ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದವನಿಗೆ 10 ವರ್ಷ ಜೈಲು
ಹಾವೇರಿ, ಫೆಬ್ರವರಿ 04: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದ ಅಪರಾಧಿಗೆ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ, ದಂಡ ವಿಧಿಸಿದೆ.
ಮಂಜಪ್ಪ ಭೋಜಪ್ಪ ಚೌಡಣ್ಣನವರ್ ಅಪರಾಧಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆಯನ್ನು ಹಾವೇರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಿರಣ ಕಿಣಿ ಅವರು ತೀರ್ಪು ನೀಡಿದ್ದಾರೆ.
ಅಪರಾಧಿಯು ಹಂಸಭಾವಿ ಠಾಣಾ ವ್ಯಾಪ್ತಿಯ ಲಿಂಗಾಪುರ ಗ್ರಾಮದ ನಿವಾಸಿಯಾಗಿದ್ದು, ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದನು. ಬಲವಂತವಾಗಿ ಅತ್ಯಾಚಾರ ಮಾಡಿ ಮೋಸ ಮಾಡಿದ್ದನು.

ಅಲ್ಲದೇ ಯುವತಿಯ ಜಾತಿ ನಿಂದನೆ ಮಾಡಿದ್ದ ಎನ್ನಲಾಗಿದೆ. ಇದರಿಂದ ನೊಂದ ಯುವತಿ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ತನಿಖೆ ನಡೆಸಿದ ಠಾಣೆಯ ಪೊಲೀಸ್ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ, ಅಪರಾಧ ಸಾಬೀತಾಗಿದ್ದು, 10 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ, ದಂಡ ವಿಧಿಸಿ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸಿದ್ದಾರೂಢ.ಎಂ.ಗೆಜ್ಜಿಹಳ್ಳಿ ವಾದ ಮಂಡಿಸಿದರು.












Click it and Unblock the Notifications