ಹಾವೇರಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ, ಅಧಿವೇಶನ ನಂತರ ಉದ್ಘಾಟನೆ; ಸಿಎಂ ಬೊಮ್ಮಾಯಿ
ಹಾವೇರಿ, ಫೆಬ್ರವರಿ 12: ಮಧ್ಯ ಕರ್ನಾಟಕದ ಹಾವೇರಿ ಜಿಲ್ಲೆಗೆ ಪ್ರತ್ಯೇಕವಾದ ಹಾಲು ಒಕ್ಕೂಟ ಸ್ಥಾಪಿಸುವ ಪ್ರಕ್ರಿಯೆ ಅಂತಿಮ ಘಟ್ಟದಲ್ಲಿದ್ದು, ಬಜೆಟ್ ಅಧಿವೇಶನದ ನಂತರ ಪ್ರತ್ಯೇಕ ಮಾಡಿ ಉದ್ಘಾಟನೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶನಿವಾರದಂದು ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಹಿರೇಬೆಂಡಿಗೇರಿ ಗ್ರಾಮದಲ್ಲಿ ಸವಣೂರು ಏತ ನೀರಾವರಿ ಯೋಜನೆಯಡಿ 48 ಕೆರೆಗಳಿಗೆ ತುಂಬಿಸುವ ಯೋಜನೆಯಡಿ ತುಂಬಿರುವ ಕೆರೆಗೆ ಬಾಗಿನ ಅರ್ಪಿಸಿದ ನಂತರ ಮಾತನಾಡಿದರು.
ಹಾವೇರಿ ಜಿಲ್ಲೆಯ ಹಿರೇಬೆಂಡಿಗೇರಿ ಗ್ರಾಮದಲ್ಲಿ ಸವಣೂರು ಏತ ನೀರಾವರಿ ಯೋಜನೆಯಡಿ 48 ಕೆರೆಗಳಿಗೆ ತುಂಬಿಸುವ ಯೋಜನೆ ಪೂರ್ಣಗೊಂಡಿದೆ. ಸವಣೂರು ಕ್ಷೇತ್ರದಲ್ಲಿಯಲ್ಲದೆ, 14,000 ಎಕರೆ ನೀರಾವರಿ ಯೋಜನೆಗಳು ಪೂರ್ಣಗೊಳ್ಳಲಿವೆ. ಬ್ಯಾಡಗಿ ಹಾಗೂ ಹಾನಗಲ್ ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳನ್ನು ಅಧಿವೇಶನದ ನಂತರ ಉದ್ಘಾಟನೆಗೊಳ್ಳಲಿವೆ ಎಂದರು.

ರಾಜ್ಯದಲ್ಲಿ ಶಾಂತಿ ನೆಲಸಬೇಕು:
ಶಾಲಾ- ಕಾಲೇಜಿನಲ್ಲಿ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ "ರಾಜ್ಯದಲ್ಲಿ ಶಾಂತಿ ನೆಲಸಬೇಕು. ಉಚ್ಛ ನ್ಯಾಯಾಲಯದ ಆದೇಶವನ್ನು ಪರಿಪೂರ್ಣವಾಗಿ ಜಾರಿ ಮಾಡಬೇಕು. ಮಕ್ಕಳು ಯಾವುದೇ ಭೇದ-ಭಾವವಿಲ್ಲದೆ, ಒಮ್ಮನಸ್ಸಿನಿಂದ ಮೊದಲಿನಂತೆ ವಿದ್ಯಾರ್ಜನೆ ಮಾಡುವಂತೆ ಮಾಡುವುದು ನನ್ನ ಮೊದಲ ಕರ್ತವ್ಯ," ಎಂದು ತಿಳಿಸಿದರು.
ಆಯವ್ಯಯ
ರಾಜ್ಯದ ಆಯವ್ಯಯ ಪ್ರಕ್ರಿಯೆ ಪ್ರಾರಂಭವಾಗಿದೆ. ಬಹುತೇಕ ಎಲ್ಲಾ ಇಲಾಖೆಗಳ ಬೇಡಿಕೆಗಳ ಬಗ್ಗೆ ಚರ್ಚಿಸಲಾಗಿದೆ. ನಂತರ ಸಂಘ- ಸಂಸ್ಥೆಗಳೊಂದಿಗೆ ಚರ್ಚೆ ನಡೆಸಲಾಗುವುದು. ಕೇಂದ್ರ ಸರ್ಕಾರದ ಯೋಜನೆಗಳಿಗೆ ಪೂರಕವಾಗಿ ರಾಜ್ಯ ಸರ್ಕಾರದ ಯೋಜನೆಗಳನ್ನು ರೂಪಿಸಿ ಸಮಗ್ರ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಬಜೆಟ್ ಮಂಡನೆ ಮಾಡಲಾಗುವುದು ಎಂದು ಹೇಳಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರ ಸಾಲದ ಸುಳಿಯಲ್ಲಿ ಸಿಲುಕಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಕೋವಿಡ್ ಇಲ್ಲದ ಸಂದರ್ಭದಲ್ಲಿಯೂ ಅತಿ ಹೆಚ್ಚು ಸಾಲವನ್ನು ಮಾಡಿದ ಸರ್ಕಾರ ಎಂಬ ಶ್ರೇಯಸ್ಸು ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ಹಿಂದಿನ ಸಾಲಗಳನ್ನು ನಿಭಾಯಿಸಿ, ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಹಿಂಜರಿತವನ್ನೂ ನಿಭಾಯಿಸಿ, ಆರ್ಥಿಕತೆ ಚೇತರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಸಂಪನ್ಮೂಲಗಳನ್ನು ಹೆಚ್ಚಿಸಲು ಸರ್ವ ಪ್ರಯತ್ನವನ್ನೂ ನಮ್ಮ ಸರ್ಕಾರದಿಂದ ಮಾಡಲಾಗುತ್ತಿದೆ. ಎಲ್ಲವನ್ನೂ ಸರಿದೂಗಿಸಿ ಆಯವ್ಯಯವನ್ನು ಮಂಡಿಸಲಾಗುವುದು ಎಂದರು.
ರಾಷ್ಟ್ರಕವಿ
ಕನ್ನಡ ಸಾಹಿತ್ಯ ಪರಿಷತ್ ಅಭಿಲಾಷೆಯಂತೆ ಹಿರಿಯ ಕವಿ ಚನ್ನವೀರ ಕಣವಿ ಅವರಿಗೆ ರಾಷ್ಟ್ರಕವಿ ಬಿರುದು ನೀಡಬೇಕೆನ್ನುವ ಬೇಡಿಕೆಯನ್ನು ಪರಿಗಣಿಸಿ ಶಿಫಾರಸ್ಸು ಮಾಡಲಾಗುವುದು ಎಂದು ಭರವಸೆ ನೀಡಿದರು.












Click it and Unblock the Notifications