಗಳಲ್ಲಿ ಬಾಕಿ ಉಳಿಸದಂತೆ ವಿಲೇವಾರಿಗೊಳಿಸಬೇಕು, ಅರ್ಹರಿಗೆ ಸಾಗುವಳಿ ಚೀಟಿ ನೀಡಬೇಕು" ಎಂದು ತಿಳಿಸಿದರು.

ಮುಂದುವರೆದು, "ಬಗರ್ ಹುಕುಂ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ಪ್ರಭಾವಿಗಳ ಅಥವಾ ರಾಜಕೀಯ ಪಕ್ಷದ ನಾಯಕರಿಗೆ ಅನುಕೂಲವಾಗುವಂತೆ ವರ್ತಿಸಬಾರದು, ಬದಲಾಗಿ ಬಡ ಜನರಿಗೆ ಮತ್ತು ಅರ್ಹರಿಗೆ ನ್ಯಾಯ ಒದಗಿಸಲು ಬದ್ಧರಾಗಿರಬೇಕು. ನಿಜಕ್ಕೂ ಉಳುಮೆಯಲ್ಲಿ ತೊಡಗಿರುವ ರೈತರಿಗೆ ಮಾತ್ರ ಸಾಗುವಳಿ ಚೀಟಿ ನೀಡಬೇಕು ಎಂದು ತಾಕೀತು ಮಾಡಿದರು.

ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆ್ಯಪ್‌

ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಅಲ್ಲದೆ, ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ? ಎಂದು ಪರಿಶೀಲಿಸುವುದು ಸಾಧ್ಯವಿಲ್ಲ.

ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯಸಮ್ಮತವಾಗಲಿದೆ. ಅಲ್ಲದೆ, ಶೀಘ್ರ ಪ್ರಕ್ರಿಯೆಗೂ ಈ ಆ್ಯಪ್ ಸಹಕಾರಿಯಾಗಲಿದೆ.

ಶೀಘ್ರದಲ್ಲೇ ಈ ಆ್ಯಪ್‌ ಅಧಿಕಾರಿಗಳ ಕೈಸೇರಲಿದೆ. ಈ ಆ್ಯಪ್‌ ಸಹಾಯದೊಂದಿಗೆ ಅಧಿಕಾರಿಗಳು ತ್ವರಿತಗತಿಯಲ್ಲಿ ಬಹರ್ ಹುಕುಂ ಅರ್ಜಿ ವಿಲೇವಾರಿಗೊಳಿಸಬಹುದು. ಅಲ್ಲದೆ, ಅರ್ಜಿ ವಿಲೇವಾರಿಯಾದ ನಂತರ ಅರ್ಹ ಫಲಾನುಭವಿಗಳಿಗೆ ಇ-ಸಾಗುವಳಿ ಚೀಟಿಯನ್ನೂ ತಂತ್ರಾಂಶದ ಮೂಲಕವೇ ಒದಗಿಸಬಹುದು. ಕಾವೇರಿ 2.0 ಮೂಲಕ ನೋಂದಣಿ ಮಾಡಿಸಿಕೊಟ್ಟರೆ ಜನರಿಗೂ ಅನುಕೂಲವಾಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ತಕರಾರು ಅರ್ಜಿಗಳ ವಿಲೇವಾರಿ, ಮೆಚ್ಚುಗೆ

ಕಳೆದ ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಕರಾರು ಪ್ರಕರಣಗಳ ಇತ್ಯರ್ಥ ವೇಗ ಪಡೆದುಕೊಂಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮೆಚ್ಚುಗೆ ಸೂಚಿಸಿದರು.

ಈ ಬಗ್ಗೆ ಮಾತನಾಡಿದ ಅವರು, "ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಎಸಿ ಕೋರ್ಟ್ ಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ 32,710 ಪ್ರಕರಣಗಳು ಇದ್ದವು. ಆದರೆ, ಕಳೆದ ಮೂರೇ ತಿಂಗಳಲ್ಲಿ 20,519 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳ ಕೋರ್ಟ್ ನಲ್ಲಿರುವ ಪ್ರಕರಣಗಳೂ ಸಹ ತ್ವರಿತ ಗತಿಯಲ್ಲಿ ಇತ್ಯರ್ಥವಾಗುತ್ತಿದೆ.

