Karnataka ByPoll: ಶಿಗ್ಗಾವಿ ಬಿಜೆಪಿಯಲ್ಲಿ ಬಂಡಾಯ ಶುರುವಾಯ್ತಾ: ಬೊಮ್ಮಾಯಿ ಹೇಳೋದೇನು
ಹಾವೇರಿ, ಅಕ್ಟೋಬರ್ 23: ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸ್ವಕ್ಷೇತ್ರದ ಮಾಜಿ ಸಿಎಂ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ಅನ್ಯಾಯ ಮಾಡಿದ್ದ ಆರೋಪ ಎದುರಿಸಿದ್ದರು. ಇದರ ಬೆನ್ನಲ್ಲೆ ಶಿಗ್ಗಾವಿ ಬಿಜೆಪಿಯಲ್ಲಿ ಬಂಡಾಯ ಶುರುವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಈ ಸಂಬಂಧ ಬಸವರಾಜ ಬೊಮ್ಮಾಯಿ ಅವರು ಖಡಕ್ ಉತ್ತರ ಕೊಟ್ಟಿದ್ದಾರೆ.
ಶಿಗ್ಗಾವಿ ಕ್ಷೇತ್ರದಲ್ಲಿ ಉಚ ಚುನಾವನೆ ಎದುರಿಸುವ ಕೆಲಸ ನಡೆಯುತ್ತಿದೆ. ಇಲ್ಲಿನ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ನೆನ್ನೆ ಸೋಮವಾರವಷ್ಟೇ ಶಿಗ್ಗಾವಿ ಟಿಕೆಟ್ ವಿಚಾರವಾಗಿ ತಮ್ಮಿಂದ ಯಾವುದೇ ಅನ್ಯಾಯವಾಗಿಲ್ಲ. ನಾನು ಯಾರಿಗೂ ಟಿಕೆಟ್ ಕೊಡಿಸುವುದಾಗಿ ಭರವಸೆ ಕೊಟ್ಟಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಹಾವೇರಿಯಲ್ಲಿ ಬುಧವಾರ ಶಿಗ್ಗಾವಿ ಕ್ಷೇತ್ರದ ಬಿಜೆಪಿಯಲ್ಲಿ ಬಿಜೆಪಿಗೆ ಬಂಡಾಯ ಎದುರಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆಯ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ಸಹಜ. ಕಾಂಗ್ರೆಸ್ ಅಭ್ಯರ್ಥಿ ಯಾರೇ ನಿಂತರೂ ಕೂಡ ನಾವು ಚುನಾವಣೆಯನ್ನು ಅತ್ಯಂತ ಸ್ಪರ್ಧಾತ್ಮಕವಾಗಿ ಮಾಡುತ್ತೇವೆ. ಮತ್ತು ಸೌಹಾರ್ದಯುತವಾಗಿ ಚುನಾವಣೆ ಎದುರಿಸುತ್ತೇವೆ ಎಂದರು.
ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆಯ ದಿನ ಬಿಜೆಪಿ ರಾಜ್ಯ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ಆಗಮಿಸಲಿದ್ದಾರೆ ಎಂದು ಅವರು ಮಾಹಿತಿ ಕೊಟ್ಟರು.

ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಯೇ ಇರಲಿಲ್ಲ: ಬೊಮ್ಮಾಯಿ ಟಾಂಗ್
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿ.ಪಿ ಯೋಗೇಶ್ವರ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಬಹಳ ಪ್ರಯತ್ನ ಮಾಡಿದ್ದೇವೆ. ಅವರು ಕಾಂಗ್ರೆಸ್ ಸೇರಿರುವುದು ದೊಡ್ಡ ದುರಂತ. ಕಾಂಗ್ರೆಸ್‌ಗೆ ಯಾರೂ ಅಭ್ಯರ್ಥಿ ಇರಲಿಲ್ಲ ಎಂದು ಅವರು ಟಾಂಗ್ ಕೊಟ್ಟರು.
ಅಲ್ಲಿ ಸುಲಭವಾಗಿ ಎನ್‌ಡಿಎ ಅಭ್ಯರ್ಥಿ ಗೆಲ್ಲಬಹುದು. ಈಗಲೂ ಆ ಕ್ಷೇತ್ರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪ್ರಭಾವ ಇದೆ. ಹಿಂದೆ ಬಿಜೆಪಿ ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷಗಳು ಸ್ಪರ್ಧೆ ಮಾಡಿ ತಿಕೋನ ಸ್ಪರ್ಧೆ ಇದ್ದಾಗಲೂ ಕುಮಾರಸ್ವಾಮಿ ಅವರು ಗೆಲುವು ಸಾಧಿಸಿದ್ದಾರೆ. ಈ ಉಪ ಚುನಾವಣೆಯಲ್ಲಿಯೂ ಜೆಡಿಎಸ್ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications