ಹಾವೇರಿಯಲ್ಲಿ ಅವಘಡ..! ಹಾರಿ ಹೋಯ್ತು ಸಿಎಂ ಸಿದ್ದರಾಮಯ್ಯ ಇದ್ದ ಪೆಂಡಾಲ್
ಹಾವೇರಿಯ ಶಿಗ್ಗಾಂವಿ ಕ್ಷೇತ್ರದಲ್ಲಿ ಉಪಚುನಾವಣೆಯ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರಕ್ಕೆ ತೆರಳಿದ್ದು, ಈ ವೇಳೆ ಭಾರಿ ಅವಘಡವೊಂದು ನಡೆದಿದೆ. ಸಿದ್ದರಾಮಯ್ಯ ಅವರಿದ್ದ ವೇದಿಕೆ ಮುಂಭಾಗವೇ ಹಾಕಲಾಗಿದ್ದ ಶಾಮಿಯಾನವು ಜೋರಾದ ಗಾಳಿಗೆ ಅಲುಗಾಡಿ ಹಾರಿ ಹೋಗಿದೆ.
ಹಾವೇರಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರ್ಯಕ್ರಮ ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಜೋರಾದ ಗಾಳಿ ಬೀಸಿದ ಪರಿಣಾಮ ಶಾಮಿಯಾನ ಗಾಳಿಗೆ ಅತ್ತಿತ್ತ ಅಲುಗಾಡಿದೆ. ಕೂಡಲೇ ಅಲ್ಲಿದ್ದ ಪೊಲೀಸ್ ಸಿಬ್ಬಂದಿ ಹಾಗೂ ಇತರರು ಹಾರುವ ಸ್ಥಿತಿಯಲ್ಲಿದ್ದ ಶಾಮಿಯಾನವನ್ನು ಭದ್ರಪಡಿಸಲು ಮುಂದಾದರು.

ಆದರೂ, ಜೋರಾದ ಗಾಳಿಗೆ ಶಾಮಿಯಾನದ ಮೇಲ್ಛಾವಣಿ ಹಾರಿ ಹೋಯಿತು. ಇನ್ನು ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸ್ಥಳೀಯ ನಾಯಕರು ಆಸೀನರಾಗಿದ್ದರು. ಈ ಘಟನೆಯಿಂದ ಅಲ್ಲಿದ್ದವರೆಲ್ಲ ಗಲಿಬಿಲಿಗೊಂಡರು. ಆದರೆ, ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ ಎಂದು ವರದಿಯಾಗಿದೆ.
ಗೆದ್ದೇ ಗೆಲ್ತೀವಿ: ಇದಕ್ಕೂ ಮುನ್ನ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಮತ್ತು ನಾಳೆ ಎರಡು ದಿನ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಹಿಂದೆಯೂ ಪ್ರಚಾರ ಮಾಡಿದ್ದೇನೆ. ಕೊನೆಯಲ್ಲಿ ಅಭ್ಯರ್ಥಿಯನ್ನು ನಿಗದಿ ಮಾಡಿದ್ದರಿಂದ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇಲ್ಲಿಗೆ ಭೇಟಿ ನೀಡಲಾಗಲಿಲ್ಲ ಎಂದರು.

ಈ ಬಾರಿ ಮೂರು ದಿನ ಶಿಗ್ಗಾಂವಿಗೆ ಭೇಟಿ ನೀಡುತ್ತಿದ್ದು, ಶಿಗ್ಗಾಂವಿಯಲ್ಲಿ ನೂರಕ್ಕೆ ನೂರು ಗೆಲ್ಲಲಿದ್ದೇವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಲೀಡ್ ಬಂದಿತ್ತು. ಈ ಬಾರಿಯೂ ಕೂಡ ನಮಗೆ ಮುನ್ನಡೆ ದೊರೆಯುವ ಪರಿಸ್ಥಿತಿ ಇದ್ದು, ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಸದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚೂ ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು. ಈಗ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ತಿರುಗೇಟು ನೀಡಿದರು.

ಬಿಜೆಪಿಯವರು ಗ್ಯಾರಂಟಿಗೆ ವಿರುದ್ಧವಾಗಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲ ಜಾತಿ ಧರ್ಮದವರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬುತ್ತಿದ್ದೇವೆ. ಅವರು ಮುಖ್ಯವಾಹಿನಿಗೆ ಬರಬೇಕೆಂದು ಈ ಕೆಲಸ ಮಾಡುತ್ತಿದ್ದೇವೆ. ಬಿಜೆಪಿಯವರಿಗೆ ಸಮಾನತೆ ಬರಬಾರದು. ಬಡವರು ಬಡವರಾಗಿಯೇ ಇರಬೇಕು. ಅದಕ್ಕೆ ಬಿಜೆಪಿ ಅವರನ್ನು ಬಡವರ ವಿರೋಧಿಗಳು ಎಂದು ಕರೆಯುವುದು ಎಂದು ಟಾಂಗ್ ನೀಡಿದರು.
ಜನರಲ್ಲಿ ಶಕ್ತಿ ಇಲ್ಲದಿದ್ದರೆ ತಾನೇ ಅವರನ್ನು ದುರುಪಯೋಗ ಮಾಡಿಕೊಳ್ಳಲು ಸಾಧ್ಯವಾಗುವುದು. ಆರ್ಥಿಕ, ಸಾಮಾಜಿಕ ಶಕ್ತಿ ಬಡವರಿಗೆ ಬರಬಾರದೆಂಬ ತತ್ವದಲ್ಲಿ ಬಿಜೆಪಿಗೆ ನಂಬಿಕೆ ಇದೆ. ಬಿಜೆಪಿ ಪಕ್ಷ 600 ಭರವಸೆಗಳನ್ನು 2018ರಲ್ಲಿ ನೀಡಿತ್ತು. ಅವುಗಳಲ್ಲಿ ಎಷ್ಟು ಈಡೇರಿಸಿದ್ದಾರೆ? ನಾವು 165 ಭರವಸೆ ಕೊಟ್ಟು 158 ಈಡೇರಿಸಿದ್ದಾಗಿ ಲೆಕ್ಕ ಕೊಡುತ್ತಿದ್ದೇವೆ. ಅವರು ಎಷ್ಟು ಭರವಸೆ ನೀಡಿ ಎಷ್ಟನ್ನು ಈಡೇರಿಸಿದ್ದಾರೆ ಎನ್ನುವ ಲೆಕ್ಕ ಕೊಡುತ್ತಾರೆಯೇ? ಎಂದು ಪ್ರಶ್ನಿಸಿದರು.












Click it and Unblock the Notifications