ತಕರಾರು ಪ್ರಕರಣಗಳ ಕಾರಣಕ್ಕೆ ಸಾರ್ವಜನಿಕರು ದಿನಂಪ್ರತಿ ಸರ್ಕಾರಿ ಕಚೇರಿಗಳಿಗೆ ಅಲೆಯುವಂತಾಗಿತ್ತು. ಆದರೆ, ಇದೀಗ ಅಧಿಕಾರಿಗಳು ಸೂಚನೆಯಂತೆ ತಕರಾರು ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸುತ್ತಿರುವುದು ಉತ್ತಮ ಬೆಳವಣಿಗೆ. ಮುಂದಿನ ದಿನಗಳಲ್ಲೂ ಸಹ ತ್ವರಿತಗತಿಯಲ್ಲಿ ಈ ಪ್ರಕರಣಗಳನ್ನು ಮುಗಿಸಿ ಜನರಿಗೆ ತುಸು ನೆಮ್ಮದಿ ನೀಡಿ ಎಂದರು.

ಕಂದಾಯ ಗ್ರಾಮ ಘೋಷಿಸಿ, ಬಡವರಿಗೆ ನ್ಯಾಯ ಸಲ್ಲಿಸಿ:

ಕಂದಾಯ ಇಲಾಖೆಗೆ ಸೇರದ ಕಾರಣ ಕಂದಾಯೇತರ ಜನವಸತಿ ನಿವಾಸಿಗಳು ಅಭಿವೃದ್ಧಿ ಯೋಜನೆಗಳಿಂದ ವಂಚಿತರಾಗುತ್ತಿದ್ದರು ಹೀಗಾಗಿ ಕರ್ನಾಟಕ ಭೂ ಕಂದಾಯ ಕಾಯಿದೆಗೆ ತಿದ್ದುಪಡಿ ತಂದು ತಾಂಡ-ಗೊಲ್ಲರಹಟ್ಟಿ ಸೇರಿದಂತೆ ಪ್ರದೇಶಗಳನ್ನು ಕಂದಾಯ ಗ್ರಾಮ ಎಂದು ಘೋಷಿಸಲು ಅನುವುಮಾಡಿಕೊಡಲಾಗಿತ್ತು.

ಸಾರ್ವಜನಿಕರ 30 ವರ್ಷಗಳ ಬೇಡಿಕೆಗೆ ಅನುಗುಣವಾಗಿ 2013ರ ಕಾಂಗ್ರೆಸ್ ಸರ್ಕಾರ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹತ್ವದ ನಿರ್ಧಾರ ತೆಗದುಕೊಂಡಿದ್ದರು. ಆದರೆ, ಹಾವೇರಿಯಲ್ಲಿ ಈ ಸಂಬಂಧ ಯಾವ ಕೆಲಸವೂ ಆಗದಿರುವುದು ವಿಷಾಧನೀಯ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು.

ಹಾವೇರಿ ಜಿಲ್ಲೆಯಲ್ಲಿ ಒಟ್ಟು 63 ಕಂದಾಯ ಗ್ರಾಮಗಳು ರಚನೆಯಾಗಬೇಕಿತ್ತು. ಆದರೆ, ಈವರೆಗೆ 37 ಗ್ರಾಮಗಳಿಗೆ ಮಾತ್ರ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ಅಂತಿಮ ಅಧಿಸೂಚನೆ ಹೊರಡಿಸದೆ ಫಲಾನುಭವಿಗಳಿಗೆ ಹೇಗೆ ಹಕ್ಕುಪತ್ರ ವಿತರಿಸಿದಿರಿ? ಎಂದು ಪ್ರಶ್ನಿಸಿದ ಸಚಿವರು, ಎಲ್ಲಾ ಅರ್ಹ ಗ್ರಾಮಗಳನ್ನು ಶೀಘ್ರ ಕಂದಾಯ ಗ್ರಾಮಗಳಾಗಿ ಘೋಷಿಸಿ, ಬಡವರ ಪರವಾಗಿ ಕೆಲಸ ಮಾಡಿ ಎಂದು ಸೂಚಿಸಿದರು.

ಸರ್ಕಾರಿ ಕಚೇರಿಗಳಿಗೆ ದಿಢೀರ್ ಭೇಟಿ, ಪರಿಶೀಲನೆ:

ಹಾವೇರಿ ಪ್ರಗತಿ ಪರಿಶೀಲನಾ ಸಭೆಗೆ ಮುನ್ನವೇ ಸಚಿವ ಕೃಷ್ಣ ಬೈರೇಗೌಡ ಅವರು, ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುರುವಾರ ಬೆಳಗ್ಗೆಯೇ ರಾಣೆಬೆನ್ನೂರು ತಾಲೂಕು ಕಚೇರಿಗೆ ಭೇಟಿ ನೀಡಿದರು. ಈ ವೇಳೆ ಅಲ್ಲಿನ ಕಚೇರಿ ಹೇಗೆ ಕಾರ್ಯನಿರ್ವಹಿಸುತ್ತಿದೆ, ಜನರ ಸಮಸ್ಯೆಗೆ ಅಧಿಕಾರಿಗಳು ಹೇಗೆ ಸ್ಪಂದಿಸುತ್ತಿದ್ದಾರೆ? ಎಂದು ವಿಚಾರಣೆ ನಡೆಸಿದರು. ಅಲ್ಲದೆ, ರೆಕಾರ್ಡ್ ರೂಂಗೂ ತೆರಳಿ ನೂರಾರು ವರ್ಷಗಳಷ್ಟು ಹಳೆಯ ಭೂ ದಾಖಲೆಗಳನ್ನು ಹೇಗೆ ರಕ್ಷಿಸಲಾಗುತ್ತಿದೆ ಎಂದು ಪರಿಶೀಲಿಸಿದರು. ಈ ವೇಳೆ ಎಲ್ಲಾ ಹಳೆಯ ದಾಖಲೆಗಳನ್ನೂ ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸುವಂತೆಯೂ ಸೂಚಿಸಿದರು. ನಂತರ ಕಾಗಿನೆಲೆ ನಾಡಕಚೇರಿಗೂ ಭೇಟಿ ನೀಡಿ ಪರಿಶೀಲಿಸಿದರು.

ಇ ಆಫೀಸ್ ಶೇ.100 ರಷ್ಟು ಬಳಕೆಗೆ ತಾಕೀತು!

ಸಭೆಯ ವೇಳೆ ಇ-ಆಫೀಸ್ ಬಳಕೆಯ ಬಗ್ಗೆಯೂ ಚರ್ಚೆ ನಡೆಸಿದ ಸಚಿವರು, ಹಾವೇರಿ ಬಹುತೇಕ ಎಲ್ಲಾ ತಾಲೂಕುಗಳಲ್ಲೂ ಇ-ಆಫೀಸ್ ಅನುಷ್ಠಾನಗೊಂಡಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಗಣನೀಯ ಪ್ರಮಾಣದಲ್ಲಿ ಇ-ಆಫೀಸ್ ಮೂಲಕವೇ ಕಡತ ವಿಲೇವಾರಿಯಾಗುತ್ತಿದೆ. ಇದು ನಿಜಕ್ಕೂ ಪ್ರಶಂಶನೀಯ ಎಂದು ಮೆಚ್ಚುಗೆ ಸೂಚಿಸಿದ ಸಚಿವರು, ಇ-ಆಫೀಸ್ ಬಳಕೆಯನ್ನು ಶೇ. ಶೇ.100ರಷ್ಟು ಅನುಷ್ಠಾನಗೊಳಿಸಬೇಕು ಎಂದರು. ಇ-ಆಫೀಸ್ ಮೂಲಕ ಕಡತ ವಿಲೇವಾರಿಗೆ ಮುಂದಾದರೆ, ಎಲ್ಲಾ ಕೆಲಸಗಳೂ ವೇಗ ಪಡೆಯುತ್ತದೆ. ಅಧಿಕಾರಿಗಳ-ಜನರ ಸಮಯವೂ ಉಳಿಯುತ್ತದೆ. ಹೀಗಾಗಿ ಶೀಘ್ರದಲ್ಲಿ ಹಾವೇರಿಯಲ್ಲೂ ಇ-ಆಫೀಸ್ ಅನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+